ಭಯೋತ್ಪಾದನೆ ಎನ್ನುವ ಬಿಜೆಪಿ ಬೆಲೆ ಏರಿಕೆ ನಿರುದ್ಯೋಗದ ಬಗ್ಗೆ ಗಪ್ ಚುಪ್!
ಲಕ್ನೋ, ಫೆಬ್ರವರಿ 21: ಉತ್ತರ ಪ್ರದೇಶದ ಜನರು ಇಂಧನ ಬೆಲೆ ಏರಿಕೆ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ತಮ್ಮ ಚುನಾವಣಾ ಪ್ರಚಾರದಲ್ಲಿ ಕೇವಲ ಭಯೋತ್ಪಾದನೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಿಡಿಮಿಡಿಗೊಂಡಿದ್ದಾರೆ.
ಉನ್ನಾವೋದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಜಿಲ್ಲೆಯ ರೈತರು ರಸಗೊಬ್ಬರದ ನಿರೀಕ್ಷೆಯಲ್ಲಿದ್ದರೆ, ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಆದರೆ ಬಿಜೆಪಿ ನಾಯಕರು ಮಾತ್ರ ಭಯೋತ್ಪಾದನೆ ಬಗ್ಗೆ ಮಾತನಾಡುತ್ತಿದ್ದಾರೆ," ಎಂದರು.
ರಾಜ್ಯದ ವಿಧಾನಸಭೆ ಚುನಾವಣಾ ಕಣದಲ್ಲಿ ಪ್ರಚಾರ ನಡೆಸುತ್ತಿರುವ ಬಿಜೆಪಿ ನಾಯಕರು, ಜನರ ಸಾಮಾನ್ಯ ಸಮಸ್ಯೆಗಳನ್ನು ಉಲ್ಲೇಖಿಸದೇ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಸಮಾಜವಾದಿ ಅಭ್ಯರ್ಥಿಗಳ ಪರ ಪ್ರಚಾರ:
ಅಯೋಧ್ಯೆ ಮತ್ತು ಬಾರಾಬಂಕಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಪರ ಮತದಾನ ಮಾಡುವಂತೆ ಮನವಿ ಮಾಡಿಕೊಂಡರು. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಕಾರಣಕ್ಕೆ 11 ಲಕ್ಷ ಉದ್ಯೋಗಗಳು ಭರ್ತಿಯಾಗದೇ, ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ. ಸಮಾಜವಾದಿ ಸರ್ಕಾರ ರಚನೆಯಾದರೆ ಖಾಲಿ ಇರುವ 11 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಎಂದು ಅಖಿಲೇಶ್ ಯಾದವ್ ಭರವಸೆ ನೀಡಿದರು.
ಪ್ರಧಾನಿ ಮೋದಿ ಆರೋಪಕ್ಕೆ ಅಖಿಲೇಶ್ ತಿರುಗೇಟು:
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂದ ಬಿಜೆಪಿ ಆರೋಪಕ್ಕೆ ಅಖಿಲೇಶ್ ಯಾದವ್ ತಿರುಗೇಟು ನೀಡಿದರು. ರಾಜ್ಯದ ಜನರು ಇಂಧನ ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ತಲೆ ಕೆಡಿಸಿಕೊಂಡಿದ್ದರೆ, ಬಿಜೆಪಿ ನಾಯಕರು ಮಾತ್ರ ಭಯೋತ್ಪಾದನೆ ಬಗ್ಗೆ ಮಾತನಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದರು.
ಸಮಾಜವಾದಿ ವಿರುದ್ಧ ಪ್ರಧಾನಿ ಮೋದಿ ಆರೋಪ:
ರಾಜ್ಯದ ಹಾರ್ದೊಯ್ ಪ್ರದೇಶದಲ್ಲಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಮಾಜವಾದಿ ಪಕ್ಷದ ಸರ್ಕಾರವು ಭಯೋತ್ಪಾದಕರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.
ಉನ್ನಾವೋದ 6 ಕ್ಷೇತ್ರಗಳಲ್ಲಿ ಫೆ.23ರಂದು ಮತದಾನ
ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯು ಆರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಫೆಬ್ರವರಿ 23ರಂದು ಚುನಾವಣೆಯ ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯದ ಒಟ್ಟು 403 ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಮಾರ್ಚ್ 7ರಂದು ಅಂತಿಮ ಹಾಗೂ ಏಳನೇ ಹಂತದ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರ ಬೀಳಲಿದೆ.












Click it and Unblock the Notifications