ಕರ್ನಾಟಕದ ಚಿಕ್ಕ ಜಿಲ್ಲೆಯ ಮತಗಟ್ಟೆ, ಮತದಾರರ ವಿವರ
ಮಡಿಕೇರಿ, ಮಾರ್ಚ್ 26: ಲೋಕಸಭೆ ಚುನಾವಣೆ 2024 ವೇಳಾಪಟ್ಟಿ ಘೋಷಣೆಯಾಗಿದೆ. ಕರ್ನಾಟಕ ಅತಿ ಚಿಕ್ಕ ಜಿಲ್ಲೆಯಾದ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಚುನಾವಣೆ ನಡೆಯಲಿದ್ದು, ಜೂನ್ 4ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.
ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ್ದಾರೆ. ಚುನಾವಣಾ ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾರ್ಚ್ 28ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಏಪ್ರಿಲ್ 4ಕೊನೆಯ ದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್ 8ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಒಟ್ಟು ಮತದಾರರ ವಿವರ: ಲೋಕಸಭಾ ಚುನಾವಣೆಗೆ ಕೊಡಗು ಜಿಲ್ಲೆಯಲ್ಲಿ 4,66,154 ಮತದಾರರು ಇದ್ದು, ಇವರಲ್ಲಿ 2,28,478 ಪುರುಷ ಮತದಾರರು ಮತ್ತು 2,37,660 ಮಹಿಳಾ ಮತದಾರರು, 16 ಮಂದಿ ಇತರ ಮತದಾರರು ಇದ್ದಾರೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 2,36,562 ಮತದಾರರು ಇದ್ದಾರೆ. ಇವರಲ್ಲಿ 1,15,159 ಪುರುಷ ಮತದಾರರು ಮತ್ತು 1,21,394 ಮಹಿಳಾ ಮತದಾರರು ಇದ್ದು, ಇತರೆ 9 ಮಂದಿ ಮತದಾರರು ಇದ್ದಾರೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಒಟ್ಟು ಮತದಾರರು 2,29,592 ಮಂದಿ. ಇವರಲ್ಲಿ 1,13,319 ಪುರುಷ ಮತದಾರರು ಮತ್ತು 1,16,266 ಮಹಿಳಾ ಮತದಾರರು, 7 ಮಂದಿ ಇತರೆ ಮತದಾರರು ಇದ್ದಾರೆ.
ಕೊಡಗು ಜಿಲ್ಲೆಯಲ್ಲಿ 1,357 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 1,298 ಪುರುಷ ಮತದಾರರು ಹಾಗೂ 59 ಮಹಿಳಾ ಮತದಾರರು ಇದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 622 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 596 ಪುರುಷ ಮತದಾರರು, 26 ಮಹಿಳಾ ಮತದಾರರು ಇದ್ದಾರೆ. ವಿರಾಜಪೇಟೆ ವಿಭಾನಸಭಾ ಕ್ಷೇತ್ರದಲ್ಲಿ 735 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 702 ಪುರುಷ ಮತದಾರರು, 33 ಮಂದಿ ಮಹಿಳಾ ಸೇವಾ ಮತದಾರರು ಇದ್ದಾರೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 18 ರಿಂದ 19 ವಯಸ್ಸಿನ 9,076 ಯುವ ಮತದಾರರು ಇದ್ದು, 4,547 ಪುರುಷ ಯುವ ಮತದಾರರು ಮತ್ತು 4,529 ಮಹಿಳಾ ಮತದಾರರು ಇದ್ದಾರೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ವಿಶೇಷ ಚೇತನ ಮತದಾರರು ಇದ್ದಾರೆ.
ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳಿದ್ದು, ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲಾ 273 ಮತಗಟ್ಟೆ ಹೊಂದಿದೆ. ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಸೇರಿದಂತೆ ಮತದಾನಕ್ಕೆ ಆಗಮಿಸುವ ಜನರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ಮತದಾರರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950ಕ್ಕೆ ಕರೆ ಮಾಡಬಹುದಾಗಿದೆ.
ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ಮೂವರು ಮತಗಟ್ಟೆ ಅಧಿಕಾರಿಗಳು ಹಾಗೂ ಮೀಸಲು ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ. ಅದೇ ರೀತಿ ಕೇಂದ್ರ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್ ಅಧಿಕಾರಿಗಳು ಫ್ಲೈಯಿಂಗ್ ಸ್ಕ್ವಾಡ್, ಲೆಕ್ಕ ವೀಕ್ಷಕರ ತಂಡ, ವಿಡಿಯೋ ವಿವಿಂಗ್ ತಂಡ, ವಿಡಿಯೋ ಪರಿಶೀಲನಾ ತಂಡ, ಸಹಾಯಕ ವೆಚ್ಚ ವೀಕ್ಷಕರ ತಂಡಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ 44 ಮಂದಿ ಸೆಕ್ಟರ್ ಅಧಿಕಾರಿಗಳು, 21 ಮಂದಿ ಫ್ಲೈಯಿಂಗ್ ಸ್ಕ್ವಾಡ್, 42 ಮಂದಿ ಸ್ಟಾಟಿಕ್ ಸರ್ವಿಲೆನ್ಸ್ ತಂಡದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಕೊಡಗು ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಕೋವಿಡ್ ಸೋಂಕು ದೃಢಪಟ್ಟ ಮತದಾರರಿಗೆ ಹಾಗೂ ಅಗತ್ಯ ಸೇವೆಗಳ ಇಲಾಖೆಗಳ ನಿರತ ಅಧಿಕಾರಿ ಸಿಬ್ಬಂದಿಗಳಿಗೆ ವಿಶೇಷ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಯಾವುದೇ ಚುನಾವಣಾ ಕರಪತ್ರಗಳು, ಪೋಸ್ಟರ್, ಬಿಲ್‍ಗಳಲ್ಲಿ ಪ್ರಕಾಶಕರು ಮತ್ತು ಪ್ರಕಾಶನ ಸಂಸ್ಥೆಯ ಮಾಹಿತಿಯನ್ನು ಕಡ್ಡಾಯವಾಗಿ ಮುದ್ರಿಸಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಅಭ್ಯರ್ಥಿಯ ಪರವಾಗಿ ಯಾವುದೇ ರೀತಿಯ ರಾಜಕೀಯ ಜಾಹೀರಾತನ್ನು ಪ್ರಕಟಿಸುವ/ ಪ್ರಸಾರ ಮಾಡುವ ಮೊದಲು ಜಾಹೀರಾತಿನ ವಿವರವನ್ನು ಚುನಾವಣಾ ಸಿಬ್ಬಂದಿಗೆ ನೀಡಿ, ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications