ಯುಪಿಯಲ್ಲಿ ಎಸ್‌ಪಿ ಸರ್ಕಾರ ರಚಿಸಿದರೆ ಅಪರಾಧಿಗಳಿಗೆ ಬಿಡುಗಡೆ ಭಾಗ್ಯ: ಅಮಿತ್ ಶಾ
ಲಕ್ನೋ, ಫೆಬ್ರವರಿ 3: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಒಂದು ವೇಳೆ ಸಮಾಜವಾದಿ ಪಕ್ಷ ತಪ್ಪಾಗಿ ಅಧಿಕಾರಕ್ಕೆ ಬಂದು ಬಿಟ್ಟರೆ ಅಜಂ ಖಾನ್ ಮತ್ತು ಮುಖ್ತಾರ್ ಅನ್ಸಾರಿ ಅಂತಹ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಹಾಗೂ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಜನರು ಜೈಲಿನಿಂದ ಹೊರ ಬರುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಅನುಪಮ್ ಶಹರ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಭವಿಷ್ಯದಲ್ಲಿ ಸಮಾಜವಾದಿ ಪಕ್ಷ ಏನಾದರೂ ಅಧಿಕಾರಕ್ಕೆ ಬಂದರೆ ಅಜಂ ಖಾನ್, ಅತಿಖ್ ಅಹ್ಮದ್ ಮತ್ತು ಮುಖ್ತಾರ್ ಅನ್ಸಾರಿಯಂತಹ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರು ಬುಲಂದ್ ಶಹರ್ ಜೈಲಿನಿಂದ ಹೊರಗೆ ಬರುತ್ತಾರೆ. ಅವರು ಜೈಲಿನಿಂದ ಹೊರಬೇಕು ಎಂದರೆ ಸಮಾಜವಾದಿ ಪಕ್ಷವೇ ಅಧಿಕಾರಕ್ಕೆ ಬರಬೇಕು," ಎಂದರು.
ಉತ್ತರ ಪ್ರದೇಶದಲ್ಲಿ ಎಲ್ಲಾ ಮಾಫಿಯಾದವರು ಜೈಲಿನಲ್ಲಿದ್ದಾರೆ, ಕೆಲವರು ರಾಜ್ಯ ಬಿಟ್ಟು ಹೋಗಿದ್ದರೆ ಉಳಿದವರು ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ ಎಂದು ಅಮಿತ್ ಶಾ ಲೇವಡಿ ಮಾಡಿದರು.

ಅಖಿಲೇಶ್ ಯಾದವ್ ವಿರುದ್ಧ ಶಾ ತಿರುಗೇಟು:
ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಅವರು ಪ್ರತಿಬಾರಿ ದೇವಸ್ಥಾನ ಯಾವಾಗ ನಿರ್ಮಿಸುತ್ತೀರಿ ಎನ್ನುವ ಬಗ್ಗೆ ಪದೇ ಪದೆ ಪ್ರಶ್ನೆ ಮಾಡುತ್ತಿದ್ದರು. ಆದರೆ ಈಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದು ಆಗಿದೆ. ರಾಮ ಮಂದಿರ ನಿರ್ಮಾಣ ಕಾರ್ಯವೂ ನಡೆಯುತ್ತಿದೆ ಎನ್ನುವ ಮೂಲಕ ಅಮಿತ್ ಶಾ ತಿರುಗೇಟು ನೀಡಿದರು.
ಬಿಜೆಪಿಗೆ ಮತ್ತೊಂದು ಅವಕಾಶ ನೀಡುವಂತೆ ಮನವಿ:
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾರ್ಯವೈಖರಿಯಿಂದ ಉತ್ತರ ಪ್ರದೇಶವು ರೂಪಾಂತರಗೊಳ್ಳುತ್ತಿದೆ. ಬಿಜೆಪಿಗೆ ನೀವು ಇನ್ನೊಂದು ಅವಕಾಶವನ್ನು ನೀಡಬೇಕು. ಮುಂದಿನ ಐದು ವರ್ಷಗಳಲ್ಲಿ ಉತ್ತರ ಪ್ರದೇಶವು ದೇಶದಲ್ಲೇ ನಂಬರ್ 1 ರಾಜ್ಯವಾಗಲಿದೆ. ಈ ಬಾರಿಯೂ ಉತ್ತರ ಪ್ರದೇಶದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿಯ ಮುಖ್ಯಮಂತ್ರಿ ಅನ್ನು ಆಯ್ಕೆ ಮಾಡುತ್ತೀರಿ ಎಂಬ ವಿಶ್ವಾಸವಿದೆ ಎಂದು ಅಮಿತ್ ಶಾ ಹೇಳಿದರು.
ಏಳು ಹಂತಗಳಲ್ಲಿ ನಡೆಯಲಿರುವ ಯುಪಿ ಚುನಾವಣೆ
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
2017ರಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ:
ಈ ಹಿಂದೆ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.












Click it and Unblock the Notifications