ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ
ಲಕ್ನೋ, ಆಗಸ್ಟ್ 21: ಹಿರಿಯ ಬಿಜೆಪಿ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ಶನವಾರ ರಾತ್ರಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಕಳೆದ ಜುಲೈ 4ರಂದು ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾಹೀನರಾಗಿದ್ದ ಹಿನ್ನೆಲೆಯಲ್ಲಿ ಕಲ್ಯಾಣ್ ಸಿಂಗ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸಂಜಯ್ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸುವ ಮೊದಲು ಕಲ್ಯಾಣ್ ಸಿಂಗ್‌ರನ್ನು ಮೊದಲು ರಾಮ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಉತ್ತರಪ್ರದೇಶದ ಮಾಜಿ ಸಿಎಂ ಹಾಗೂ ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರಿಂದ ಶನಿವಾರ ನಿಧನರಾದರು ಎಂದು ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಸಂತಾಪ
"ಕಲ್ಯಾಣ್ ಸಿಂಗ್‌ರವರು ಸಮಾಜದ ಕಟ್ಟಕಡೆಯ ಅಂಚಿನಲ್ಲಿರುವ ವರ್ಗಗಳಿಗೆ ಸೇರಿದ ಕೋಟ್ಯಂತರ ಜನರಿಗೆ ಧ್ವನಿ ನೀಡಿದರು. ರೈತರು, ಯುವಕರು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಅವರು ಹಲವಾರು ಪ್ರಯತ್ನಗಳನ್ನು ಮಾಡಿದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೇಳಿಕೊಳ್ಳುತ್ತೇನೆ," ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ
"ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ದೇಶ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಮುಖ್ಯಮಂತ್ರಿಗಳಾಗಿ, ರಾಜ್ಯಪಾಲರಾಗಿ ಅವರ ಸೇವೆ, ಸಾಮಾಜಿಕ ನ್ಯಾಯ, ನಿರ್ಲಕ್ಷಿತ ಸಮುದಾಯಗಳ ಏಳಿಗೆಗಾಗಿ ಅವರ ಬದ್ಧತೆ ಸ್ಫೂರ್ತಿದಾಯಕವಾಗಿತ್ತು."
"ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಲಕ್ಷಾಂತರ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಆ ಮೇರು ನಾಯಕನ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ," ಎಂದು ಸಂತಾಪ ಸೂಚಿಸಿದ್ದಾರೆ.
ಕೃಷಿ ಸಚಿವ ಬಿ.ಸಿ. ಪಾಟೀಲ್ ಸಂತಾಪ
"ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ರಾಜಸ್ಥಾನದ ರಾಜ್ಯಪಾಲರಾಗಿದ್ದ ಕಲ್ಯಾಣ್ ಸಿಂಗ್ ನಿಧನ ವಿಷಾದನೀಯ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ," ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸಂತಾಪ ಸೂಚಿಸಿದ್ದಾರೆ.
ಸಚಿವ ಅಶ್ವಥ್ ನಾರಾಯಣ ಸಂತಾಪ
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನದ ವಿಶ್ರಾಂತ ರಾಜ್ಯಪಾಲರಾದ ಕಲ್ಯಾಣ್ ಸಿಂಗ್ ನಿಧನಕ್ಕೆ ಉನ್ನತ ಶಿಕ್ಷಣ, ಐಟಿ-ಬಿಟಿ-ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
"ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡು ಸಲ ಕಾರ್ಯ ನಿರ್ವಹಿಸಿದ್ದ ಅವರು ದಲಿತ ಮತ್ತು ಹಿಂದುಳಿದವರ ರಾಜಕೀಯ ಶಕ್ತಿಯಾಗಿದ್ದರು. ನಂಬಿದ ಸಿದ್ಧಾಂತಕ್ಕಾಗಿ ಅಧಿಕಾರವನ್ನೂ ಲೆಕ್ಕಿಸದ ವ್ಯಕ್ತಿಯಾಗಿದ್ದರು. ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಉತ್ತರ ಪ್ರದೇಶದ ರಾಜಕಾರಣ ಮಹತ್ತರ ತಿರುವು ಪಡೆಯಿತಲ್ಲದೆ, ರಾಮ ಮಂದಿರ ಚಳವಳಿಗೆ ಹೊಸ ದಿಕ್ಕು ತೋರಿಸಿತು."
"ಕಲ್ಯಾಣ ಸಿಂಗ್ ಭಾರತೀಯ ಜನತಾ ಪಕ್ಷದ ದೊಡ್ಡ ನಾಯಕರಾಗಿದ್ದರು. ಮಾತ್ರವಲ್ಲ, ಶೋಷಿತ ಸಮುದಾಯದ ದನಿಯಾಗಿದ್ದರು. ಆ ರಾಜ್ಯದಲ್ಲಿ ರಾಜಕೀಯ ಪ್ರಾತಿನಿಧ್ಯವೇ ಕಾಣದಿದ್ದ ತಳ ಸಮುದಾಯದ ಪಾಲಿಗೆ ಆಶಾಕಿರಣವಾಗಿದ್ದರು."
"ಹಿರಿಯರಾದ ಕಲ್ಯಾಣ್ ಸಿಂಗ್ ಅಗಲಿಕೆ ನೋವುಂಟು ಮಾಡಿದೆ. ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಹಿರಿಯ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ನಿಧನವನ್ನೂ ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಭಗವಂತ ದಯಪಾಲಿಸಲಿ ಎಂದು ಡಾ.ಅಶ್ವತ್ಥನಾರಾಯಣ ಅವರು ಭಗವಂತನಲ್ಲಿ ಪ್ರಾರ್ಥನೆ ಮಾಡಿದ್ದಾರೆ."












Click it and Unblock the Notifications