ಕೊಡಗು; ಮಳೆಗಾಲ ಎದುರಿಸಲು ಸಿದ್ಧತೆ, ಸಹಾಯವಾಣಿ ಆರಂಭ
ಮಡಿಕೇರಿ, ಮೇ 23; "ಸದ್ಯದಲ್ಲಿಯೇ ನೈಋತ್ಯ ಮುಂಗಾರು ಮಳೆ ಆರಂಭವಾಗಲಿದ್ದು, ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಸನ್ನದ್ಧರಾಗಿರಬೇಕು" ಎಂದು ಕೊಡಗು ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ ಸೂಚನೆ ನೀಡಿದರು.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಮಳೆ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ಪ್ರಕೃತಿ ವಿಕೋಪ ನಿರ್ವಹಣಾ ಸಂಯೋಜಕರಾದ ಅನನ್ಯ ವಾಸುದೇವ್ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿಗಳು ಮಾತನಾಡಿ, "ಮಳೆಯಿಂದ ಜೀವಹಾನಿ, ಜಾನುವಾರು ಹಾನಿಯಾದಲ್ಲಿ ಕೂಡಲೇ ವರದಿ ನೀಡಿ, ಪರಿಹಾರ ವಿತರಿಸುವಂತೆ ಎಲ್ಲಾ ತಹಶೀಲ್ದಾರರಿಗೆ ಮತ್ತು ಬೆಳೆ ಹಾನಿ ಸಂಭವಿಸಿದ್ದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೂಕ್ತ ರೀತಿಯಲ್ಲಿ ಅಂದಾಜು ನಷ್ಟದ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ" ಸೂಚಿಸಿದರು.
ಇಲಾಖೆಗಳು ಸಮನ್ವಯ; ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿರುವುದರ ಕುರಿತು ಮತ್ತೊಮ್ಮೆ ಪರಿಶೀಲಿಸಿ, ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಯಿತು.

ಅರಣ್ಯ ಇಲಾಖೆ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೀಳುವ ಮರಗಳನ್ನು ಕೂಡಲೇ ತೆರವುಗೊಳಿಸಲು ಅಗತ್ಯವಿರುವ ಎಲ್ಲಾ ಯಂತ್ರೋಪಕರಣಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು.
ಆರೋಗ್ಯ ಇಲಾಖೆ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾದಂತಹ ರೋಗಗಳು ಹರಡದಂತೆ ಎಚ್ಚರವಹಿಸಿ. ಈ ಬಗ್ಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೂಚನೆ ನೀಡುವಂತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಅಗ್ನಿಶಾಮಕ ದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣಗಳೊಂದಿಗೆ ಸನ್ನದ್ಧವಾಗಿರಬೇಕು. ಗೃಹರಕ್ಷಕದಳದ ಸಿಬ್ಬಂದಿಗಳು ಸಹ ತುರ್ತು ಸೇವೆಗೆ ಲಭ್ಯವಿರುವಂತೆ ಕ್ರಮಕೈಗೊಳ್ಳಬೇಕು. ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಕೂಡಲೇ ಸರಿಪಡಿಸಬೇಕು. ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ತಂತಿಯಿಂದ ಯಾವುದೇ ಜೀವಹಾನಿಯಾಗದಂತೆ ಎಚ್ಚರವಹಿಸಿ ಎಂದು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ಸಹಾಯವಾಣಿ ಆರಂಭ; ಮಳೆಗಾಲದ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗುವಂತೆ 24*7 ಕಂಟ್ರೋಲ್ ರೂಂ, ಸಹಾಯವಾಣಿ ಸಂಖ್ಯೆಗಳನ್ನು ಮಾಧ್ಯಮಗಳ ಮೂಲಕ ಪ್ರಚಾರ ಮಾಡಬೇಕು. ಸಹಾಯವಾಣಿಗೆ ಬರುವ ದೂರುಗಳು ಕಡ್ಡಾಯವಾಗಿ ದಾಖಲಾಗಬೇಕು. ಪರಿಹಾರಕ್ಕೆ ದೂರನ್ನು ಯಾರಿಗೆ ವರ್ಗಾಯಿಸಲಾಗಿದೆ ಎಂಬುದರ ವಿವರ ನಮೂದಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಮಳೆ, ಪ್ರವಾಹ ಸಂದರ್ಭದಲ್ಲಿ ತೊಂದರೆಯಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಜೀವ, ಆಸ್ತಿ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಮಳೆಯಿಂದಾಗಿ ಗಿಡ-ಮರಗಳು ವಿದ್ಯುತ್ ತಂತಿಗಳ ಮೇಲೆ ಉರುಳಿ ವಿದ್ಯುತ್ ಕಡಿತ, ಕುಡಿಯುವ ನೀರಿಗೆ ತೊಂದರೆಯಂತಹ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಕಂದಾಯ, ಸೆಸ್ಕ್, ಅರಣ್ಯ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳ ಮಧ್ಯೆ ಸಮನ್ವಯ ಮುಖ್ಯವಾಗಿದ್ದು, ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ಕೊಡಲಾಗಿದೆ.
ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಹಾಗೂ ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಬೇರೇಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು. ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯಪಡೆ ಸಮಿತಿ ಸಭೆ ನಡೆಸಬೇಕು. ತಮ್ಮ ಇಲಾಖಾ ಹಂತದಲ್ಲಿಯೂ ಸಹ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ ನಿರ್ದೇಶನ ನೀಡಿದರು.
ಸಭೆಯಲ್ಲಿ ಎಸ್‌ಪಿ ಕೆ. ರಾಮರಾಜನ್ ಪ್ರಕೃತಿ ವಿಕೋಪ ಸಂದರ್ಭದಲ್ಲಿ ವಿವಿಧ ತಂಡಗಳು ಹೇಗೆ ಕಾರ್ಯನಿರ್ವಹಣೆ ಮಾಡಬೇಕು? ಎಂಬುದರ ಬಗ್ಗೆ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ಪ್ರಕೃತಿ ವಿಕೋಪ ನಿರ್ವಹಣಾ ಸಂಯೋಜಕರಾದ ಅನನ್ಯ ವಾಸುದೇವ್ ಸಭೆಗೆ ಹಲವು ಮಾಹಿತಿ ನೀಡಿದರು.












Click it and Unblock the Notifications