ಕೊಡಗು ಜಿಲ್ಲೆಗೆ ಪ್ರವಾಸಿಗರ ಭೇಟಿಗೆ ಇದ್ದ ನಿರ್ಬಂಧ ತೆರವು
ಮಡಿಕೇರಿ, ಸೆಪ್ಟೆಂಬರ್ 10 : ಕೊಡಗು ಜಿಲ್ಲೆಗೆ ಪ್ರವಾಸಿಗರ ಭೇಟಿಗೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಭಾರಿ ಮಳೆ ಮತ್ತು ಗುಡ್ಡ ಕುಸಿತದ ಕಾರಣ ಪ್ರವಾಸಿಗರು ಭೇಟಿ ನೀಡದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು.
ಪ್ರವಾಸಿಗ ಭೇಟಿಗೆ ಅವಕಾಶ ನೀಡಿದರೂ ಮಡಿಕೇರಿ ತಾಲೂಕಿನ ಅಬ್ಬಿ ಜಲಪಾತ, ಮಾಂದಲ್ ಪಟ್ಟಿ, ತಡಿಯಂಡಮೋಳ್ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಇನ್ನೂ ದುರಸ್ಥಿಯಾಗಿಲ್ಲ. ಪ್ರವಾಸಿಗರು ಅಲ್ಲಿಗೆ ತೆರಳುವಂತಿಲ್ಲ.

ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಈ ಕುರಿತು ಮಾಹಿತಿ ನೀಡಿದ್ದು, 'ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳ ಪುನರ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳಬೇಕಿದೆ. ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಪಾಲಿಸಬೇಕು' ಎಂದು ಹೇಳಿದ್ದಾರೆ.
ಸುಮಾರು ಒಂದು ತಿಂಗಳ ಬಳಿಕ ಕೊಡಗು ಜಿಲ್ಲೆಗೆ ಭಾನುವಾರ ಕೆಲವು ಪ್ರವಾಸಿಗರು ಭೇಟಿ ನೀಡಿದ್ದರು. ಮಡಿಕೇರಿಯ ರಾಜಾಸೀಟ್, ಭಾಗಮಂಡಲ ಹಾಗೂ ತಲಕಾವೇರಿಗೆ ಕೆಲವು ಪ್ರವಾಸಿಗರು ಭೇಟಿ ನೀಡಿ ಸೆಲ್ಫಿ ಕ್ಲಿಕ್ಕಿಸಿಕೊಂಡರು.
2 ಸಾವಿರ ಕೋಟಿ ಪ್ಯಾಕೇಜ್ : ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತಿವೃಷ್ಟಿ ಹಾಗೂ ಒಳನಾಡಿನಲ್ಲಿನ ಬರ ಪರಿಸ್ಥಿತಿ ಬಗ್ಗೆ ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.
ಕೊಡಗು ಹಾಗೂ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ 2000 ಕೋಟಿ ರೂ. ಗಳ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಪ್ರಧಾನಿಗಳಿಗೆ ನಿಯೋಗ ಮನವಿ ಮಾಡಿತು.












Click it and Unblock the Notifications