ಕೊಡಗು ಮುಂಗಾರು ಮಳೆ: ಜಿಲ್ಲೆಗೆ ಆಗಮಿಸಿದ NDRF ತಂಡ
ಮಡಿಕೇರಿ, ಜೂನ್ 09: ಕೊಡಗು ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು. ಜೂನ್‌ನಲ್ಲಿ ನೈಋತ್ಯ ಮುಂಗಾರು ಮಳೆ ಆರಂಭವಾಗಿದೆ. ಜನವರಿಯಿಂದ ಇಲ್ಲಿಯ ತನಕ ಜಿಲ್ಲೆಯಲ್ಲಿ 368.58 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 180.12 ಮಿ. ಮೀ. ಮಳೆಯಾಗಿತ್ತು. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಸಲ ಹೆಚ್ಚು ಮಳೆಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಈಗಾಗಲೇ ಎನ್‍ಡಿಆರ್‍ಎಫ್ ತಂಡವು ಜಿಲ್ಲೆಗೆ ಆಗಮಿಸಿದೆ.

ಅಜಯ್ ಕುಮಾರ್ ನೇತೃತ್ವದ ಎನ್‌ಡಿಆರ್‌ಎಫ್ ತಂಡವು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಮಾಡಿ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿತು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, "ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆ ಆಗುವ ಮಾಹಿತಿಯನ್ನು ಅಪ್‍ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು" ಎಂದರು.
ವಿಪತ್ತು ನಿರ್ವಹಣಾ ತಂಡ ರಚನೆ: ಮುಂಗಾರು ಮಳೆ ಸಮಯದಲ್ಲಿ ಕೊಡಗು ಜಿಲ್ಲೆಯಲ್ಲಿ ಯಾವುದಾದರೂ ನೆರೆ ಹಾವಳಿಯಂತಹ ಪ್ರಕೃತಿ ವಿಕೋಪಗಳು ಸಂಭವಿಸಿದರೆ ಸಾರ್ವಜನಿಕರ ಸಹಾಯಕ್ಕೆ ಧಾವಿಸಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಡಿಎಆರ್, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಉಪ ವಿಭಾಗಗಳ ತಲಾ 15 ಸಿಬ್ಬಂದಿಗಳನ್ನೊಳಗೊಂಡ 4 ವಿಪತ್ತು ನಿರ್ವಹಣಾ ತಂಡವನ್ನು ರಚಿಸಲಾಗಿದೆ.
ಈ ತಂಡಗಳು ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ರಕ್ಷಣಾ ಕಾರ್ಯಾಚರಣೆಯ ಅಭ್ಯಾಸವನ್ನು ನಡೆಸಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿ಼ಷ್ಠಾಧಿಕಾರಿ ಸುಂದರ್ ರಾಜ್ ಕೆ. ಎಸ್., ಕುಶಾಲನಗರ ವೃತ್ತ ನಿರೀಕ್ಷಕ ಕೆ. ರಾಜೇಶ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಅಭ್ಯಾಸದಲ್ಲಿ ಭಾಗವಹಿಸಿದ್ದರು.
ಜಿಲ್ಲಾಧಿಕಾರಿಗಳ ಸಭೆ: ಮುಂಗಾರು ಮಳೆ ಪರಿಸ್ಥಿತಿ ಎದುರಿಸುವ ಕುರಿತು ಈಗಾಗಲೇ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿದ್ದು, ಮುಂಗಾರು ಸಂದರ್ಭದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಈಗಿನಿಂದಲೇ ಎಚ್ಚರ ವಹಿಸಬೇಕಿದೆ ಎಂದು ಹೇಳಿದ್ದಾರೆ.
ಮುಂಗಾರು ಸಂದರ್ಭದಲ್ಲಿ ಅಗತ್ಯ ಕಾರ್ಯ ನಿರ್ವಹಣೆ, ಶುದ್ಧ ಕುಡಿಯುವ ನೀರು ಪೂರೈಕೆ ಮತ್ತಿತರ ಸಂಬಂಧ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯತ್ ಇಒಗಳ ಜೊತೆ ಡಿಸಿ ಸಭೆ ನಡೆಸಿದ್ದಾರೆ.
ಹೆಚ್ಚಿನ ಮಳೆಯಾಗಿ ಪ್ರವಾಹ ಉಂಟಾದಲ್ಲಿ, ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಹತ್ತಿರದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಮುಂದಾಗಬೇಕು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು. ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಪ್ರತಿ ನಿತ್ಯ ಕುಡಿಯುವ ನೀರನ್ನು ಪರೀಕ್ಷೆ ಮಾಡಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹೆಚ್ಚಿನ ಕಾಳಜಿವಹಿಸಬೇಕು. ಯಾವುದೇ ರೀತಿಯ ಲೋಪ ಉಂಟಾಗದಂತೆ ಗಮನಹರಿಸಬೇಕು ಎಂದು ಸೂಚಿಸಿದ್ದಾರೆ.
ಪರಿಸರ ಮತ್ತು ಸ್ವಚ್ಛತೆ ಕಾಪಾಡುವತ್ತ ಹೆಚ್ಚಿನ ಮುತುವರ್ಜಿ ವಹಿಸಬೇಕು. ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ನೀರಿನ ಟ್ಯಾಂಕ್‍ಗಳನ್ನು ಸ್ವಚ್ಚಗೊಳಿಸಬೇಕು. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಹೊಟ್ಟೆನೋವು, ತಲೆನೋವು, ವಾಂತಿಬೇಧಿ ಇತರೆ ರೋಗಗಳು ಕಂಡುಬಂದರೆ ಕೂಡಲೇ ಚಿಕಿತ್ಸೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಮೀನುಗಾರಿಕೆ ನಿಷೇಧ: ಮುಂಗಾರು ಮಳೆ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಕುರಿತು ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.












Click it and Unblock the Notifications