ಉತ್ತರ ಪ್ರದೇಶ ಚುನಾವಣೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಮನೇಕಾ-ವರುಣ್ ಔಟ್!
ಲಕ್ನೋ, ಜನವರಿ 19: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷವು ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಿಂದ ಬಿಜೆಪಿ ಪ್ರಭಾವಿ ನಾಯಕರೇ ಎನಿಸಿಕೊಂಡ ಮನೇಕಾ ಗಾಂಧಿ ಮತ್ತು ವರುಣ್ ಗಾಂಧಿಯವರನ್ನು ಹೊರಗಿಟ್ಟಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕುತ್ತಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಯ ಪ್ರಕಾಶ್ ನಡ್ಡಾ ಸೇರಿದಂತೆ ಒಟ್ಟು 30 ನಾಯಕರ ಹೆಸರನ್ನು ಉಲ್ಲೇಖಿಸಲಾಗಿದೆ. ಆದರೆ, ಅದೇ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಮೇನಕಾ ಗಾಂಧಿ ಹಾಗೂ ವರುಣ್ ಗಾಂಧಿ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಹೊರಗಿಡಲಾಗಿದೆ.
ಬಿಜೆಪಿಯ ಮನೇಕಾ ಗಾಂಧಿ ಮತ್ತು ವರುಣ್ ಗಾಂಧಿ ಉತ್ತರ ಪ್ರದೇಶದ ಸುಲ್ತಾನ್‌ಪುರ ಮತ್ತು ಪಿಲಿಭಿತ್‌ನಿಂದ ಹಲವು ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ತಾಯಿ ಮತ್ತು ಮಗ ಇಬ್ಬರನ್ನೂ ಕೈಬಿಡಲಾಗಿತ್ತು. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಚುನಾವಣೆ ಹೊಸ್ತಿಲಿನಲ್ಲೇ ಅಂಥದ್ದೇ ಮತ್ತೊಂದು ಘಟನೆ ಮರುಕಳಿಸಿದೆ.

30 ಸ್ಚಾರ್ ಪ್ರಚಾರಕರ ಪಟ್ಟಿ ಬಿಡುಗಡೆ:
ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿರುವ ಬಿಜೆಪಿ 30 ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮೊದಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಸರು ಉಲ್ಲೇಖಿಸಲಾಗಿದ್ದು, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರೆ ಸ್ಟಾರ್ ಪ್ರಚಾರಕರ ಹೆಸರುಗಳು ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಮುಖ್ತಾರ್ ಅಬ್ಬಾಸ್ ನಖ್ವಿ, ದಿನೇಶ್ ಶರ್ಮಾ, ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ ಇತರರ ಪಟ್ಟಿಯಲ್ಲಿದ್ದಾರೆ. ಇವರ ಜೊತೆಗೆ ರಾಧಾ ಮೋಹನ್ ಸಿಂಗ್ ಮತ್ತು ಸಂಜೀವ್ ಬಲ್ಯಾನ್ ಕೂಡ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ.
ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
2017ರ ಯುಪಿ ಚುನಾವಣೆ ಫಲಿತಾಂಶ:
Recommended Video
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.












Click it and Unblock the Notifications