ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್: ಉತ್ತರ ಕನ್ನಡದಲ್ಲಿ ಮದುವೆಗೆ 50 ಜನ ಮಾತ್ರ, ದೇವಾಲಯಗಳಲ್ಲಿ ಸೇವೆ ಬಂದ್!

|
Google Oneindia Kannada News

ಕಾರವಾರ, ಆಗಸ್ಟ್ 04: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಆತಂಕದ ನಡುವೆ ಉತ್ತರ ಕನ್ನಡದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ದಿನೇ‌ ದಿನೇ ಏರಿಕೆಯಾಗುತ್ತಿದೆ. ತಿಂಗಳ ಹಿಂದಿನವರೆಗೂ 30- 40 ಪ್ರಕರಣಗಳು ದಾಖಲಾಗುತ್ತಿದ್ದ ಜಿಲ್ಲೆಯಲ್ಲಿ ಇತ್ತೀಚೆಗೆ 70 ರಿಂದ 80 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡದಂತೆ ತಡೆಯಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತೆ ಕಠಿಣ ನಿಯಮಗಳನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಸ್ಥಿತಿಗತಿಯನ್ನು ಆಧರಿಸಿ ಸೋಂಕಿನ ನಿಯಂತ್ರಣಕ್ಕಾಗಿ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿನ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ, ವಿಪತ್ತು ನಿರ್ವಹಣಾ ಕಾಯಿದೆ 2005ರ ಕಲಂ 34ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಜಿಲ್ಲೆಯಾದ್ಯಂತ ಪ್ರಚಲಿತದಲ್ಲಿರುವ ಸರ್ಕಾರದ ಮಾರ್ಗಸೂಚಿಗೆ ಹೆಚ್ಚುವರಿಯಾಗಿ ಇನ್ನಷ್ಟು ಕ್ರಮಗಳನ್ನು ಮುಂದಿನ ಆದೇಶದವರೆಗೆ ಕೈಗೊಳ್ಳಲು ಆದೇಶಿಸಿದ್ದಾರೆ. ಹಾಗಿದ್ದರೆ ಏನದು ಆದೇಶಗಳು, ಮುಂದೆ ಓದಿ...

ದೇವಸ್ಥಾನಗಳಲ್ಲಿ ಸೇವೆಗೆ ಅವಕಾಶ ಇಲ್ಲ

ದೇವಸ್ಥಾನಗಳಲ್ಲಿ ಸೇವೆಗೆ ಅವಕಾಶ ಇಲ್ಲ

ದೇವಸ್ಥಾನ ಹಾಗೂ ಇತರ ಧಾರ್ಮಿಕ ಸ್ಥಳಗಳಲ್ಲಿ ಸೇವಾ ಕಾರ್ಯಗಳಿಗೆ ಅವಕಾಶವಿರುವುದಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ದೇವಸ್ಥಾನ, ಧಾರ್ಮಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯು ಕಡ್ಡಾಯವಾಗಿದ್ದು, ಅದರ ನಿರ್ವಹಣೆಯು ಆಯಾ ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿರುತ್ತದೆ. ದೇವಸ್ಥಾನ/ ಧಾರ್ಮಿಕ ಸ್ಥಳಗಳಲ್ಲಿ ದಿನಕ್ಕೆ ಒಂದು ಬಾರಿ ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಬೇಕು ಎಂದು ಅವರು ಆದೇಶಿಸಿದ್ದಾರೆ.

ಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶ

ಮದುವೆಗೆ 50 ಮಂದಿಗೆ ಭಾಗವಹಿಸಲು ಮಾತ್ರ ಅವಕಾಶ

ಮದುವೆಗೆ 50 ಮಂದಿಗೆ ಭಾಗವಹಿಸಲು ಮಾತ್ರ ಅವಕಾಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೇವಲ 50 ಜನರಿಗೆ ಮಾತ್ರ ಅವಕಾಶ ನೀಡಿ ಆದೇಶಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಆಯಾ ತಾಲೂಕಾ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯನ್ನು ಆಯಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಓ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮದುವೆ ಕಾರ್ಯಕ್ರಮದಲ್ಲಿ ಹಾಜರಿದ್ದವರ ವಿವರಗಳನ್ನು ಮೊಬೈಲ್ ಸಂಖ್ಯೆಯೊಂದಿಗೆ ಸಂಗ್ರಹಿಸಬೇಕಿದೆ. ಮದುವೆ ಕಾರ್ಯಕ್ರಮಕ್ಕೆ ಹಾಜರಿದ್ದವರು ಇದೇ ಜಿಲ್ಲೆಯವರಾಗಿದ್ದಲ್ಲಿ ಎರಡು ದಿನಗಳ ಒಳಗಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಆರ್‌ಟಿ- ಪಿಸಿಆರ್ ಪ್ರಮಾಣಪತ್ರ ಕಡ್ಡಾಯ

ಆರ್‌ಟಿ- ಪಿಸಿಆರ್ ಪ್ರಮಾಣಪತ್ರ ಕಡ್ಡಾಯ

ಉತ್ತರ ಕನ್ನಡ ಜಿಲ್ಲೆಯ ಗಡಿಭಾಗ, ರೈಲ್ವೆ ಸ್ಟೇಷನ್‌ಗಳಲ್ಲಿ ಹೊರರಾಜ್ಯದಿಂದ ಬರುವಂತಹ ಜನರ ಮೇಲೆ ಹೆಚ್ಚು ನಿಗಾವಹಿಸುವುದು ಹಾಗೂ ರಿಜಿಸ್ಟರ್‌ಗಳನ್ನು ನಿರ್ವಹಿಸಲು ಅವರು ಸೂಚಿಸಿದ್ದಾರೆ. ವಿಶೇಷವಾಗಿ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯದಿಂದ ಬರುವಂತಹ ಜನರು ಕೋವಿಡ್ ಲಸಿಕೆಯನ್ನು ಪಡೆದಿದ್ದರೂ ಪಡೆಯದಿದ್ದರೂ 72 ಗಂಟೆಯೊಳಗೆ ಮಾಡಿಸಿರುವ RTPCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.

ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ಜಿಲ್ಲೆಯ ಪ್ರವಾಸಿ ತಾಣಗಳು/ ಬೀಚ್‌ಗಳಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ಪ್ರವಾಸಿ ತಾಣಕ್ಕೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಕೋವಿಡ್ ಮಾರ್ಗಸೂಚಿಯ ಕಟ್ಟುನಿಟ್ಟಿನ ಪಾಲನೆಯು ಆಯಾ ಪೊಲೀಸ್ ವೃತ್ತ ನಿರೀಕ್ಷಕರ ಜವಾಬ್ದಾರಿಯಾಗಿದೆ ಎಂದೂ ಅವರು ತಿಳಿಸಿದ್ದಾರೆ. ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕರು ಕೋವಿಡ್ ಸಮಯೋಚಿತ ವರ್ತನೆಗಳಾದ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಪಾಲಿಸುವುದರೊಂದಿಗೆ ಕೋವಿಡ್ ನಿಯಂತ್ರಣ ಮಾಡುವಲ್ಲಿ ಸಹಕರಿಸಬೇಕಿದೆ.

Recommended Video

ಪ್ರಧಾನಿ ನಿವಾಸವನ್ನೇ ಬಾಡಿಗೆಗಿಟ್ಟ ಪಾಕಿಸ್ತಾನ ಸರ್ಕಾರ! | Oneindia Kannada
ಆದೇಶ ಉಲ್ಲಂಘಿಸುವವರ ವಿರುದ್ಧ ಕ್ರಮ

ಆದೇಶ ಉಲ್ಲಂಘಿಸುವವರ ವಿರುದ್ಧ ಕ್ರಮ

ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಿ ಎಂದೂ ಮನವಿ ಮಾಡಿರುವ ಮುಲ್ಲೈ ಮುಗಿಲನ್, ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ವಿಭಾಗ 51ರಿಂದ 60 ರನ್ವಯ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆ 2020ರ ವಿಭಾಗ 4, 5 ಮತ್ತು 10ರಂತೆ ಕ್ರಮಗಳನ್ನು ಜರುಗಿಸಲಾಗುವುದು. ಈ ಆದೇಶದ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಬದ್ಧರಾಗಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

English summary
Uttar Kannada District Collector Mullai Mugilan the order has been issued New Guidelines To Marriage function and Temples.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X