ಶೇ 60ರಷ್ಟು ಕನ್ನಡ ಫಲಕ ಕಡ್ಡಾಯ: ನಿಯಮ ಕಟ್ಟುನಿಟ್ಟಿನ ಜಾರಿಗೆ ಸೂಚನೆ
ಮಡಿಕೇರಿ, ಮೇ 15: ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂಬ ನಿಯಮವನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಅಲ್ಲದೇ ಈ ನಿಯಮ ಅನುಷ್ಠಾನಕ್ಕೆ ಅವಕಾಶವನ್ನು ನೀಡಿದೆ. ಕಡ್ಡಾಯವಾಗಿ ನಿಯಮ ಅನುಷ್ಠಾನಕ್ಕೆ ಸೂಚನೆಯನ್ನು ಕೊಡಲಾಗಿದೆ.
ಕೊಡಗು ಜಿಲ್ಲಾಧಿಕಾರಿ ವೆಂಕಟ್‍ರಾಜಾ ಅವರು ಜಿಲ್ಲೆಯ ಎಲ್ಲಾ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು.

"ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ" ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳು ಹೇಳಿದ್ದೇನು?; ಜಿಲ್ಲಾಧಿಕಾರಿಗಳು ಮಾತನಾಡಿ, "ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಸಂಬಂಧ ಈಗಾಗಲೇ ಅಧಿನಿಯಮ ಜಾರಿಯಾಗಿದ್ದು, ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯ ಗಡಿಭಾಗ ಸೇರಿದಂತೆ ನಗರ, ಪಟ್ಟಣ ಹಾಗೂ ಎಲ್ಲೆಡೆ ಅಳವಡಿಸಿರುವ/ ಅಳವಡಿಸುವ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು" ಎಂದು ಸೂಚಿಸಿದರು.
"ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿನ ನಾಮಫಲಕದಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ ಅನುಷ್ಠಾನದ ಬಗ್ಗೆ ಕರೆಗಳು ಬರುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತೊಮ್ಮೆ 7 ದಿನಗಳ ಕಾಲಾವಕಾಶ ನೀಡಿ, ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅನುಷ್ಠಾನಕ್ಕೆ ಮುಂದಾಗಬೇಕು" ಎಂದು ನಿರ್ದೇಶನ ಕೊಟ್ಟರು.
"ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ" ಸೂಚಿಸಿದರು.
"ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡ ಭಾಷೆಯನ್ನು ಶೇ 60 ರಷ್ಟು ಪ್ರದರ್ಶಿಸಬೇಕು/ ಬರೆಸಿರಬೇಕು" ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, "ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಕೆ ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳ ಮೂಲಕ ತ್ವರಿತ ಕ್ರಮ ಕೈಗೊಳ್ಳಲಾಗುವುದು" ಎಂದರು.
ಪೌರಾಯುಕ್ತ ವಿಜಯ್ ಮಾತನಾಡಿ, "ಈಗಾಗಲೇ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದ್ದು, ನಾಮಫಲಕದಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಕೆ ಸಂಬಂಧಿಸಿದಂತೆ ನಗರದ 150 ಅಂಗಡಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ. ಅನುಷ್ಠಾನ ಸಂಬಂಧ ತಂಡ ರಚಿಸಲಾಗಿದೆ. ಈ ಬಗ್ಗೆ ವರದಿ ನೀಡಲಾಗುವುದು" ಎಂದು ಹೇಳಿದರು.
ಈಗಾಗಲೇ ಕರ್ನಾಟಕ ಹೈಕೋರ್ಟ್ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು, ಅವುಗಳಿಗೆ ಬೀಗ ಹಾಕಿ ಮುಚ್ಚಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಮಾರ್ಚ್‌ನಲ್ಲಿ ಸೂಚನೆ ನೀಡಿದೆ.
ಕರ್ನಾಟಕದ ರಾಜ್ಯಪಾಲರು ಫೆಬ್ರವರಿ 25ರಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024ಕ್ಕೆ ಅನುಮೋದನೆ ನೀಡಿದ್ದಾರೆ. ರಾಜ್ಯಪತ್ರದ ಮೂಲಕ ಇದನ್ನು ಈಗಾಗಲೇ ಕರ್ನಾಟಕ ಸರ್ಕಾರ ಸರ್ಕಾರ ಪ್ರಕಟಿಸಿದೆ. ನಿಯಮದ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು.
ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಕನ್ನಡ ಭಾಷೆ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕ ಮೇಲ್ಭಾಗದಲ್ಲಿರುವಂತೆ ಮತ್ತು ದೊಡ್ಡದಾಗಿರುವಂತೆ ಅಳವಡಿಸಬೇಕು ಎಂದು ನಿಯಮ ಹೇಳುತ್ತದೆ.












Click it and Unblock the Notifications