ಪೌರತ್ವ ತಿದ್ದುಪಡಿ ಕಾಯ್ದೆ ಯಾವ ರಾಜ್ಯದಲ್ಲಿ ಮೊದಲು ಜಾರಿ?
ಲಕ್ನೋ, ಜನವರಿ 06 : ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ದೇಶಾದ್ಯಂತ ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಕಾಯ್ದೆ ವಿರೋಧಿಸಿ ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ, ಹಿಂಸಾಚಾರಗಳು ಸಹ ನಡೆದಿವೆ. ಸಿಎಎ ಯಾವ ರಾಜ್ಯದಲ್ಲಿ ಮೊದಲು ಜಾರಿಗೆ ಬರಲಿದೆ?.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮೊದಲು ಜಾರಿಗೊಳಿಸಲು ಮುಂದಾಗಿದ್ದಾರೆ. ದೇಶದಲ್ಲಿಯೇ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಸಿಎಎ ಜಾರಿಗೆ ಪ್ರಕ್ರಿಯೆಗಳು ಆರಂಭವಾಗಿವೆ.
ರಾಜ್ಯ ಸರ್ಕಾರ 75 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಪಾಕಿಸ್ತಾನ, ಬಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಸಿಖ್, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರನ್ನು ಗುರುತಿಸಲು ಸೂಚನೆ ನೀಡಿದೆ.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವಿನಾಶ್ ಅವಸ್ತಿ, "ಭಾರತದ ಪೌರತ್ವ ಇಲ್ಲದೆ ದಶಕಗಳಿಂದ 75 ಜಿಲ್ಲೆಗಳಲ್ಲಿರುವ ಪಾಕಿಸ್ತಾನ, ಬಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದವರ ಮಾಹಿತಿ ಸಂಗ್ರಹ ನಡೆಯುತ್ತಿದೆ" ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕಾರ ಪಾಕಿಸ್ತಾನ, ಬಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ವಲಸೆ ಬಂದವರಿಗೆ ಪೌರತ್ವ ನೀಡಲಾಗುತ್ತದೆ. ಹಿಂದೂ, ಸಿಖ್, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರು ಪೌರತ್ವ ಪಡೆಯಬಹುದು.
ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಹಿಂಸಾಚಾರದಲ್ಲಿ 19 ಜನರು ಮೃತಪಟ್ಟಿದ್ದರು. ಆದರೆ, ಅದೇ ರಾಜ್ಯದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕಾಯ್ದೆ ಜಾರಿಗೆ ಬರುತ್ತಿದೆ.












Click it and Unblock the Notifications