ಹಾರಂಗಿ ಡ್ಯಾಂನಿಂದ ನೀರು ಬಿಡುಗಡೆ: ಜನರಿಗೆ ಎಚ್ಚರಿಕೆ
ಮಡಿಕೇರಿ, ಜುಲೈ 09: ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯ ಭರ್ತಿಯಾಗುವ ಮುನ್ನವೇ ಸೋಮವಾರ ಸಂಜೆ 1 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
ಕೊಡಗು ಜಿಲ್ಲಾಡಳಿತದ ಮಾಹಿತಿಯಂತೆ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಸೋಮವಾರದ ನೀರಿನ ಮಟ್ಟ 2,848 ಅಡಿಗಳು. 2,394 ಕ್ಯುಸೆಕ್ ಒಳಹರಿವು ಡ್ಯಾಂಗೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ 4 ಗೇಟ್‌ಗಳ ಮೂಲಕ 1 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಆದ್ದರಿಂದ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣವೂ ಹೆಚ್ಚಾಗುತ್ತಿರುತ್ತದೆ. ಹಾಗೆಯೇ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತದೆ. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ ಮನವಿ ಮಾಡಿದ್ದಾರೆ.
ಶಾಸಕರ ಹೇಳಿಕೆ: ಹಾರಂಗಿ ಡ್ಯಾಂನಿಂದ ನದಿಗೆ ನೀರು ಹರಿಸುತ್ತಿರುವ ಬಗ್ಗೆ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಮಾತನಾಡಿದ್ದಾರೆ. " ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ" ಎಂದರು.
"ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದೆ. ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ಮುನ್ನೆಚ್ಚರಿಕೆ ವಹಿಸಬೇಕು" ಎಂದರು.
ಹಾರಂಗಿ ಡ್ಯಾಂ ಕೊಡಗು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು ಮತ್ತು ಕೆ. ಆರ್. ನಗರ ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ಸೇರಿದಂತೆ 1.5 ಲಕ್ಷ ಹೆಕ್ಟರ್ ಪ್ರದೇಶಕ್ಕೆ ನೀರು ಒದಗಿಸುವ ಪ್ರಮುಖ ಜಲಾಶಯವಾಗಿದೆ.
ಈ ಡ್ಯಾಂನಿಂದ ನೀರನ್ನು ನದಿಗೆ ಬಿಟ್ಟ ಬಳಿಕ ಅದು ಕೂಡಿಗೆ ಬಳಿ ಹಾರಂಗಿ ನದಿ ಮೂಲಕ ಕಾವೇರಿ ನದಿಯನ್ನು ಸೇರಲಿದೆ. ಇದರಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಲಿದ್ದು, ಇದರಿಂದಾಗಿ ಕೆಆರ್‌ಎಸ್ ಜಲಾಶಯದ ಒಳಹರಿವು ಏರಿಕೆಯಾಗಲಿದೆ.
ಜಿಲ್ಲಾಡಳಿತದ ಮಾಹಿತಿಯಂತೆ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆ 944.51 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 309.61 ಮಿ. ಮೀ. ಮಳೆಯಾಗಿತ್ತು. ಮೇ ತಿಂಗಳಿನಲ್ಲಿ ಪೂರ್ವ ಮುಂಗಾರು ಮಳೆ ಕೊಡಗಿನಲ್ಲಿ ಉತ್ತಮವಾಗಿ ಸುರಿದಿತ್ತು. ಜೂನ್‌ನಲ್ಲಿ ವಾಡಿಕೆಯಷ್ಟು ಮಳೆಯಾಗಿತ್ತು.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, "ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು" ಎಂದು ಸೂಚನೆ ನೀಡಿದ್ದಾರೆ.
"ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಕೆರೆಕಟ್ಟೆ, ತೊರೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಆ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಯ ಕಡೆ ಹೆಚ್ಚಿನ ಗಮನಹರಿಸಬೇಕು" ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.












Click it and Unblock the Notifications