ಸ್ವಾತಂತ್ರ್ಯ ದಿನಾಚರಣೆ 2023; ಕೊಪ್ಪಳ ಜಿಲ್ಲಾಧಿಕಾರಿಗಳ ಸೂಚನೆಗಳು
ಕೊಪ್ಪಳ, ಆಗಸ್ಟ್ 09; ಸ್ವಾತಂತ್ರ್ಯ ದಿನಾಚರಣೆ 2023ರ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು. ಆಗಸ್ಟ್ 15ರ ಮಂಗಳವಾರ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ.
ಕೊಪ್ಪಳ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಸ್ವಾತಂತ್ರ್ಯೋತ್ಸವ 2023ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಿದರು. ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

"ಆಗಸ್ಟ್ 15ರಂದು ಬೆಳಗ್ಗೆ 8 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಕಾರ್ಯಕ್ರಮಕ್ಕಾಗಿ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಚಾಚೂ ತಪ್ಪದೇ ಪಾಲಿಸಬೇಕು" ಎಂದು ಡಿಸಿ ಸೂಚಿಸಿದರು.
"ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನರನ್ನುದ್ದೇಶಿಸಿ ಮಾತನಾಡುವರು. ಭಾಷಣಕ್ಕಾಗಿ ವಿವಿಧ ಇಲಾಖೆಗಳು ಅಗತ್ಯ ಮಾಹಿತಿಯನ್ನು ಸಕಾಲಕ್ಕೆ ನೀಡಬೇಕು. ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಹಾಗೂ ಸರ್ಕಾರದ ಶಿಷ್ಟಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು" ಎಂದು ಹೇಳಿದರು.
ಸ್ವಚ್ಛತೆ ಮತ್ತು ಅಲಂಕಾರ; ಸ್ವಾತಂತ್ರ್ಯ ದಿನಾಚರಣೆ 2023ರ ಹಿನ್ನಲೆಯಲ್ಲಿ ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಅಲಂಕಾರ ಮಾಡಬೇಕು. ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಕೈಗೊಳ್ಳಬೇಕು. ಮಹತ್ವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಯೋಧರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸಿದಲ್ಲಿ ಅವರಿಗೆ ಕಾರ್ಯಕ್ರಮದಲ್ಲಿಯೇ ಸನ್ಮಾನಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚನೆ ಕೊಡಲಾಗಿದೆ.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, "ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಪಥಸಂಚಲನಕ್ಕೆ ಅಗತ್ಯ ಪೂರ್ವಬಾವಿ ತರಬೇತಿ ನೀಡಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆಕೆಎಸ್ಆರ್‌ಟಿಸಿ ಬಸ್ ಸೌಕರ್ಯ ಒದಗಿಸಬೇಕು. ಮಕ್ಕಳಿಗೆ ಹಾಲು ಅಥವಾ ಲಘು ಉಪಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, "ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನ ಒದಗಿಸಬೇಕು. ಪ್ಲಾಸ್ಟಿಕ್ ಧ್ವಜವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಯಾವ ಅಂಗಡಿಗಳಲ್ಲೂ ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಕ್ರಮಕೈಗೊಳ್ಳಬೇಕು ಹಾಗೂ ಈ ಬಗ್ಗೆ ಸಾರ್ವಜನಿಕರಿಗೂ ಮಾಹಿತಿ ನೀಡಬೇಕು" ಎಂದರು.
ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಮಾತನಾಡಿ, "ತಾಲೂಕು ಮಟ್ಟದಲ್ಲಿ ಧ್ವಜ ಸಂಹಿತೆಯನ್ನು ಪಾಲಿಸಿ ವ್ಯವಸ್ಥಿತ ಧ್ವಜಾರೋಹಣ ನೆರವೇರಿಸುವಂತೆ ಆಯಾ ತಹಶೀಲ್ದಾರ್ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯೋತ್ಸವವನ್ನು ವ್ಯವಸ್ಥಿತ ಆಚರಣೆಗೆ ರಚಿಸಿದ ಸಮಿತಿಗಳು ತಮಗೆ ನೀಡಿದ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸಬೇಕು" ಎಂದು ಹೇಳಿದರು.
"ಪಥಸಂಚಲನದಲ್ಲಿ ಹೆಚ್ಚು ತಂಡಗಳು ಪಾಲ್ಗೊಳ್ಳುವಂತಿಲ್ಲ. ಶಾಲಾ ಮ್ಕಕಳಿಂದ ಸಾಮೂಹಿಕ ನೃತ್ಯ, ಸಾಧಕರಿಗೆ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಇದ್ದಲ್ಲಿ ಅಂತಹ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಪಟ್ಟ ಸಮಿತಿಗೆ ಮಾಹಿತಿ ನೀಡಬೇಕು" ಎಂದು ಸಭೆಯಲ್ಲಿ ಸೂಚನೆ ನೀಡಲಾಯಿತು.












Click it and Unblock the Notifications