ಕುಡಿಯುವ ನೀರಿಗಾಗಿ ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ
ಕೊಪ್ಪಳ, ಮಾರ್ಚ್ 07: ಮಾರ್ಚ್ ತಿಂಗಳ ಆರಂಭದಲ್ಲಿಯೇ ಕರ್ನಾಟಕದಲ್ಲಿ ಬರದ ಭೀಕರತೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ತುಂಗಭದ್ರಾ ಜಲಾಶಯದಲ್ಲಿ ಕುಡಿಯುವ ನೀರಿಗಾಗಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ತುಂಗಭದ್ರಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ಎಸ್. ತಂಗಡಗಿ ಅಧ್ಯಕ್ಷತೆಯಲ್ಲಿ ನಡೆದ 2023-24ನೇ ಸಾಲಿನ 121ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನೀರು ಹರಿಸುವ ಕುರಿತು ತೀರ್ಮಾನಿಸಲಾಗಿತ್ತು.

ತುಂಗಭದ್ರಾ ಜಲಾಶಯದಲ್ಲಿ ಕುಡಿಯುವ ನೀರಿಗಾಗಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ. ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಗಣೇಕಲ್ ಜಲಾಶಯ ಹಾಗೂ ಇತರೆ ಕೆರೆ ಕಟ್ಟೆಗಳಿಗೆ ಮಾರ್ಚ್ 5 ರಿಂದ ಮಾ.16 ರವರೆಗೆ 1200 ಕ್ಯೂಸೆಕ್‌ನಂತೆ ಕುಡಿಯುವ ನೀರು ಹರಿಸಲಾಗುತ್ತದೆ.
ಕುಡಿಯುವ ನೀರಿಗಾಗಿ ಮಾತ್ರ: ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಅನುವಾಗುವಂತೆ ಕಾಲುವೆಗಳಿಗೆ ಹರಿಸಲಾಗುತ್ತಿದ್ದು, ಪ್ರಸಕ್ತ ವರ್ಷ ಜಲಾಶಯದಲ್ಲಿ ನೀರಿನ ಸಂಗ್ರಹಣೆ ಸಾಮರ್ಥ್ಯ ಕಡಿಮೆ ಇರುವುದರಿಂದ ರೈತ ಬಾಂಧವರು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಬಳಸುವುದನ್ನು ಮತ್ತು ಎತ್ತಿಕೊಳ್ಳುವುದನ್ನು ನಿಷೇಧಿಸಲಾಗಿದೆ.
ರೈತರು ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಬೇಕು ಎಂದು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್ ಹಾಗೂ ತುಂಗಭದ್ರಾ ಯೋಜನೆಯ ಅಧೀಕ್ಷಕ ಅಭಿಯಂತ ಎಲ್. ಬಸವರಾಜ ಮನವಿ ಮಾಡಿದ್ದಾರೆ.
ತುಂಗಭದ್ರಾ ಜಲಾಶಯದಲ್ಲಿ ಮಾರ್ಚ್ 7ರ ಮಾಹಿತಿಯಂತೆ 7.81 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ 24.56 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು. ಈಗ ಇರುವ ನೀರನ್ನು ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳು ಕುಡಿಯುವ ನೀರು ಪೂರೈಕೆ ಮಾಡಲು ಮಾತ್ರ ಬಳಕೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
ಅಧಿಕಾರಿಗಳಿಗೆ ಸೂಚನೆ; "ಬೇಸಿಗೆ ಹಿನ್ನೆಲೆಯಲ್ಲಿ ಯಾವುದೇ ಕಡೆಗಳಲ್ಲಿ ಲೋಪವಾಗದ ಹಾಗೆ ಸರಿಯಾದ ರೀತಿಯಲ್ಲಿ ಜನರಿಗೆ ನೀರು ಪೂರೈಸಲು ಕ್ರಮ ವಹಿಸಬೇಕು" ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
"ನೀರು ಸಿಗುವ ಕಡೆಗೆ ಕೊಳವೆಬಾವಿ ಕೊರೆಯಿಸುವ ಹಾಗೂ ನೀರು ಇಲ್ಲದ ಕಡೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಕಾರ್ಯವನ್ನು ಮೂರು ತಿಂಗಳ ಕಾಲ ನಿರಂತರವಾಗಿ, ಯುದ್ದೋಪಾದಿ ರೀತಿಯಲ್ಲಿ ನಡೆಸಬೇಕು" ಎಂದು ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ಕೊಟ್ಟಿದ್ದಾರೆ.
"ಎಲ್ಲಾ ತಾಲೂಕುಗಳ ತಹಶೀಲ್ದಾರ್ ಕಛೇರಿಗಳಲ್ಲಿ ತಾಪಂ ಇಓ ಕಚೇರಿಗಳ ಮುಂದೆ ಸಹಾಯವಾಣಿ ನಂಬರ್‌ಗಳ ಪ್ರದರ್ಶನಕ್ಕೆ ಏರ್ಪಾಡು ಮಾಡಿ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜನತೆಗೆ ಅನುಕೂಲ ಕಲ್ಪಿಸಬೇಕು" ಎಂದು ಸಚಿವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಈಗಾಗಲೇ ರಾಜ್ಯದಲ್ಲಿನ ಬರ ಪರಿಸ್ಥಿತಿ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಸೂಚನೆಗಳನ್ನು ನೀಡಿದ್ದಾರೆ.












Click it and Unblock the Notifications