ಯುಪಿ ಚುನಾವಣೆಯಲ್ಲಿ ಸಿಎಂ ಯೋಗಿ ಸ್ಪರ್ಧಿಸುವ ರಣಕಣ ಯಾವುದು?
ಲಕ್ನೋ, ಜನವರಿ 13: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಬುಧವಾರ ಮಿತ್ರಪಕ್ಷಗಳ ಜೊತೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯು 14 ಗಂಟೆಗಳ ಸುದೀರ್ಘ ಚರ್ಚೆ ಬಳಿಕ ಮಧ್ಯರಾತ್ರಿ 1.35ರ ಸುಮಾರಿಗೆ ಮುಕ್ತಾಯಗೊಂಡಿದೆ.
ನವದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಿತ್ರಪಕ್ಷಗಳ ಜೊತೆ ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಲಾಯಿತು.
ಬಿಜೆಪಿ ಸಭೆಯಲ್ಲಿ ಮಿತ್ರಪಕ್ಷ ನಿಶಾದ್ ಪಕ್ಷದ ಅಧ್ಯಕ್ಷ ಸಂಜಯ್ ನಿಶಾದ್ ಸಹ ಹಾಜರಾಗಿದ್ದರು. ಅಪ್ನಾ ದಳ ಮುಖಂಡರಾದ ಅನುಪಮಾ ಪಟೇಲ್ ಸೀಟು ಹಂಚಿಕೆ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಮೂಲಗಳ ಪ್ರಕಾರ, ಗುರುವಾರ ನಡೆಯಲಿರುವ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯ ನಂತರ ಸೀಟು ಹಂಚಿಕೆ ಒಪ್ಪಂದದ ಕುರಿತು ಅಂತಿಮ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.

ಅಯೋಧ್ಯೆ ಕಣಕ್ಕೆ ಇಳಿಯುತ್ತಾರಾ ಯೋಗಿ?
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಡೆಸಿದ ಕೋರ್ ಕಮಿಟಿ ಸಭೆಯಲ್ಲಿ ಯಾವ ಕ್ಷೇತ್ರಗಳಲ್ಲಿ ಯಾರು ಸ್ಪರ್ಧಿಸಬೇಕು ಎಂಬುದರ ಕುರಿತು ಸಮಾಲೋಚನೆ ನಡೆಸಲಾಯಿತು. ಈ ವೇಳೆ ಬಿಜೆಪಿಯ ಭದ್ರಕೋಟೆ ಎನಿಸಿರುವ ಅಯೋಧ್ಯೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪರ್ಧಿಸುವ ಮತ್ತೆ ಮಾತುಕತೆ ನಡೆಸಲಾಯಿತು. ಈ ಕುರಿತು ಗುರುವಾರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೂ ಒಳಗೊಂಡಂತೆ ನಡೆಯಲಿರುವ ಬಿಜೆಪಿಯ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂತಿಮ ತೀರ್ಮಾನವಾಗಲಿದೆ.

ಯೋಗಿ ಆದಿತ್ಯನಾಥ್ ವಿಧಾನಸಭೆ ಕ್ಷೇತ್ರ ಯಾವುದು?
ಉತ್ತರ ಪ್ರದೇಶದ ಗೋರಖ್ ಪುರ ಲೋಕಸಭೆ ಕ್ಷೇತ್ರದಿಂದ ಈ ಹಿಂದೆ ಐದು ಬಾರಿ ಸ್ಪರ್ಧಿಸಿರುವ ಯೋಗಿ ಆದಿತ್ಯನಾಥ್ ಇದುವರೆಗೂ ಯಾವುದೇ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಲ್ಲ. ಅದರ ಬದಲಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಅವರನ್ನು ಆಯ್ಕೆ ಮಾಡಲಾಗಿತ್ತು. ಪ್ರಸ್ತುತ ಸಿಎಂ ಯೋಗಿ ಆದಿತ್ಯನಾಥ್ ವಿಧಾನ ಪರಿಷತ್ ಸದಸ್ಯರೇ ಆಗಿದ್ದಾರೆ. ಈ ಹಿನ್ನೆಲೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಯಾವ ಕ್ಷೇತ್ರದಿಂದ ಸ್ಪರ್ಧಿಸುವುದು ಉತ್ತಮ ಹಾಗೂ ಸುರಕ್ಷಿತ ಎಂಬುದರ ಬಗ್ಗೆ ಬಿಜೆಪಿಯ ಕೇಂದ್ರ ನಾಯಕರು ಲೆಕ್ಕಾಚಾರ ಹಾಕುತ್ತಿದ್ದಾರೆ. ಇದಕ್ಕೂ ಮೊದಲು ಮಥುರಾದಿಂದ ಸಿಎಂ ಯೋಗಿ ಆದಿತ್ಯನಾಥ್ ಕಣಕ್ಕಿಳಿಯಬೇಕು ಎಂಬುದರ ಬಗ್ಗೆ ಬಿಜೆಪಿ ಸಂಸದ ಹರ್ನಾತ್ ಸಿಂಗ್ ಯಾದವ್ ಪತ್ರ ಬರೆದಿದ್ದರು.

ಮಹತ್ವದ ಸಭೆಯಲ್ಲಿ ಬಿಜೆಪಿ ನಾಯಕರ ದಂಡು
ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಉತ್ತರ ಪ್ರದೇಶ ಚುನಾವಣೆಯ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಬಿಜೆಪಿಯ ಉತ್ತರ ಪ್ರದೇಶ ಪ್ರಧಾನ ಕಾರ್ಯದರ್ಶಿ ಸುನೀಲ್ ಬನ್ಸಾಲ್, ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್ ಸಂತೋಷ್ ಈ ಸಭೆಯಲ್ಲಿ ಹಾಜರಾಗಿದ್ದರು. ಕೊವಿಡ್-19 ಸೋಂಕು ಅಂಟಿಕೊಂಡಿರುವುದು ದೃಢಪಟ್ಟಿರುವ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.

ಏಳು ಹಂತಗಳಲ್ಲಿ ನಡೆಯಲಿರುವ ಯುಪಿ ಚುನಾವಣೆ
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ದಿನಾಂಕ ಪ್ರಕಟಿಸಿ ಆಗಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.












Click it and Unblock the Notifications