ಕೊಡಗು ಜಿಲ್ಲೆಯಲ್ಲಿ ಬರ; ಸಹಾಯವಾಣಿ ಕೇಂದ್ರ ಆರಂಭ
ಮಡಿಕೇರಿ, ಫೆಬ್ರವರಿ 04: ನೈಋತ್ಯ ಮುಂಗಾರು ಅವಧಿಯಲ್ಲಿ 2023ರಲ್ಲಿ ಮಳೆ ಕೊರತೆಯಾದ ಕಾರಣ ರಾಜ್ಯದಲ್ಲಿ ಬರಪರಿಸ್ಥಿತಿ ಎದುರಾಗಿದೆ. ಕೊಡಗು ಜಿಲ್ಲೆಯ 5 ತಾಲ್ಲೂಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸಹ ಸ್ಥಾಪನೆ ಮಾಡಲಾಗಿದೆ.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಕುರಿತು ಮಾಹಿತಿ ನೀಡಿದ್ದಾರೆ. ಬರಗಾಲದ ಹಿನ್ನೆಲೆಯಲ್ಲಿ ಬೆಳೆ ನಷ್ಟವಾಗಿರುವ ಕೃಷಿಕರಿಗೆ ಫ್ರೂಟ್ಸ್ ಆಪ್ ನಡಿ ನೋಂದಣಿ ಆಗಿರುವ ರೈತರಿಗೆ ಸರ್ಕಾರದ ಬೆಳೆ ನಷ್ಟ ಪರಿಹಾರವನ್ನು ನೇರವಾಗಿ ಪಾವತಿ ಮಾಡಿದ್ದು, ಈ ಸಂಬಂಧ ತೊಂದರೆ ಇದ್ದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಆರಂಭಿಸಲಾಗಿರುವ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಬಹುದಾಗಿದೆ ಎಂದರು.

ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ ಕೇಂದ್ರ 08272-221077, ಮಡಿಕೇರಿ ತಾಲ್ಲೂಕು ಕಚೇರಿ 08272-228396, ಕುಶಾಲನಗರ ತಾಲ್ಲೂಕು ಕಚೇರಿ 08276-200198, ಸೋಮವಾರಪೇಟೆ ತಾಲ್ಲೂಕು ಕಚೇರಿ 08276-282045, ವಿರಾಜಪೇಟೆ ತಾಲ್ಲೂಕು ಕಚೇರಿ 08274-257328 ಹಾಗೂ ಪೊನ್ನಂಪೇಟೆ ತಾಲ್ಲೂಕು ಕಚೇರಿ 08274-249700 ಅನ್ನು ಸಂಪರ್ಕಿಸಬಹುದು.
ಕುಡಿಯುವ ನೀರಿನ ಪೂರೈಕೆ; "ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು" ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
"ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಒದಗಿಸುವಲ್ಲಿ ವ್ಯತ್ಯಯ ಉಂಟಾಗಬಾರದು. ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಇಒ ಜೊತೆ ಒಟ್ಟುಗೂಡಿ ಸಮನ್ವಯತೆ ಸಾಧಿಸಿ ಕುಡಿಯುವ ನೀರು ಪೂರೈಕೆಗೆ ಮುಂದಾಗಬೇಕು. ಜಲಮೂಲ, ತೆರೆದ ಬಾವಿ, ಬೋರ್ ವೆಲ್ ಹೀಗೆ ಕುಡಿಯುವ ನೀರಿನ ಸಂಪನ್ಮೂಲವನ್ನು ಸರಿಯಾಗಿ ಬಳಸಬೇಕು" ಎಂದು ಸಲಹೆ ನೀಡಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಅವರು ಸಹ ಬರದ ಕುರಿತು ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನಗಳನ್ನು ನೀಡಿದ್ದಾರೆ. "ಮುಂದಿನ ಆರು ತಿಂಗಳಲ್ಲಿ ಜಿಲ್ಲೆಯ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು" ಎಂದು ಹೇಳಿದ್ದಾರೆ.
"ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕು. ಜಿಲ್ಲೆಯ ಯಾವ ಭಾಗದಲ್ಲಿಯೂ ಕುಡಿಯುವ ನೀರು ಸರಬರಾಜಿನಲ್ಲಿ ಸಮಸ್ಯೆ ಇದೆ ಎಂದು ಕೇಳಿ ಬರಬಾರದು. ಹಾಗೆಯೇ ಜಾನುವಾರುಗಳಿಗೆ ಅಗತ್ಯ ಮೇವು ಪೂರೈಕೆ ಮಾಡುವಂತೆ" ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬರ ನಿರ್ವಹಣೆಯಲ್ಲಿ ಉದಾಸೀನ ಮಾಡಬಾರದು. ಪಂಚಾಯತ್ ರಾಜ್ ಎಂಜಿನಿಯರ್‌ಗಳು, ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಿಡಿಒಗಳು ಕುಡಿಯುವ ನೀರು ಪೂರೈಕೆಗೆ ವಿಶೇಷ ಆದ್ಯತೆ ನೀಡಬೇಕು" ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್. ವಿ. ಪ್ರಸಾದ್ ಅವರು ಬರ ಪರಿಸ್ಥಿತಿ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು, ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಲಾಗಿದೆ. ಈ ಸಂಬಂಧ ಸಮಸ್ಯೆ ಇರುವುದನ್ನು ಗಮನಿಸಿ ಅಗತ್ಯ ಕ್ರಮವಹಿಸಲಾಗಿದೆ.












Click it and Unblock the Notifications