ಯಲ್ಲಾಪುರದಲ್ಲಿ ಕಾರು- ಲಾರಿ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು
ಯಲ್ಲಾಪುರ, ಸೆಪ್ಟೆಂಬರ್ 25: ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಯಲ್ಲಾಪುರ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 63 ಹೊಸಳ್ಳಿ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ.
ದೆಹಲಿ ಪಾಸಿಂಗ್ ಇರುವ ಕೆಂಪು ಕಾರು ಎದುರಿನಿಂದ ಬರುತ್ತಿರುವ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಸುಮಾರು 40 ವರ್ಷದ ಒಳಗಿನ ಮೂವರು ಹಾಗೂ ವೃದ್ಧ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ ಎನ್ನಲಾಗಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ಪ್ರವಾಸಕ್ಕೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.












Click it and Unblock the Notifications