ಕೊಡಗು-ಕೇರಳ ನಡುವಿನ ಸರ್ಕಾರಿ, ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ
ಮಡಿಕೇರಿ, ಆಗಸ್ಟ್ 08; ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿದೆ. ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರವನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಶನಿವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಪಕ್ಕದ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತರರಾಜ್ಯ ಚೆಕ್‌ಪೋಸ್ಟ್‌ನಲ್ಲಿ ಪ್ರಯಾಣಿಕರನ್ನು ವಿಶೇಷವಾಗಿ ತಪಾಸಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಿಂದ ಕೇರಳಕ್ಕೆ ತೆರೆಳುವ ಎಲ್ಲಾ ಸರ್ಕಾರಿ, ಖಾಸಗಿ ಬಸ್‌ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಆಗಸ್ಟ್ 16ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನವನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ.
ಕರ್ನಾಟಕ ಸರ್ಕಾರ ಮಹಾರಾಷ್ಟ್ರ, ಕೇರಳದ ಜೊತೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ಈಗಾಗಲೇ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವಾರು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಶುಕ್ರವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳ ಸೂಚನೆಯಂತೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದರು. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಜಿಲ್ಲೆಯ ಚೆಕ್ ಪೋಸ್ಟ್‌ಗಳಲ್ಲಿ ಸಿಸಿಟಿವಿ ಅಳವಡಿಸಿ ಕೊರೊನಾ ನಿಯಂತ್ರಿಸಲು ಬಿಗಿಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಕೇರಳ ರಾಜ್ಯದಲ್ಲಿ 3ನೇ ಅಲೆ ಕಂಡು ಬಂದಿದೆ. ಕೇರಳ ರಾಜ್ಯದಿಂದ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕೇರಳದಿಂದ ಆಗಮಿಸುವವರನ್ನು ಕೊಡಗು ಜಿಲ್ಲೆ ಪ್ರವೇಶಕ್ಕೆ ಅವಕಾಶ ನೀಡಬಾರದು. ತುರ್ತು ಕೆಲಸ ಇದ್ದವರಿಗೆ 72 ಗಂಟೆಗಳ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿರುವ ನೆಗೆಟಿವ್ ವರದಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದ್ದರು.
ಕಂದಾಯ, ಪೊಲೀಸ್, ಪಂಚಾಯತ್ ರಾಜ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ಕೋವಿಡ್ ನಿಯಂತ್ರಿಸಬಹುದು. ಆ ನಿಟ್ಟಿನಲ್ಲಿ ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರು ಸೂಚಿಸಿದ್ದರು.
ಕೋವಿಡ್ ನಿಯಂತ್ರಣ ಸಂಬಂಧ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಪಡೆ ರಚಿಸಿದ್ದು, ಕಾರ್ಯಪಡೆ ಸಮಿತಿ ಸಭೆಯು ಮೂರು ದಿನಗಳಿಗೊಮ್ಮೆ ನಡೆಯಬೇಕು. ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಸಮಿತಿಯಲ್ಲಿರುವ ಎಲ್ಲರೂ ಸಮನ್ವಯತೆಯಿಂದ ಒಂದು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಕರೆ ನೀಡಿದ್ದರು.
ಕೊಡಗು ಜಿಲ್ಲೆಗೆ ಸರಕು ಸಾಗಾಣಿಕೆ ವಾಹನದಲ್ಲಿ ಪ್ರವೇಶಿಸುವವರನ್ನು 7 ದಿನದ ಕೋವಿಡ್ ಪರೀಕ್ಷೆ ನೆಗೆಟಿವ್ ವರದಿ ಇದ್ದವರಿಗೆ, ಜೊತೆಗೆ ಆಂಟಿಜೆನ್ ಪರೀಕ್ಷೆ ಮಾಡಿ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದರು.
71 ಹೊಸ ಪ್ರಕರಣಗಳು; ಕೊಡಗು ಜಿಲ್ಲೆಯಲ್ಲಿ ಶನಿವಾರ 71 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೃಢಪಟ್ಟಿದೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,232 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 98 ಮಂದಿ ಗುಣಮುಖರಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 28, ಸೋಮವಾರಪೇಟೆ ತಾಲೂಕಿನಲ್ಲಿ 23, ವಿರಾಜಪೇಟೆ ತಾಲೂಕಿನಲ್ಲಿ 20 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 31,223 ಮಂದಿ ಗುಣಮುಖರಾಗಿದ್ದಾರೆ. 610 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಕೇರಳ ಕೋವಿಡ್ ಪ್ರಕರಣ; ಶನಿವಾರ ಕೇರಳದಲ್ಲಿ 20,367 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 139 ಜನರು ಮೃತಪಟ್ಟಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇ 13.25 ಆಗಿದೆ.
ತಿರುವನಂತಪುರಂನಲ್ಲಿ 944, ಕಾಸರಗೋಡು 662, ವಯನಾಡು 660, ಕೊಟ್ಟಾಯಂ 995, ಮಲಪುರಂ 3413, ಪಾಲಕ್ಕಾಡ್ 2137, ಎರ್ನಾಕುಲಂ 2121, ಕಣ್ಣೂರು 1217 ಹೊಸ ಕೋವಿಡ್ ಪ್ರಕರಣಗಳು 24 ಗಂಟೆಯಲ್ಲಿ ಪತ್ತೆಯಾಗಿವೆ.












Click it and Unblock the Notifications