ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ಸಂಭ್ರಮವಿಲ್ಲದೆ ಕಳೆಗುಂದಿದ ಕೈಲ್ ಮುಹೂರ್ತ...

|
Google Oneindia Kannada News

ಮಡಿಕೇರಿ, ಸೆಪ್ಟೆಂಬರ್ 3: ಕಳೆದ ಮೂರು ವರ್ಷಗಳಿಂದ ಕೊಡಗಿನ ಪರಿಸ್ಥಿತಿಯೇ ಭಿನ್ನವಾಗಿದೆ. ಮೊದಲಿದ್ದ ಸಂಭ್ರಮವೇ ಇಲ್ಲದಂತಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗಿನಲ್ಲಿ ಹಬ್ಬಗಳ ಆಚರಣೆ ವಿಶಿಷ್ಟ ಮತ್ತು ವಿಭಿನ್ನವಾಗಿರುತ್ತದೆ. ಅದರಲ್ಲೂ ಮಳೆಗಾಲ ಕಡಿಮೆಯಾಗುತ್ತಿದ್ದಂತೆಯೇ ಆಚರಣೆ ಮಾಡುವ ಕೈಲ್ ಮುಹೂರ್ತ ಕೊಡಗಿನ ಪ್ರಮುಖ ಹಬ್ಬವಾಗಿದೆ.

Recommended Video

Bollywood ಹಾಗು ನಮ್ಮ ಇಂಡಸ್ಟ್ರಿಗೂ Drugs link ತಿಳಿಸಿದ Prashanth Sambargi | Oneindia Kannada

ಕೈಲ್ ಮುಹೂರ್ತ ಕೊಡಗಿನವರ ಪಾಲಿಗೆ ಮನರಂಜನೀಯ ಹಬ್ಬ. ಗದ್ದೆ ಕೆಲಸದಲ್ಲಿ ದೇಹವನ್ನು ದಂಡಿಸಿದವರು ಹೊಟ್ಟೆ ತುಂಬಾ ಉಂಡು... ಕುಡಿದು... ಸಂಭ್ರಮಿಸುವ ಹಾಗೂ ಮೈದಾನಗಳಲ್ಲಿ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸುವ ಹಬ್ಬವಾಗಿತ್ತು. "ಕೈಲ್ ಮುಹೂರ್ತ" ಹಬ್ಬವನ್ನು ಕೊಡವ ಭಾಷೆಯಲ್ಲಿ "ಕೈಲ್ ‌ಪೊಳ್ದ್" ಎಂದು ಕರೆಯಲಾಗುತ್ತದೆ. "ಕೈಲ್" ಎಂದರೆ ಆಯುಧ "ಪೊಳ್ದ್" ಎಂದರೆ ಹಬ್ಬ. ಹಾಗಾಗಿ ಕೊಡಗಿನವರಿಗೊಂದು ಆಯುಧಪೂಜೆಯೇ... "ಕೈಲ್ ‌ಮುಹೂರ್ತ". ಈ ಹಬ್ಬವು ಕೊಡಗಿನವರ ಲೆಕ್ಕದ ಪ್ರಕಾರ ಚಿನ್ಯಾರ್ ತಿಂಗಳ ಹದಿನೆಂಟನೇ ತಾರೀಕಿನಂದು ಬರುತ್ತದೆ. ಅಂದರೆ ಪ್ರತಿ ವರ್ಷ ಸೆಪ್ಟೆಂಬರ್ 3ರಂದು ಆಚರಣೆ ನಡೆಯುತ್ತದೆ.

 ಕೈಲ್ ಮುಹೂರ್ತಕ್ಕಿದೆ ರೋಮಾಂಚನಕಾರಿ ಹಿನ್ನೆಲೆ

ಕೈಲ್ ಮುಹೂರ್ತಕ್ಕಿದೆ ರೋಮಾಂಚನಕಾರಿ ಹಿನ್ನೆಲೆ

ಕೈಲ್ ‌ಮುಹೂರ್ತಕ್ಕೆ ತನ್ನದೇ ಆದ ಆಚರಣೆ ಹಾಗೂ ರೋಮಾಂಚನಕಾರಿ ಹಿನ್ನೆಲೆಯಿದೆ. ಗುಡ್ಡಕಾಡುಗಳಿಂದ ಕೂಡಿದ ಕೊಡಗಿನಲ್ಲಿ ಹಿಂದೆ ಭತ್ತದ ಕೃಷಿ ಹೊರತುಪಡಿಸಿದರೆ ಈಗಿನಂತೆ ವಾಣಿಜ್ಯ ಬೆಳೆಗಳ ಭರಾಟೆಯಿರಲಿಲ್ಲ. ಹೀಗಾಗಿ ಕೃಷಿಕರಿಗೆ ನಿರ್ದಿಷ್ಟ ಕೃಷಿ ಭೂಮಿಗಳಿರಲಿಲ್ಲ. ಅವರವರ ಶಕ್ತಿ, ಸಾಮರ್ಥ್ಯಕ್ಕನುಗುಣವಾಗಿ ಭೂಮಿಯಲ್ಲಿ ಬೇಸಾಯ ಮಾಡುತ್ತಿದ್ದರು. ಈ ಸಂದರ್ಭ ಬೆಳೆಗಳನ್ನು ನಾಶ ಮಾಡಲು ಬರುವ ವನ್ಯ ಮೃಗಗಳೊಂದಿಗೆ ಹೋರಾಡಿ ಬೆಳೆಗಳನ್ನು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿತ್ತು. ಆದ್ದರಿಂದ ಆಯುಧಗಳ ಅಗತ್ಯವಿತ್ತು. ಅಲ್ಲದೆ ಅದನ್ನು ಬಳಸಲು ಮಕ್ಕಳಿಗೆ ಚಿಕ್ಕಂದಿನಿಂದಲೇ ಹೇಳಿಕೊಡಲಾಗುತ್ತಿತ್ತು.

ಚಿತ್ರಗಳು : ಕೊಡಗಿನಲ್ಲಿ ಸರಳವಾಗಿ ಕೈಲ್ ಮೂರ್ತ ಹಬ್ಬ ಆಚರಣೆಚಿತ್ರಗಳು : ಕೊಡಗಿನಲ್ಲಿ ಸರಳವಾಗಿ ಕೈಲ್ ಮೂರ್ತ ಹಬ್ಬ ಆಚರಣೆ

ಮಳೆಗಾಲಕ್ಕೆ ಮುನ್ನ ಬೇಟೆ ಇನ್ನಿತರೆ ಕಾರ್ಯಗಳಲ್ಲಿ ತೊಡಗಿರುತ್ತಿದ್ದ ಕೊಡಗಿನ ಜನ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆಯೇ ಆಯುಧಗಳನ್ನು ಕೆಳಗಿಟ್ಟು ನೇಗಿಲು, ಗುದ್ದಲಿಗಳನ್ನು ಹಿಡಿದು ಗದ್ದೆಗಿಳಿದುಬಿಡುತ್ತಿದ್ದರು. ಸಾಮಾನ್ಯವಾಗಿ ಜೂನ್ ತಿಂಗಳಲ್ಲಿ ಗದ್ದೆ ಕೆಲಸ ಆರಂಭವಾದರೆ ಅದು ಆಗಸ್ಟ್ ತಿಂಗಳಲ್ಲಿ ಮುಕ್ತಾಯವಾಗುತ್ತಿತ್ತು. ಸುರಿಯುವ ಮಳೆಯಲ್ಲಿ ಗದ್ದೆ ಕೆಲಸ ಮಾಡುವುದೆಂದರೆ ಸುಲಭದ ಕೆಲಸವಾಗಿರಲಿಲ್ಲ. ಜೊತೆಗೆ ನಿರ್ದಿಷ್ಟ ಸಮಯದಲ್ಲಿ ಮಾಡಿ ಮುಗಿಸಲೇ ಬೇಕಾಗಿದ್ದುದರಿಂದ ಬಿಡುವಿಲ್ಲದ ದುಡಿಮೆ ಅನಿವಾರ್ಯವಾಗಿತ್ತು.

 ನೇಗಿಲು ನೊಗಗಳಿಗೆ ಪೂಜೆ

ನೇಗಿಲು ನೊಗಗಳಿಗೆ ಪೂಜೆ

ಈ ದಿನಗಳಲ್ಲಿ ಕೋವಿಯನ್ನು ನೆಲ್ಲಕ್ಕಿ ಬಾಡೆ (ದೇವರಕೋಣೆ)ಯಲ್ಲಿಡಲಾಗುತ್ತಿತ್ತು. ಅಲ್ಲದೆ ಕಕ್ಕಡ ಮಾಸ (ಜುಲೈ 17ರಿಂದ ಆಗಸ್ಟ್ 16ರವರೆಗಿನ ಒಂದು ತಿಂಗಳ ಅವಧಿ)ದಲ್ಲಿ ಶುಭಕಾರ್ಯ, ಬೇಟೆ ಮುಂತಾದ ಯಾವುದೇ ಕಾರ್ಯವನ್ನು ಮಾಡುತ್ತಿರಲಿಲ್ಲ. ಕೃಷಿ ಚಟುವಟಿಕೆಯಷ್ಟೆ ಪ್ರಮುಖವಾಗಿರುತ್ತಿತ್ತು.

ಹೀಗೆ ದುಡಿಮೆಯಲ್ಲೇ ತಮ್ಮನ್ನು ತೊಡಗಿಸಿಕೊಂಡಿದ್ದ ಮಂದಿ ಮೈ ಕೊಡವಿಕೊಂಡು ಮೇಲೇಳುತ್ತಿದ್ದದ್ದು ಕೈಲ್ ‌ಮುಹೂರ್ತ ಹಬ್ಬದ ಸಂದರ್ಭವೇ ಆಗಿತ್ತು. ಹಬ್ಬದ ದಿನದಂದು ತಮ್ಮೊಂದಿಗೆ ಹೆಗಲು ಕೊಟ್ಟು ದುಡಿದ ಎತ್ತುಗಳನ್ನು ಶುಭ್ರವಾಗಿ ಸ್ನಾನ ಮಾಡಿಸಿ ಬಳಿಕ ನೇಗಿಲು ನೊಗಗಳನ್ನು ಚೆನ್ನಾಗಿ ತೊಳೆದು ಅವುಗಳಿಗೆ ಪೂಜೆ ಮಾಡಲಾಗುತ್ತದೆ. ಬಳಿಕ ಸ್ನಾನ ಮಾಡಿಸಿದ ಎತ್ತುಗಳಿಗೆ ಎಣ್ಣೆ ಅರಿಶಿನವನ್ನು ಹಚ್ಚಿ ಕುತ್ತಿಗೆಗೆ ನೊಗವನ್ನಿಟ್ಟು ಪ್ರಾರ್ಥಿಸಿ ತೆಗೆಯಲಾಗುತ್ತದೆ. (ನಂತರ ಎತ್ತುಗಳನ್ನು ಉಳುಮೆಗೆ ಉಪಯೋಗಿಸುವುದು ಮುಂದಿನ ವರುಷದ ಮುಂಗಾರಿನಲ್ಲಿ ಮಾತ್ರ.) ಈ ಸಂದರ್ಭ ಅಕ್ಕಿಯಿಂದ ಮಾಡಿದ ವಿಶೇಷ ತಿಂಡಿಯನ್ನು ಸೇವಿಸಲಾಗುತ್ತದೆ.

 ಎತ್ತುಗಳ ಬದಲಿಗೆ ಗೋಪೂಜೆ

ಎತ್ತುಗಳ ಬದಲಿಗೆ ಗೋಪೂಜೆ

ಆದರೆ ಇತ್ತೀಚೆಗಿನ ದಿನಗಳಲ್ಲಿ ಗದ್ದೆಗಳು ಕಣ್ಮರೆಯಾಗಿ ಕಾಫಿ ತೋಟಗಳು ತಲೆ ಎತ್ತಿರುವುದರಿಂದ ಹಾಗೂ ಎತ್ತಿನ ಬದಲಾಗಿ ಟ್ರ್ಯಾಕ್ಟರ್ ಹಾಗೂ ಟಿಲ್ಲರ್ ‌ಗಳು ಬಂದಿರುವುದರಿಂದ ಎತ್ತುಗಳ ಬದಲಿಗೆ ಗೋಪೂಜೆ ಮಾಡುವುದು ಕೆಲವೆಡೆ ಕಂಡು ಬರುತ್ತದೆ. ಹಬ್ಬದ ದಿನ ಮುಂಜಾನೆ ಮನೆಯ ಯಜಮಾನ ಸ್ನಾನ ಮಾಡಿ ಕುತ್ತರ್ಚಿ ಎಂಬ ಮರದ ಕೊಂಬೆಯನ್ನು ತಂದು ನೇರಳೆ ಮರದ ರೆಂಬೆಯೊಂದಿಗೆ ಜೋಡಿಸಿ ಬಿಲ್ಲು ಬಾಣವನ್ನು ತಯಾರಿಸುತ್ತಾರೆ. ನಂತರ ಹಾಲು ಬರುವ ಮರಕ್ಕೆ ಚುಚ್ಚಿ ಬರುತ್ತಾರೆ. (ಇದನ್ನು ಕೊಡವ ಭಾಷೆಯಲ್ಲಿ ಆಪ್‌ಪತರ್ ಎಂದು ಕರೆಯಲಾಗುತ್ತದೆ) ನಂತರ ಕೋವಿಯನ್ನು ದೇವರಕೋಣೆಯಲ್ಲಿಟ್ಟು ಇದಕ್ಕೆ ಕಾಡಿನಲ್ಲಿ ಸಿಗುವ ವಿಶೇಷ ಹೂವಾದ ಕೋವಿ ಹೂವನ್ನಿಟ್ಟು ತಳಿಯತಕ್ಕಿ ಬೊಳಕ್ (ಅಕ್ಕಿ ತುಂಬಿದ ತಟ್ಟೆಯಲ್ಲಿಟ್ಟ ದೀಪ)ನ್ನು ಉರಿಸಿ ಇದರ ಸುತ್ತ ಕುಟುಂಬದ ಸದಸ್ಯರು ಸೇರುತ್ತಾರೆ. ಸಾಂಪ್ರದಾಯಿಕ ಉಡುಪಾದ ಕುಪ್ಪಚೇಲೆಯನ್ನು ಧರಿಸಿ ಹಿರಿಯರನ್ನು ಸೇರಿಸಿ ಅಕ್ಕಿ ಹಾಕಿ ಕುಟುಂಬವನ್ನು ರಕ್ಷಿಸುವಂತೆ ಪ್ರಾರ್ಥಿಸಿಕೊಳ್ಳುತ್ತಾರೆ. ಇದೇ ಸಂದರ್ಭ ಮನೆಯಲ್ಲಿ ಮಾಡಿದ ಭಕ್ಷ್ಯ ಭೋಜನ ಹಾಗೂ ಮದ್ಯವನ್ನು ಗುರುಕಾರಣರಿಗೆ ಇಟ್ಟು ಬೇಡಿಕೊಳ್ಳುತ್ತಾರೆ. ಅಲ್ಲದೆ ದೇವರ ಕೋಣೆಯಲ್ಲಿ ಕಿರಿಯರು ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಾರೆ.

ಕೊಡಗು ಪ್ರಕೃತಿ ವಿಕೋಪಕ್ಕೆ 'ಕೈಲ್' ಮುಹೂರ್ತ ಸಂಭ್ರಮ ಬಲಿ!ಕೊಡಗು ಪ್ರಕೃತಿ ವಿಕೋಪಕ್ಕೆ 'ಕೈಲ್' ಮುಹೂರ್ತ ಸಂಭ್ರಮ ಬಲಿ!

 ಊರು ಮೈದಾನಗಳಲ್ಲಿ ಗ್ರಾಮೀಣ ಕ್ರೀಡಾಕೂಟ

ಊರು ಮೈದಾನಗಳಲ್ಲಿ ಗ್ರಾಮೀಣ ಕ್ರೀಡಾಕೂಟ

ಹಿಂದಿನ ಕಾಲದಲ್ಲಿ ಹಬ್ಬದ ದಿನ ದೇವರ ಕೋಣೆಯಲ್ಲಿಟ್ಟ ಕೋವಿಯನ್ನು ಪೂಜೆಯ ಬಳಿಕ ಹೆಗಲಿಗೇರಿಸಿಕೊಂಡು ಕಾಡಿಗೆ ತೆರಳಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಮಾಂಸದೊಂದಿಗೆ ಮನೆಗೆ ಬರುತ್ತಿದ್ದರು. ಆದುದರಿಂದಲೇ ಇಂದಿಗೂ ಈ ಹಬ್ಬದಲ್ಲಿ ಮಾಂಸಕ್ಕೆ ಹೆಚ್ಚಿನ ಪ್ರಾಧಾನ್ಯ ನೀಡಲಾಗಿದೆ. ಇಂದು ಎಲ್ಲವೂ ಬದಲಾಗಿದೆ. ಆದರೆ ಸಂಪ್ರದಾಯ ಉಳಿದುಕೊಂಡಿದ್ದರೂ ಬೇಟೆಯನ್ನು ನಿಷೇಧಿಸಿರುವುದರಿಂದ ಕೈಲ್ ‌ಮುಹೂರ್ತ ಹಬ್ಬದ ದಿನದಂದು ಊರ ಮೈದಾನಗಳಲ್ಲಿ ಗ್ರಾಮೀಣ ಕ್ರೀಡಾಕೂಟಗಳನ್ನು ಏರ್ಪಡಿಸಿ ಅಲ್ಲಿ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪುರುಷರು, ಮಹಿಳೆಯರು ಪಾಲ್ಗೊಂಡು ತಮ್ಮ ಶೌರ್ಯ ಪ್ರದರ್ಶಿಸುತ್ತಾರೆ.

ಸಾಮಾನ್ಯವಾಗಿ ಕೈಲ್ ‌ಮುಹೂರ್ತ ಹಬ್ಬಕ್ಕೆ ಕೊಡಗಿನ ಮಂದಿ ದೂರದ ಯಾವುದೇ ಊರಿನಲ್ಲಿದ್ದರೂ ತಪ್ಪದೆ ಬರುತ್ತಾರೆ. ಕುಟುಂಬದ ಹಾಗೂ ಊರ ಜನರೊಂದಿಗೆ ಬೆರೆತು ಹಬ್ಬದ ಸಂತಸವನ್ನು ಹಂಚಿಕೊಳ್ಳುತ್ತಾರೆ. ಹಾಗಾಗಿ ಕೈಲ್ ‌ಮುಹೂರ್ತ ಪ್ರತಿ ಕುಟುಂಬ ಹಾಗೂ ಊರಿನಲ್ಲಿ ಆತ್ಮೀಯ ಸಂಬಂಧ ಬೆಸೆಯುವ ಹಾಗೂ ಎಲ್ಲರೂ ಸಂಭ್ರಮ ಪಡುವ ಹಬ್ಬವಾಗಿದೆ.

ಆದರೆ ಈ ಬಾರಿ ಕೊರೊನಾದಿಂದಾಗಿ ಜನರಲ್ಲಿ ಸಂಭ್ರಮವೇ ಇಲ್ಲದಾಗಿದೆ. ಆದರೂ ಜನ ಹಬ್ಬವನ್ನು ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸುತ್ತಿರುವುದು ಕಂಡು ಬರುತ್ತಿದೆ.

English summary
Due to coronavirus and flood hit effect, people of kodagu celebrating kail festival in simple manner
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X