ಕೊಡಗು; ಆರೋಗ್ಯ ಇಲಾಖೆ 498 ಹುದ್ದೆ ಶೀಘ್ರವೇ ಭರ್ತಿ
ಮಡಿಕೇರಿ, ಡಿಸೆಂಬರ್ 18; "ಕೊಡಗು ಜಿಲ್ಲೆಯಲ್ಲಿ ವೈದ್ಯರು, ತಜ್ಞ ವೈದ್ಯರ ಸಂಖ್ಯೆ ಕಡಿಮೆ ಇದೆ. ಕೊಡಗು ಜಿಲ್ಲೆಯನ್ನು ವಿಶೇಷ ಜಿಲ್ಲೆ ಎಂದು ಪರಿಗಣಿಸಿ ವೈದ್ಯರ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸೋಮವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಚಿವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಿದರು. ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಸಚಿವರು, "ಕೊಡಗು ಜಿಲ್ಲೆಯ ಬಗ್ಗೆ ವಿಶೇಷ ಆಸಕ್ತಿ ಇದ್ದು, ಅಭಿವೃದ್ಧಿಯ ಕಾರ್ಯಗಳು ನಡೆಯಬೇಕು. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳು, ಮಾನವ ಸಂಪನ್ಮೂಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸುವುದು ಹೀಗೆ ಹಲವು ವಿಷಯಗಳ ಮಾಹಿತಿ ಸಂಗ್ರಹಿಸಿ ಬೇಡಿಕೆಗೆ ಸ್ಪಂದಿಸುವುದು ಕರ್ತವ್ಯ" ಎಂದರು.
ಸಭೆಯಲ್ಲಿ ಖಾಲಿ ಹುದ್ದೆಗಳ ಬಗ್ಗೆ ಚರ್ಚೆ ನಡೆಯಿತು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 464 ಮಂಜೂರಾತಿ ಹುದ್ದೆಯಲ್ಲಿ 417 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, 47 ಹುದ್ದೆಗಳು ಖಾಲಿ ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. "ಜಿಲ್ಲೆಯಲ್ಲಿ 1336 ಮಂಜೂರಾತಿ ಹುದ್ದೆಯಲ್ಲಿ 838 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 498 ಹುದ್ದೆಗಳು ಖಾಲಿ ಇದ್ದು, ಈ ಸಂಬಂಧ ಕೊಡಗು ಜಿಲ್ಲೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಖಾಲಿ ಹುದ್ದೆ ಭರ್ತಿಗೆ ಕ್ರಮವಹಿಸಲಾಗುವುದು" ಎಂದು ಸಚಿವರು ಭರವಸೆ ನೀಡಿದರು.
ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ಕೋವಿಡ್‌ಗೆ ಸಂಬಂಧಿಸಿದಂತೆ ಯಾರೂ ಸಹ ಆತಂಕ ಪಡುವ ಅಗತ್ಯವಿಲ್ಲ. ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ, ಕೊಡಗು, ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿದೆ. ಕೋವಿಡ್ ಪರೀಕ್ಷೆ ಹೆಚ್ಚಿಸಲಾಗುವುದು, ಉಸಿರಾಟದ ತೊಂದರೆ ಹಾಗೂ ಶೀತ, ನೆಗಡಿ, ಜ್ವರ ಮತ್ತಿತರ ಲಕ್ಷಣ ಹೊಂದಿರುವವರಿಗೆ ಪರೀಕ್ಷೆ ಮಾಡಲಾಗುವುದು. ಅನಗತ್ಯ ಆತಂಕ ಬೇಡ" ಎಂದರು.
ಸಭೆಯಲ್ಲಿ ಚರ್ಚಿಸಿದ ಅಂಶಗಳು
* ಕೊಡಗು ಜಿಲ್ಲೆಯಲ್ಲಿ 29 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಕೇಂದ್ರಗಳಿಗೆ ಆಗಾಗ ಭೇಟಿ ನೀಡಿ ತಪಾಸಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ.
* ಕೆಲವು ಜಿಲ್ಲೆಯಲ್ಲಿ ಭ್ರೂಣಹತ್ಯೆ ಮಾಡುವುದು ಕೇಳಿಬರುತ್ತಿದ್ದು, ಭ್ರೂಣಹತ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೊಡಗು ಜಿಲ್ಲೆಯಲ್ಲಿ ಕಳೆದ 21 ವರ್ಷದಲ್ಲಿ ಸ್ಕ್ಯಾನಿಂಗ್ ಕೇಂದ್ರಗಳ ಸಂಬಂಧ ಒಂದು ಪ್ರಕರಣವು ದಾಖಲಾಗಿಲ್ಲ. ಆ ನಿಟ್ಟಿನಲ್ಲಿ ಎಲ್ಲವೂ ಸರಿಯಿದೆಯೇ? ಎಂಬುದನ್ನು ಆತ್ಮವಿಮರ್ಶೆ ಮಾಡಬೇಕಿದೆ.
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳು ರಹಸ್ಯ ಕಾರ್ಯಾಚರಣೆ ಮೂಲಕ ಸ್ಕ್ಯಾನಿಂಗ್ ಕೇಂದ್ರಗಳ ಚಟುವಟಿಕೆ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಜೊತೆಗೆ ಸಾರ್ವಜನಿಕರಿಂದಲೂ ಅಭಿಪ್ರಾಯ ಪಡೆಯುವಂತಾಗಬೇಕು.
* ಸ್ಕ್ಯಾನಿಂಗ್ ಕೇಂದ್ರಗಳು ಅಧಿಕೃತವಾಗಿ ನೋಂದಣಿಯಾಗಿರಬೇಕು. ಅನಧಿಕೃತ ಸ್ಕ್ಯಾನಿಂಗ್ ಕೇಂದ್ರಗಳು ನಡೆಯಬಾರದು. ಕೊಡಗು ಜಿಲ್ಲೆಯಲ್ಲಿ ಲಿಂಗಾನುಪಾತವು 978 ಇದೆ.
* ಶಿಕ್ಷಣ ಮತ್ತು ಆರೋಗ್ಯ ಆಧಾರ ಸ್ತಂಭವಾಗಿದ್ದು, ಇವುಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಹ ಇಚ್ಛಾಶಕ್ತಿ ಅತ್ಯಗತ್ಯವಾಗಿದ್ದು, ಶ್ರದ್ಧೆಯಿಂದ ಕಾರ್ಯ ನಿರ್ವಹಿಸಬೇಕು.
* ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ತಾಲ್ಲೂಕು ಆಸ್ಪತ್ರೆ ಆಗಬೇಕಿದೆ. ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆ ಇವೆ.
* ಕೊಡಗು ಜಿಲ್ಲೆಯ ಡೆಂಗ್ಯೂ ಪ್ರಕರಣ ನಿಯಂತ್ರಣದಲ್ಲಿದೆ. ಇ-ಸಂಜೀವಿನಿ ಕಾರ್ಯಕ್ರಮ ಅನುಷ್ಠಾನ ಮಾಡುವುದು. ಇ-ಆಸ್ಪತ್ರೆ ಸರಿಪಡಿಸುವುದು, ಆಧಾರ್ ಆಧಾರಿತ ಬಯೋ ಮೆಟ್ರಿಕ್ ಹಾಜರಾತಿ ಜಾರಿಗೊಳಿಸುವುದು, ರಾಷ್ಟ್ರೀಯ ಗುಣಮಟ್ಟ ಸುಧಾರಣೆ ಯೋಜನೆ, ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಪ್ರಗತಿ, ಇ-ಕಚೇರಿ ನಿರ್ವಹಣೆ ಬಗ್ಗೆ ಚರ್ಚೆ.












Click it and Unblock the Notifications