ಕೊಡಗು; ರಾತ್ರಿ 1.27ಕ್ಕೆ ಕಾವೇರಿ ತೀರ್ಥೋದ್ಭವ, ಭಕ್ತರಿಗೆ ಅಗತ್ಯ ವ್ಯವಸ್ಥೆ
ಮಡಿಕೇರಿ, ಅಕ್ಟೋಬರ್ 17: ಕಾವೇರಿ ತುಲಾ ಸಂಕ್ರಮಣ 2023 ಪವಿತ್ರ ತೀರ್ಥೋದ್ಭವಕ್ಕೆ ಕೊಡಗಿನಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ರಾತ್ರಿ 1.27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಶುಭ ಲಗ್ನದಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವ ನಡೆಯಲಿದೆ.
ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ನಡೆಯುವ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು, ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ. ಎಸ್. ಪೊನ್ನಣ್ಣ, ಶಾಸಕ ಡಾ. ಮಂತರ್ ಗೌಡ, ಸಂಸದ ಪ್ರತಾಪ್ ಸಿಂಹ ಮುಂತಾದವರು ಸಾಕ್ಷಿಯಾಗಲಿದ್ದಾರೆ.

ಕೊಡಗು ಜಿಲ್ಲಾಡಳಿತ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಹಿನ್ನೆಲೆಯಲ್ಲಿ ಶ್ರೀ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ಪವಿತ್ರ ಕ್ಷೇತ್ರದಲ್ಲಿ ಭಕ್ತರಿಗೆ ಅಗತ್ಯ ಇರುವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮಧ್ಯರಾತ್ರಿ ತೀರ್ಥೋದ್ಭವ ನಡೆಯುವುದರಿಂದ ಬೆಳಕು, ಭದ್ರತೆಗೆ ಹೆಚ್ಚಿನ ಗಮನ ಕೊಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು, ಶಾಸಕ ಎ. ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿಗಳು ಭಾಗಮಂಡಲ ಭಗಂಡೇಶ್ವರ ದೇವಾಲಯ, ತ್ರಿವೇಣಿ ಸಂಗಮ ಹಾಗೆಯೇ ತಲಕಾವೇರಿ ಕೇತ್ರಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಲಕ್ಷಾಂತರ ಜನರ ಆಗಮನ; ಜೀವನದಿ ಕಾವೇರಿ ತೀರ್ಥೋದ್ಭವ, ತುಲಾ ಸಂಕ್ರಮಣಕ್ಕೆ ಲಕ್ಷಾಂತರ ಜನರು ಆಗಮಿಸುತ್ತಾರೆ. ಆದ್ದರಿಂದ ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ವಾಹನ ನಿಲುಗಡೆ, ಭಾಗಮಂಡಲದಿಂದ ತಲಕಾವೇರಿಯವರೆಗೆ, ತಲಕಾವೇರಿಯಿಂದ ಭಾಗಮಂಡಲದವರೆಗೆ ಬಸ್ ಸೌಲಭ್ಯ ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅನ್ನದಾನ ನಡೆಯಲಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಭಾಗಮಂಡಲದಿಂದ ತಲಕಾವೇರಿ ತನಕ ವಿದ್ಯುತ್ ದೀಪ ಹೀಗೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ವೈದ್ಯರು ಮತ್ತು ಶ್ರುಶ್ರೂಷಕರ ನಿಯೋಜನೆ ಮಾಡಲಾಗಿದೆ. ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಲಾಗಿದೆ. ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಲಾಗುವುದು ಭಕ್ತರು ಜಿಲ್ಲಾಡಳಿತದ ಜೊತೆ ಸಹಕಾರ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಪವಿತ್ರ ಸ್ಥಳದಲ್ಲಿ ಪ್ಲಾಸ್ಟಿಕ್ ಅನ್ನು ಬಳಕೆ ಮಾಡದಂತೆ ಭಕ್ತರಲ್ಲಿ ವಿನಂತಿ ಮಾಡಲಾಗಿದೆ. ಸ್ವಪ್ರೇರಣೆಯಿಂದ ಭಕ್ತಾಧಿಗಳೇ ಪ್ಲಾಸ್ಟಿಕ್ ಅನ್ನು ನಿಯಂತ್ರಿಸಬೇಕು. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಲಾಗಿದೆ.
ಭಾಗಮಂಡಲದಿಂದ-ತಲಕಾವೇರಿ, ತಲಕಾವೇರಿಯಿಂದ ಭಾಗಮಂಡಲಕ್ಕೆ 20 ಬಸ್‍ಗಳು ಸಂಚರಿಸಲಿವೆ. ಒಂದು ವೇಳೆ ಜನದಟ್ಟಣೆ ಹೆಚ್ಚಾದರೆ ಹೆಚ್ಚುವರಿ ಬಸ್‌ಗಳನ್ನು ಸಹ ಓಡಿಸಲು ವ್ಯವಸ್ಥೆ ಮಾಡಲಾಗಿದೆ.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 2 ಡಿವೈಎಸ್‍ಪಿ, 9 ಪೊಲೀಸ್ ಇನ್ಸ್‌ಪೆಕ್ಟರ್, 15 ಸಬ್ ಇನ್ಸ್‌ಪೆಕ್ಟರ್, 30 ಮಂದಿ ಸಹಾಯಕ ಸಬ್ ಇನ್ಸ್‌ಪೆಕ್ಟರ್, 350 ಹೆಡ್ ಕಾನ್ಸ್‌ಟೇಬಲ್, ಅಗತ್ಯ ಪೊಲೀಸರು, ಜೊತೆಗೆ ಗೃಹ ರಕ್ಷಕದಳದವರು ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ.
ಪ್ಲಾಸ್ಟಿಕ್ ನಿಷೇಧ; ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳು/ ಯಾಥ್ರಾರ್ತಿಗಳು ಶ್ರೀ ಕಾವೇರಿಯ ಪವಿತ್ರ ತೀರ್ಥವನ್ನು ಶೇಖರಿಸಿಕೊಂಡು ಹೋಗಲು ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲ್ ಮತ್ತು ಪ್ಲಾಸ್ಟಿಕ್ ಕ್ಯಾನ್‍ಗಳನ್ನು ಬಳಕೆ ಮಾಡುತ್ತಿರುತ್ತಾರೆ.
ಆದರೆ ಅಧಿಸೂಚಿತ ಸಂಸ್ಥೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್‍ಗಳನ್ನು ನಿರ್ಬಂಧಿಸುವಂತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಇವರ ಸುತ್ತೋಲೆಯಲ್ಲಿ ಸೂಚಿಸಿರುತ್ತಾರೆ. ಆದ್ದರಿಂದ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಪವಿತ್ರ ತೀರ್ಥವನ್ನು ಶೇಖರಿಸಲು ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸದಂತೆ ನಿರ್ಬಂಧಿಸಲಾಗಿದೆ ಎಂದು ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.












Click it and Unblock the Notifications