ಮಂಗಳವಾರ ರಾತ್ರಿ ಕಾವೇರಿ ತೀರ್ಥೋದ್ಭವ, ಸಿದ್ಧತೆ ಪರಿಶೀಲಿಸಿದ ಸಚಿವರು
ಮಡಿಕೇರಿ, ಅಕ್ಟೋಬರ್ 16; ಶ್ರೀ ಕಾವೇರಿ ತುಲಾ ಸಂಕ್ರಮಣ 2023 ಪವಿತ್ರ ತೀರ್ಥೋದ್ಭವ ಹಿನ್ನೆಲೆ ಶ್ರೀ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ಪವಿತ್ರ ಕ್ಷೇತ್ರದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಕೊಡಗು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧವಾಗಿದೆ. ಅಕ್ಟೋಬರ್ 17ರ ರಾತ್ರಿ 1.27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ನಡೆಯಲಿದೆ.
ಭಾನುವಾರ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು, ಶಾಸಕ ಎ. ಎಸ್. ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಭಾಗಮಂಡಲ ಭಗಂಡೇಶ್ವರ ದೇವಾಲಯ, ತ್ರಿವೇಣಿ ಸಂಗಮ ಹಾಗೆಯೇ ತಲಕಾವೇರಿ ಕೇತ್ರಕ್ಕೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.

ಸಚಿವರಾದ ಎನ್. ಎಸ್. ಬೋಸರಾಜು ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಭಾಗಮಂಡಲ ದೇವಾಲಯದಲ್ಲಿ ನಂದಾದೀಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತಕ್ಕ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ಷಯ ಪಾತ್ರೆ ಇರಿಸಿದರು.
ಅಧಿಕಾರಿಗಳ ವಿವರಣೆ; ಭಾಗಮಂಡಲದ ಭಗಂಡೇಶ್ವರ, ಮಹಾಗಣಪತಿ, ಸುಬ್ರಮಣ್ಯ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಸಚಿವರು ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿ, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಾಂಸ್ಕೃತಿಕ ಗೀತಾ ಗಾಯನ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ, ಭಕ್ತಾಧಿಗಳ ಅನುಕೂಲಕ್ಕಾಗಿ ಬ್ಯಾರಿಕೇಡ್ ನಿರ್ಮಾಣ, ಅಗತ್ಯ ವ್ಯವಸ್ಥೆಗಳು ಮತ್ತಿತರ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು. ಹಾಗೆಯೇ ನಾಡಿನ ಜೀವನದಿ, ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆಯನ್ನು ಸಚಿವರು ಸಲ್ಲಿಸಿದರು.
ಸಚಿವರು ಮಾತನಾಡಿ, "ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಒಂದು ತಿಂಗಳಿನಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ವಾಹನ ನಿಲುಗಡೆ, ಭಾಗಮಂಡಲದಿಂದ ತಲಕಾವೇರಿಯವರೆಗೆ, ತಲಕಾವೇರಿಯಿಂದ ಭಾಗಮಂಡಲದವರೆಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ" ಎಂದು ಹೇಳಿದರು.
"ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಿಂದಿನಂತೆ ಅನ್ನದಾನ ನಡೆಯಲಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಭಾಗಮಂಡಲದಿಂದ ತಲಕಾವೇರಿ ತನಕ ವಿದ್ಯುತ್ ದೀಪ ಹೀಗೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ" ಎಂದರು.
"ಭಕ್ತಾಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವೈದ್ಯರು ಮತ್ತು ಶುಶ್ರೂಷಕರ ನಿಯೋಜನೆ, ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಲಾಗುತ್ತದೆ. ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಲಾಗುವುದು" ಎಂದು ಸಚಿವರು ಭರವಸೆ ನೀಡಿದರು.
ಶಾಸಕ ಎ. ಎಸ್. ಪೊನ್ನಣ್ಣ ಮಾತನಾಡಿ, "ಪವಿತ್ರ ಸ್ಥಳದಲ್ಲಿ ಪ್ಲಾಸ್ಟಿಕ್ ಅನ್ನು ಬಳಸಬಾರದು. ಸ್ವಪ್ರೇರಣೆಯಿಂದ ಭಕ್ತಾಧಿಗಳೇ ಪ್ಲಾಸ್ಟಿಕ್ ಅನ್ನು ನಿಯಂತ್ರಿಸಬೇಕು. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು" ಎಂದು ಕರೆ ನೀಡಿದರು.
ಪೊಲೀಸ್ ಭದ್ರತೆಯ ವಿವರ; ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾತನಾಡಿ, "ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 2 ಡಿವೈಎಸ್‍ಪಿ, 9 ಪೊಲೀಸ್ ಇನ್ಸ್‍ಪೆಕ್ಟರ್, 15 ಸಬ್ ಇನ್ಸ್‍ಪೆಕ್ಟರ್‌ಗಳು, 30 ಮಂದಿ ಸಹಾಯಕ ಸಬ್ ಇನ್ಸ್‍ಪೆಕ್ಟರ್‌ಗಳು, 350 ಹೆಡ್‍ಕಾನ್ಸಟೇಬಲ್, ಅಗತ್ಯ ಪೊಲೀಸರು, ಜೊತೆಗೆ ಗೃಹ ರಕ್ಷಕದಳದವರು ಕರ್ತವ್ಯ ನಿರ್ವಹಿಸಲಿದ್ದು, ಅಗತ್ಯ ಬಂದೋ ಬಸ್ತ್ ಮಾಡಿಕೊಳ್ಳಲಾಗಿದೆ" ಎಂದು ತಿಳಿಸಿದರು.
ಭಾಗಮಂಡಲದಿಂದ-ತಲಕಾವೇರಿ, ತಲಕಾವೇರಿಯಿಂದ ಭಾಗಮಂಡಲಕ್ಕೆ 20 ಬಸ್‍ಗಳು ಸಂಚರಿಸಲಿವೆ. ಹಾಗೆಯೇ ಜನದಟ್ಟಣೆ ನೋಡಿಕೊಂಡು ಮಡಿಕೇರಿ-ಭಾಗಮಂಡಲ, ಭಾಗಮಂಡಲದಿಂದ-ಮಡಿಕೇರಿ ಮಾರ್ಗದಲ್ಲಿ ಬಸ್‍ಗಳು ಸಂಚರಿಸಲಿವೆ. ಕಾವೇರಿ ತೀರ್ಥೋದ್ಭವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಲಿದ್ದಾರೆ.
ಮಡಿಕೇರಿ-ಭಾಗಮಂಡಲ, ತಲಕಾವೇರಿಗೆ ತೆರಳುವ ರಸ್ತೆಗಳ ಗುಂಡಿಮುಚ್ಚುವ ಕಾರ್ಯ ಪೂರ್ಣಗೊಳ್ಳುತ್ತಿದೆ. ಈ ಬಾರಿ ಅಕ್ಟೋಬರ್ 17ರ ರಾತ್ರಿ 1.27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ನಡೆಯಲಿದೆ. ಆದ್ದರಿಂದ ಬೆಳಕಿನ ವ್ಯವಸ್ಥೆ ಮತ್ತು ಭದ್ರತೆಗೆ ಹೆಚ್ಚು ಗಮನ ನೀಡಲಾಗಿದೆ.












Click it and Unblock the Notifications