Ganesha chaturthi; ಕೊಡಗಿನಲ್ಲಿ ಪರಿಸರ ಸ್ನೇಹಿ ಗಣೇಶ ಅಭಿಯಾನ

ಮಡಿಕೇರಿ, ಸೆಪ್ಟೆಂಬರ್ 17; ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಜನರು ಪಿಓಪಿ ಗಣೇಶ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ, ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಜಿಲ್ಲಾ ಉಪ ಪರಿಸರ ಅಧಿಕಾರಿ ಎಂ. ಎಸ್. ನೇತ್ರಾವತಿ ಕರೆ ನೀಡಿದ್ದಾರೆ.

ಸೆಪ್ಟೆಂಬರ್ 18ರಂದು ನಡೆಯಲಿರುವ ಗೌರಿ-ಗಣೇಶೋತ್ಸವದ ಅಂಗವಾಗಿ 'ನಮ್ಮ ನಡೆ ಹಸಿರೆಡೆಗೆ' ಅಭಿಯಾನದಡಿ 'ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ-2023' ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸಂಘ- ಸಂಸ್ಥೆಗಳ ಸಹಭಾಗಿತ್ವದಲ್ಲಿ ಜನಜಾಗೃತಿ ಮೂಡಿಸುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eco-friendly-ganesha

ಗಣೇಶೋತ್ಸವ ಸಂದರ್ಭದಲ್ಲಿ ಪಿಓಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾಲಿನ್ಯಕಾರಿ ರಾಸಾಯನಿಕ ಬಣ್ಣ ಬಳಸಿ ತಯಾರು ಮಾಡಿದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವುದನ್ನು ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿಗಳು ಈಗಾಗಲೇ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ನಾಗರಿಕರು ಪರಿಸರ ಪೂರಕವಾಗಿ ಗಣೇಶೋತ್ಸವ ಆಚರಿಸಬೇಕೆಂದು ಮನವಿ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಜಾಗೃತಿ; ಸರ್ಕಾರದ ಸುತ್ತೋಲೆಯ ಪ್ರಕಾರ ನೈಸರ್ಗಿಕವಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಹಾಗೂ ಪ್ರತಿಷ್ಠಾಪನೆ ಕುರಿತು ಶಾಲೆಗಳಲ್ಲಿ ಜನ ಜಾಗೃತಿ ಮೂಡಿಸಲು ಈಗಾಗಲೇ ಶಾಲಾ-ಕಾಲೇಜಿನ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಶಾಲೆಗಳಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಜತೆಗೂಡಿ ಜನಜಾಗೃತಿ ಮೂಡಿಸುತ್ತಿದ್ದಾರೆ.

ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‌ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿ ಟಿ. ಜಿ. ಪ್ರೇಮ ಕುಮಾರ್, "ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗೆ ಸಹಕರಿಸಬೇಕು" ಎಂದು ಮನವಿ ಮಾಡಿದ್ದಾರೆ.

"ಗಣೇಶ ಹಬ್ಬದ ಸಂದರ್ಭದಲ್ಲಿ ಪಿಓಪಿ ಹಾಗೂ ರಾಸಾಯನಿಕ ಮಿಶ್ರಿತ ಗಣೇಶ ಮೂರ್ತಿಯನ್ನು ಬಳಸದೇ ಪರಿಸರ ಸ್ನೇಹಿ ಹಾಗೂ ನೈಸರ್ಗಿಕವಾಗಿ ಮಣ್ಣಿನ ಮೂರ್ತಿ ತಯಾರಿಸಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟಲು ಶಾಲೆಗಳ ಇಕೋ ಕ್ಲಬ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ" ಎಂದು ಹೇಳಿದ್ದಾರೆ.

"ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ, ಕೆರೆ ಮತ್ತಿತರ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ನೀರು ಮತ್ತು ಪರಿಸರ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ದಿಸೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ" ತಿಳಿಸಿದ್ದಾರೆ.

ಗಣೇಶ ಮೂರ್ತಿಗಳನ್ನು ಆಕರ್ಷಣೀಯವಾಗಿಸಲು ಅರಿಶಿಣ ಮತ್ತು ನೈಸರ್ಗಿಕ ಬಣ್ಣಗಳನ್ನು ಬಳಸಬಹುದು. ಜಿಲ್ಲೆಯಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಕಾರದೊಂದಿಗೆ ಕಳೆದ 12 ವರ್ಷಗಳಿಂದ ನಿರಂತರವಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ.

ಗಣೇಶ ಚತುರ್ಥಿಯನ್ನು ಶಬ್ದ, ವಾಯು ಹಾಗೂ ಜಲ ಮಾಲಿನ್ಯ ರಹಿತವಾಗಿ ಆಚರಿಸಲು ದೃಢ ಸಂಕಲ್ಪ ತೊಡಬೇಕು. ಈ ದಿಸೆಯಲ್ಲಿ ಕೊಡಗಿನಲ್ಲಿ ಸರ್ಕಾರದೊಂದಿಗೆ ಎಲ್ಲಾ ಇಲಾಖೆ ಹಾಗೂ ಸಂಘ ಸಂಸ್ಥೆಗಳು ಕೈಜೋಡಿಸಿ ಇಂತಹ ಪರಿಸರ ಪೂರಕ ಜಾಗೃತಿ ಆಂದೋಲನ ನಡೆಸುತ್ತಿರುವುದು ಮಾದರಿಯಾದ್ದು.

ಕೊಡಗಿನಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಸಂಘಟಿಸುತ್ತಾ ಬರುತ್ತಿರುವುದು ರಾಜ್ಯಕ್ಕೆ ಮಾದರಿಯಾಗಿದೆ. ಇದಕ್ಕೆ ಕಾರಣರಾದ ಪರಿಸರ ಸಂಘಟನೆಯ ಪ್ರಮುಖರು ಮತ್ತು ಸಂಗಡಿಗರು ಜತೆಗೂಡಿ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+