Breaking; ಭೀಕರ ಅಪಘಾತ ಒಂದೇ ಕುಟುಂಬದ 7 ಮಂದಿ ಸಾವು, ಮೋದಿ ಸಂತಾಪ
ಲಕ್ನೋ, ಮೇ 07; ಮಥುರಾದ ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ 7 ಜನರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಶನಿವಾರ ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲಿಯೇ ಮೂವರು ಪುರುಷರು, ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.
ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಶುಕ್ರವಾರ ವಿವಾಹ ಸಮಾರಂಭಕ್ಕಾಗಿ ಹೋಗಿದ್ದ ಎಲ್ಲರೂ ಶನಿವಾರ ಬೆಳಗ್ಗೆ ನೋಯ್ಡಾಕ್ಕೆ ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ. ಆದರೆ ಕಾರಿಗೆ ಡಿಕ್ಕಿ ಹೊಡೆದ ವಾಹನ ಯಾವುದು? ಎಂಬುದು ಪತ್ತೆಯಾಗಿಲ್ಲ.

ಅಪಘಾತದಲ್ಲಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಥುರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ.
ನರೇಂದ್ರ ಮೋದಿ ಸಂತಾಪ; ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ" ಎಂದು ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.












Click it and Unblock the Notifications