ಕೊಡಗು: ಪೊಲೀಸ್ ಭದ್ರತೆಯಲ್ಲಿ ನಡೆಯಲಿದೆ ಟಿಪ್ಪು ಜಯಂತಿ
ಮಡಿಕೇರಿ, ನವೆಂಬರ್ 09: ಟಿಪ್ಪು ಜಯಂತಿ(ನ.10) ಆಚರಣೆ ಸಂದರ್ಭ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಂದೋಬಸ್ತ್ ಕಾರ್ಯಕೈಗೊಳ್ಳಲಾಗಿದೆ ಎಂದು ಮಡಿಕೇರಿ ಎಸ್ಪಿ ಪಿ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇರಳ ರಾಜ್ಯದ ಕಣ್ಣೂರು, ವಯನಾಡ್, ಕಾಸರಗೋಡು ಹಾಗೂ ಹಾಸನ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗೆ ಹೊಂದಿಕೊಂಡಂತಹ 10 ಚೆಕ್ ಪೋಸ್ಟ್ ಗಳು ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಒಟ್ಟು 40 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಹೊರಜಿಲ್ಲೆ ಹಾಗೂ ಹೊರರಾಜ್ಯದಿಂದ ಬರುವಂತಹ ಎಲ್ಲಾ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ ಹಾಗೂ 60 ಆಂತರಿಕ ವಿಶೇಷ ಚೆಕ್‍ಪೋಸ್ಟ್‍ಗಳು ಪೊಲೀಸ್ ಠಾಣಾ ಮಟ್ಟದಲ್ಲಿ ಕಾರ್ಯನಿರ್ವಹಿಸಲಿವೆ. ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆಗಳಲ್ಲಿ ಒಟ್ಟು 249 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಎಲ್ಲ್ಲ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಯಿಂದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ನೇಮಿಸಲಾಗಿದ್ದು, 01 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 08 ಡಿವೈಎಸ್ಪಿ, 23 ಪೊಲೀಸ್ ಇನ್ಸ್ಪೆಕ್ಟರ್, 68 ಸಬ್ ಇನ್ಸ್ ಪೆಕ್ಟರ್, 113 ಎಎಸ್ಐಗಳನ್ನು ನೇಮಿಸಲಾಗಿದೆ.
100 ವಾಹನಗಳನ್ನು ದಿನದ 24 ಗಂಟೆ ಗಸ್ತಿಗೆ ನೇಮಿಸಲಾಗಿರುತ್ತದೆ. ಇದಲ್ಲದೆ, ಅರಣ್ಯ ಇಲಾಖೆಯ ವತಿಯಿಂದ 14 ರ್ಯಾಪಿಡ್ ರೆಸ್ಪಾನ್ಸ್ ತಂಡವನ್ನು ಹಾಗೂ 75 ಸಿಬ್ಬಂದಿಗಳನ್ನು ಪೊಲೀಸರೊಂದಿಗೆ ಸಹಕರಿಸಲು ನಿಯೋಜಿಸಲಾಗಿರುತ್ತದೆ. ಕಂದಾಯ ಇಲಾಖೆಯ ವತಿಯಿಂದ 16 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಯವರನ್ನು ಎಲ್ಲಾ ಹೋಬಳಿ ಕೇಂದ್ರಗಳಿಗೆ ನಿಯೋಜಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ ಯಾರು ಸಹ ಆತಂಕಪಡುವ ಅಗತ್ಯವಿಲ್ಲ. ಇತರೆ ಜಯಂತಿಗಳಂತೆ ಈ ಜಯಂತಿಯೂ ನಡೆಯಲಿದೆ ಎಂದು ಹೇಳಿದ್ದಾರೆ.
ನಿಷೇಧಾಜ್ಞೆ ಜಾರಿ
ಸರ್ಕಾರದ ನಿರ್ದೇಶನದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದಂಡ ಪ್ರಕ್ರಿಯೆ ಸಂಹಿತೆ 1973ರ ಸೆಕ್ಷನ್ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರಡಿ ನ.9 ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 11 ರ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ.
ಮದ್ಯ ಮಾರಾಟ ನಿಷೇಧ
ನ.10 ರಂದು ಟಿಪ್ಪು ಜಯಂತಿ ಸಂಬಂಧ ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಂತೆ ನ.9 ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್ 11 ರ ಬೆಳಗ್ಗೆ 8 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಮದ್ಯ ಮಾರಾಟ ಮಳಿಗೆಗಳಲ್ಲಿ ಎಲ್ಲ್ಲ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.












Click it and Unblock the Notifications