ಮುರುಡೇಶ್ವರ: ವಿದ್ಯಾರ್ಥಿಗಳು ಸುರಕ್ಷಿತವಾಗಿ ಕೋಲಾರ ತಲುಪಲು ವ್ಯವಸ್ಥೆ ಮಾಡಿದ ಪೊಲೀಸರು
ಕಾರವಾರ, ಡಿಸೆಂಬರ್ 11: ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ಕೋಲಾರ ಜಿಲ್ಲೆಯ ಮುಳುಬಾಗಿಲು ಮೂರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಉತ್ತರ ಕನ್ನಡ ಪೊಲೀಸರು ಸುರಕ್ಷಿತವಾಗಿ ಕಳಿಸಿಕೊಟ್ಟಿದ್ದಾರೆ. ಮುರುಡೇಶ್ವರ ಸಮುದ್ರ ತೀರದಲ್ಲಿ ಮಂಗಳವಾರ ಸಂಜೆ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಎಲ್ಲಾ ಶವಗಳನ್ನು ಹೊರತೆಗೆಯಲಾಗಿದೆ. ಶವಗಳನ್ನು ಗ್ರಾಮಗಳಿಗೆ ಕಳಿಸಲು ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಡಳಿತಕ್ಕೆ ಸೂಚನೆಯನ್ನು ಕೊಟ್ಟಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ಸಂತಾಪವನ್ನು ಸೂಚಿಸಿದ್ದಾರೆ.
ಮಂಗಳವಾರ ಸಂಜೆ . ಓರ್ವ ವಿದ್ಯಾರ್ಥಿನಿ ಶ್ರಾವಂತಿ (15) ಶವವಾಗಿ ಪತ್ತೆಯಾಗಿತ್ತು. ನಾಪತ್ತೆಯಾಗಿದ್ದ ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಶವಗಳನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಬುಧವಾರ ಪತ್ತೆ ಮಾಡಿ, ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಉಳಿದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕೋಲಾರಕ್ಕೆ ವಿಶೇಷ ಬಸ್ ಮೂಲಕ ವಾಪಸ್ ಕಳಿಸಲಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಸೇರಿದಂತೆ ಒಟ್ಟು 57 ಜನರು ಬಸ್‌ನಲ್ಲಿ ಮುರುಡೇಶ್ವರಕ್ಕೆ ಬಂದಿದ್ದರು. ಮಂಗಳವಾರ ಸಂಜೆ ಸಮುದ್ರ ತೀರದಲ್ಲಿ ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಹಲವರನ್ನು ರಕ್ಷಣಾ ತಂಡದವರು ರಕ್ಷಣೆ ಮಾಡಿದ್ದರು. ಆದರೆ ನಾಲ್ವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ.
ಪ್ರವಾಸಿಗರಿಗೆ ಬೀಚ್‌ಗೆ ನಿಷೇಧ: ಈ ಘಟನೆ ಬಳಿಕ ಮುರುಡೇಶ್ವರ ಬೀಚ್‌ನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪ್ರವಾಸಿಗರ ಸುರಕ್ಷತೆಯ ಹಿತದೃಷ್ಠಿಯಿಂದ ಬೀಚ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸರು ದಿನಾಂಕ 10-12-2024ರಂದು ಕೋಲಾರ ಜಿಲ್ಲೆಯ ಮುಳುಬಾಗಿಲು ಮೂರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಬಂದಿದ್ದು, ವಿದ್ಯಾರ್ಥಿಗಳು ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಒಬ್ಬ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದು, ಇನ್ನೂ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು ಎಂದು ತಿಳಿಸಿದ್ದಾರೆ.
ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾಡಳಿತದಿಂದ ಕಾಣೆಯಾದ ಮೂವರು ವಿದ್ಯಾರ್ಥಿನಿಯರ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ನಿರಂತರವಾಗಿ ಕಾರ್ಯಾಚರಣೆ ಮುಂದುವರೆಸಿ ಕಾಣೆಯಾಗಿದ್ದ ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ಮುರುಡೇಶ್ವರ ದೇವಾಲಯದ ಹಿಂಬದಿಯ ಅರಬ್ಬಿ ಸಮುದ್ರದಲ್ಲಿ ಬುಧವಾರ ಪತ್ತೆ ಮಾಡಲಾಗಿದೆ. ಈ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಉಳಿದ ವಿದ್ಯಾರ್ಥಿಗಳನ್ನು ಹಾಗೂ ಅವರ ಸಾಮಗ್ರಿ, ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯರವರ ಮುಂದಾಳತ್ವದಲ್ಲಿ ಮುರುಡೇಶ್ವರದಿಂದ ಕೋಲಾರದ ಮುಳುಬಾಗಿಲಿಗೆ ಸುರಕ್ಷಿತವಾಗಿ ತಲುಪಿಸುವ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿದ್ದಾರೆ.
ಪರಿಹಾರ ಘೋಷಣೆ ಮಾಡಿದ ಸಿಎಂ: ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿರುವ ಸಿದ್ದರಾಮಯ್ಯ, 'ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು' ಎಂದು ತಿಳಿಸಿದ್ದಾರೆ.
'ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ' ಎಂದು ಹೇಳಿದ್ದಾರೆ.
'ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.












Click it and Unblock the Notifications