ಕೊಪ್ಪಳ ಕಲುಷಿತ ನೀರು ಸೇವನೆ ಪ್ರಕರಣ, ಇಬ್ಬರು ಪಿಡಿಓ ಅಮಾನತು
ಕೊಪ್ಪಳ, ಜೂನ್ 22; ಈ ಬಾರಿ ನೈಋತ್ಯ ಮುಂಗಾರು ಮಳೆ ತಡವಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನಿರೀನ ಕೊರತೆ ಉಂಟಾಗಿದೆ. ಗ್ರಾಮಗಳಿಗೆ ಕಲುಷಿತ ನೀರು ಸರಬರಾಜು ಆಗಿರುವ ಪ್ರಕರಣಗಳು ರಾಜ್ಯದಲ್ಲಿ ನಡೆದಿದೆ. ಈ ಕುರಿತು ಎಚ್ಚರವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಹಾಗೂ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮಗಳಲ್ಲಿ ಕಲುಷಿತ ಕುಡಿಯುವ ನೀರು ಸೇವನೆ ಮಾಡಿ ಜನರು ಅಸ್ವಸ್ಥಗೊಂಡಿದ್ದರು. ಗ್ರಾಮಗಳಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ತೆರದು ಜನರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ.

ಈ ಕಲುಷಿತ ನೀರು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಆದೇಶದ ವಿವರಗಳು; ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಬಸರಿಹಾಳ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ 3/6/2023ರಿಂದ 6/6/2023ರವರೆಗೆ ಹಾಗೂ ಕುಷ್ಟಗಿ ತಾಲ್ಲೂಕಿನ ಬಿಜಕಲ್ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ 1/6/2023 ರಿಂದ 6/6/2023ರವರೆಗೆ ಕಲುಷಿತ ನೀರು ಸೇವಿಸಿ ವಾಂತಿ, ಭೇದಿ ಪ್ರಕರಣ ದಾಖಲಾಗಿರುವುದು ಕಂಡು ಬಂದಿದೆ.
ಇದಕ್ಕೆ ಸಂಬಂಧಿಸಿದಂತೆ ಆರೋಗ್ಯ ಅಧಿಕಾರಿಗಳ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ತಪಾಸಣಾ ವರದಿಯಲ್ಲಿರುವಂತೆ ಗ್ರಾಮದಲ್ಲಿ ಸ್ವಚ್ಚತೆ, ನೈರ್ಮಲೀಕರಣ ಹಾಗೂ ಶುದ್ಧ ಕುಡಿಯುವ ನೀರು ಪೂರೈಸುವ ಜವಾಬ್ದಾರಿಗೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯತಿ ನಿರ್ಲಕ್ಷ್ಯತೆ ಕಂಡು ಬಂದಿರುತ್ತದೆ ಎಂದು ಹೇಳಿದೆ.
ಈ ಸಂಬಂಧ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು 9/6/2023ರಂದು ನೀಡಿದ ವರದಿಯನ್ವಯ ಕನಕಗಿರಿ ತಾಲ್ಲೂಕಿನ ಬಸರಿಹಾಳ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪ್ರಭಾರ) ಹಾಗೂ ಕುಷ್ಟಗಿ ತಾಲ್ಲೂಕಿನ ಬಿಜಕಲ್ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪ್ರಭಾರ) ಇವರುಗಳು ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ.
ರವೀಂದ್ರ ಕುಲಕರ್ಣಿ ಪಿಡಿಓ, ಬಸರಿಹಾಳ ಗ್ರಾಮ ಪಂಚಾಯತಿ, ಕನಕಗಿರಿ ತಾಲ್ಲೂಕು, ಕೊಪ್ಪಳ ಜಿಲ್ಲೆ ಹಾಗೂ ನಾಗೇಶ ಅರಳಿಗನೂರು, ಗ್ರೇಡ್-1 ಕಾರ್ಯದರ್ಶಿ ಹಾಗೂ ಪಿಡಿಓ ಬಿಜಕಲ್ ಗ್ರಾಮ ಪಂಚಾಯತಿ, ಕುಷ್ಟಗಿ ತಾಲ್ಲೂಕು, ಕೊಪ್ಪಳ ಇವರನ್ನು ಅಮಾನತುಗೊಳಿಸಿ ಆದೇಶ ಹೊಡಿಸಲಾಗಿದೆ.
ಸಾಂಕ್ರಾಮಿಕ ರೋಗಗಳ ಕಾಯ್ದೆ, 1897ರ ಸೆಕ್ಷನ್ (2)ರನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಸೆಕ್ಷನ್ (77) & (85) ರನ್ವಯ ಎಸಗಿರುವ ಆರೋಪಗಳ ಕುರಿತು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಾಮಾವಳಿಗಳು, 1957ರ ನಿಯಮ 10(1)(3) ರನ್ವಯ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
ಅಪಾದಿತರು ಕರ್ನಾಟಕ ನಾಗರೀಕ ಸೇವಾ ನಿಯಮಗಳು 1958ರ ನಿಯಮ 98 ರನ್ವಯ ಜೀವನಾಂಶ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ ಹಾಗೂ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಅಗತ್ಯ ಮುನ್ನೆಚ್ಚರಿಕೆಗಳು; ಕಲುಷಿತ ನೀರು ಸೇವನೆ ಪ್ರಕರಣ ಬೆಳಕಿಗೆ ಬಂದ ಬಳಿಕ ಕೊಪ್ಪಳ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಮತ್ತು ಜಿಲ್ಲಾ ಪಂಚಾಯತಿ ಸಿಇಓ ರಾಹುಲ್ ಪಾಂಡೆಯ ಅವರ ನಿರ್ದೇಶನದಂತೆ ಬಸರಿಹಾಳ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸಹಕಾರದೊಂದಿಗೆ ತಾಲೂಕು ಪಂಚಾಯತಿಯಿಂದ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ.
ಗ್ರಾಮದ ಎಲ್ಲಾ ಓಣಿಗಳಲ್ಲಿ ಚರಂಡಿ ಹೂಳು ತೆಗೆದು ಸ್ವಚ್ಛಗೊಳಿಸಲಾಗಿದೆ. ಚರಂಡಿಗಳಿಗೆ ಮೆಲಾಥಿನ್ ಮತ್ತು ಬಿಚಿಂಗ್ ಪೌಡರ್ ಸಿಂಪಡಿಸಲಾಗಿದೆ. ಮುಖ್ಯ ಪೈಪ್‌ಲೈನ್‌ನಲ್ಲಿ ಯಾವುದೇ ಲಿಕೇಜ್ ಆಗದಂತೆ ಕ್ರಮಕೈಗೊಳ್ಳಲಾಗಿದೆ. ಸದ್ಯ ಇರುವ ಹಳೆಯ ಪೈಪ್‌ಲೈನ್ ಮೂಲಕ ನೀರು ಸರಬರಾಜು ತಡೆಹಿಡಿಯಲಾಗಿದೆ. ಟ್ಯಾಂಕರ್‌ಗಳ ಮೂಲಕ ಎಲ್ಲಾ ಓಣಿಗಳಿಗೆ ನೀರಿನ ವ್ಯವಸ್ಥೆ ಒದಗಿಸುವುದನ್ನುಮುಂದುವರೆಸಲಾಗಿದೆ. ಗ್ರಾಮದಲ್ಲಿರುವ ಓಎಚ್‌ಟಿ ಟ್ಯಾಂಕ್ ಮತ್ತು ನೀರಿನ ತೊಟ್ಟಿಗಳನ್ನು ಸ್ವಚ್ಛಗೊಳಿಸಲಾಗಿದೆ.











Click it and Unblock the Notifications