ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್
ಕೊಪ್ಪಳ, ಮೇ 15: ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿ ಬಿದ್ದ ಘಟನೆ ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ಶುಕ್ರವಾರ (ಮೇ 15) ನಡೆದಿದೆ. ಘಟನೆಯಲ್ಲಿ ಸುಮಾರು 6 ಮಂದಿ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಹೊಸಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು 6 ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಲ್ಲೂಕಿನ ಮುನಿರಾಬಾದ್ ಬಳಿ ಇಂದು (ಮೇ 15) ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರನಿಂದ ಹುಲಿಗೇಮ್ಮ ದೇವಸ್ಥಾನಕ್ಕೆ ಪ್ರಯಾಣ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಜಲಾಶಯದ ಮುಂಭಾಗದಲ್ಲಿರುವ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿಯಾಗಿ ಕೆಳಗಡೆ ಬಿದ್ದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಮುನಿರಾಬಾದ್, ಹೊಸಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಮೃತರನ್ನು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಕೆಂಚಪ್ಪ (35), ಮಹಾಂತೇಶ್ (18) ಭರತ್ (01), ಸವಿತಾ (12) ಮಾರೇಶ್ ಹಾಗೂ ಗೌರಮ್ಮ ಮೃತಪಟ್ಟವರು. ಗಾಯಾಳುಗಳನ್ನು ಹೊಸಪೇಟೆ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನೂ ಹೊಸಪೇಟೆ ಶವಾಗಾರದ ಎದುರು ಮೃತಟ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ವರದಿಗಳ ಪ್ರಕಾರ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಟ್ಯಾಂಕರ್ ಗುದ್ದಿದೆ ಎನ್ನಲಾಗಿದ್ದು, ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.












Click it and Unblock the Notifications