Monsoon Rain 2024: ಕೊಡಗಿನಲ್ಲಿ ಸಿದ್ಧತೆಗಳು ಹೇಗಿವೆ?
ಮಡಿಕೇರಿ, ಮೇ 18: ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಆರ್ಭಟಿಸುತ್ತಿದೆ. ಕರ್ನಾಟಕದ ಜೀವನದಿ ಕಾವೇರಿಗೆ ಹರಿಯಲು ಆರಂಭಿಸಿದೆ. 2024ರ ನೈಋತ್ಯ ಮುಂಗಾರು ಮಳೆ ಆರಂಭವಾಗಲು ಸಹ ಕೆಲವೇ ದಿನಗಳು ಹಾಕಿ ಇದೆ. ಆದ್ದರಿಂದ ಕೊಡಗು ಜಿಲ್ಲಾಡಳಿತ ಮಳೆಗಾಲದ ಪೂರ್ವ ಸಿದ್ಧತೆಗಳನ್ನು ಕೈಗೊಂಡಿದೆ.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ನಡೆಸಿದರು. 'ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಕೊಡಗು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ. ಆದ್ದರಿಂದ ಹೆಚ್ಚಿನ ಮಳೆಯಾದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಿದೆ' ಎಂದರು.

'ಹವಾಮಾನ ಇಲಾಖೆಯಿಂದ ಕಾಲ ಕಾಲಕ್ಕೆ ಮಳೆ, ಮುನ್ಸೂಚನೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗುತ್ತದೆ. ಆ ದಿಸೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸ್ಥ್ಥಳೀಯ ಮಟ್ಟದಲ್ಲಿ ಮಾಹಿತಿ ನೀಡುವಂತಾಗಬೇಕು. ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒಗಳು ಇತರರು ಜಂಟಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು" ಎಂದು ಸೂಚಿಸಿದರು.
ಮಳೆಗಾಲಕ್ಕೆ ಸಿದ್ಧತೆಗಳು: ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, "ಶಾಲಾ-ಕಾಲೇಜುಗಳು, ಅಂಗನವಾಡಿ ಕಟ್ಟಡಗಳು ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಪರಿಹಾರ/ ಕಾಳಜಿ ಕೇಂದ್ರವನ್ನು ತೆರೆಯುವುದು ಮತ್ತಿತರ ಕೆಲಸವನ್ನು ನಿರ್ವಹಿಸಬೇಕು" ಎಂದರು.
"ಕೃಷಿ ಸಂಬಂಧಿಸಿದಂತೆ ಜಿಲ್ಲೆಗೆ ಬೇಕಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು. ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು" ಎಂದು ವೆಂಕಟ್ ರಾಜಾ ಅವರು ಸೂಚಿಸಿದರು.
"ಅಗ್ನಿಶಾಮಕ ದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣಗಳೊಂದಿಗೆ ಸನ್ನದ್ಧವಾಗಿರಬೇಕು. ಗೃಹರಕ್ಷಕ ದಳ ಸಿಬ್ಬಂದಿಗಳು ಸಹ ತುರ್ತು ಸೇವೆಗೆ ಲಭ್ಯವಿರುವಂತೆ ಕ್ರಮಕೈಗೊಳ್ಳಬೇಕು" ಎಂದು ಹೇಳಿದರು.
"ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಸರಿಪಡಿಸಬೇಕು. ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡುಬಂದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ತಂತಿಯಿಂದ ಯಾವುದೇ ಜೀವಹಾನಿಯಾಗದಂತೆ ಎಚ್ಚರವಹಿಸಬೇಕು" ಎಂದರು.
ಮಳೆಗಾಲದ ಸಂದರ್ಭದಲ್ಲಿ ಕಂದಾಯ, ಸೆಸ್ಕ್, ಅರಣ್ಯ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳ ನಡುವೆ ಸಮನ್ವಯ ಮುಖ್ಯವಾಗಿದ್ದು, ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯವುದು. ಹಾಗೂ ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಬೇರೇಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
ಮಳೆಗಾಲದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯಪಡೆ ಸಮಿತಿ ಸಭೆ ನಡೆಸುವುದು, ತಮ್ಮ ಇಲಾಖಾ ಹಂತದಲ್ಲಿಯೂ ಸಹ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ಕೊಡಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳು ಸಾರ್ವಜನಿಕರಿಗೆ ಕಾಲ ಕಾಲಕ್ಕೆ ಮಾಹಿತಿ ನೀಡುವಂತಾಗಬೇಕು ಎಂದು ಮನವಿ ಮಾಡಲಾಗಿದೆ.
ಕೆಲವು ವರ್ಷ ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಗುಡ್ಡ ಕುಸಿತ, ಪ್ರವಾಹದಿಂದಾಗಿ ಹೆಚ್ಚಿನ ಹಾನಿಯಾಗಿತ್ತು. ಆದ್ದರಿಂದ ಮಳೆಗಾಲದ ಆರಂಭದಲ್ಲಿಯೇ ಹೆಚ್ಚಿನ ಮುನ್ನಚ್ಚರಿಕೆ ಕೈಗೊಳ್ಳಲಾಗುತ್ತದೆ. ಎನ್‌ಡಿಆರ್‌ಎಫ್ ಪಡೆಯನ್ನು ಸಹ ಜಿಲ್ಲೆಗೆ ನಿಯೋಜನೆ ಮಾಡಲಾಗುತ್ತದೆ.
ಬೇಸಿಗೆ ಮತ್ತು ಬರದ ಛಾಯೆಯ ಕಾರಣಕ್ಕೆ ಕೊಡಗಿನಲ್ಲಿಯೂ ಈ ಬಾರಿ ಕುಡಿಯುವ ನೀರಿನ ಕೊರತೆ ಉಂಟಾಗಿತ್ತು. ಕಾವೇರಿ ನದಿ ಬತ್ತಿ ಹೋಗಿತ್ತು, ಈಗ ಪೂರ್ವ ಮುಂಗಾರು ಮಳೆಯ ಕಾರಣಕ್ಕೆ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.












Click it and Unblock the Notifications