ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಕೋಲ್ಕತ್ತಾ, ಮಾರ್ಚ್ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಉದ್ಯೋಗ ಕಳೆದುಕೊಂಡು ತವರಿಗೆ ವಾಪಸ್ಸಾಗಿರುವ ಪಶ್ಚಿಮ ಬಂಗಾಳದ ಜನರಿಗೆ ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಉದ್ಯೋಗವಿಲ್ಲದೇ ಆರ್ಥಿಕವಾಗಿ ಹಿಂದುಳಿದ ಜನರಿಗೆ ಉದ್ಯೋಗ ನೀಡಲಾಗುವುದು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಮರುಸ್ಥಾಪನೆ ಮಾಡಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದೆ.
ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷಗಳು ಎರಡೂ ಒಂದೇ ಆಗಿವೆ. ರಾಜ್ಯದಲ್ಲಿ ಪ್ರಬಲ ಮೈತ್ರಿಕೂಟ ರಚನೆಯಾದ ನಂತರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸೋಲಿನ ಭೀತಿ ಹೆಚ್ಚಾಗಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆ ಮರು ಸ್ಥಾಪನೆ:
ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರವು ಅಧಿಕಾರಕ್ಕೆ ಬಂದರೆ ಕಾನೂನು ಸುವ್ಯವಸ್ಥೆಯನ್ನು ಮರು ಸ್ಥಾಪಿಸಲಾಗುತ್ತದೆ. ಪೊಲೀಸರು ಮತ್ತು ನಾಗರಿಕರ ಮೇಲೆ ಯಾವುದೇ ರಾಜಕೀಯ ಪ್ರಭಾವ ಬೀರುವುದಿಲ್ಲ. ಮಹಿಳಾ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದೇ ದೃಷ್ಟಿಯಿಂದ ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಯ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.












Click it and Unblock the Notifications