ಡಾಲಿ ಧನಂಜಯ್‌ಗೆ ಲೋಕಸಭಾ ಟಿಕೆಟ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮಂಡ್ಯ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಭಾನುವಾರ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿಯವರು 28 ಕ್ಕೆ 28 ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ತಿಳಿದಿದೆ. ಅದಕ್ಕೆ ಸುಳ್ಳು ಹೇಳುತ್ತಿದ್ದಾರೆ ಎಂದರು.

ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ ಅವರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಹೇಳಿದರು.
ಡಾಲಿ ಧನಂಜಯಗೆ ಟಿಕೆಟ್
ಚಿತ್ರ ನಟ ಡಾಲಿ ಧನಂಜಯ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಮ್ಮ ಪಕ್ಷದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಇದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು. ಮೈಸೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಧನಂಜಯ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಕೇಳಿಬಂದಿತ್ತು. ಈ ಊಹಾಪೋಹಗಳಿಗೆ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.
ಜೆಡಿಎಸ್ ವಿರುದ್ಧ ಟೀಕೆ
ಕಳೆದ ಬಾರಿ ಮೈತ್ರಿಯಿಂದ ಬಿಜೆಪಿಯನ್ನು ಎದುರಿಸಿದ್ದು ಈ ಬಾರಿ ಏಕಾಂಗಿಯಾಗಿ ಬಿಜೆಪಿಯನ್ನು ಎದುರಿಸುತ್ತಿರುವ ಬಗ್ಗೆ ಮಾತನಾಡಿ ಈಗ ಒಂದೇ ವಿರೋಧ ಪಕ್ಷವಿದೆ. ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಿದೆ. ಜೆಡಿಎಸ್ ಒಂದು ಪ್ರತ್ಯೇಕ ಪಕ್ಷ ವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಯವರೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.
ಬಜೆಟ್ ಬಿಜೆಪಿ ನಾಯಕರಿಗೆ ಅರ್ಥವಾಗಿಲ್ಲ
ಬಿಜೆಪಿ ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಬಜೆಟ್ ಅರ್ಥವಾಗಿಲ್ಲ. ಬಡವರ ವಿರೋಧಿ ಬಿಜೆಪಿಗೆ ಬಜೆಟ್ ಅರ್ಥವಾಗೋಲ್ಲ. ಬಡವರ ಪರವಾಗಿ ನಾವು ಕಾರ್ಯಕ್ರಮಗಳನ್ನು ನೀಡಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳು ಮಾತ್ರವಲ್ಲದೆ ಮೂಲಸೌಕರ್ಯ ಅಭಿವೃದ್ಧಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು ನೀಡುವ ಕೆಲಸ ಮಾಡಿದ್ದೇವೆ ಎಂದರು.
ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ
ಕೇಂದ್ರದಿಂದ 1.87 ಲಕ್ಷ ಕೋಟಿ ರೂ.ಗಳು ನಮಗೆ ನಷ್ಟವಾಗಿದೆ. ಆ ಅನುದಾನ ಬಂದರೆ ಇನ್ನೂ ಹೆಚ್ಚು ಕಾರ್ಯಕ್ರಮಗಳನ್ನು ರಾಜ್ಯಕ್ಕೆ ಕೊಡಬಹುದು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿಯಾದ ನಂತರ ಮಳವಳ್ಳಿಗೆ ಮೊದಲ ಬಾರಿ ಆಗಮಿಸುತ್ತಿದ್ದು, ಇಲ್ಲಿ ಸಮರ್ಥವಾದ ಮುಖಂಡರು ಮತ್ತು ಶಾಸಕರಿರುವುದರಿಂದ ಪದೇ ಪದೇ ಬರಬೇಕಾದ ಅಗತ್ಯವಿಲ್ಲ. ಜಿಲ್ಲಾ ಮಂತ್ರಿಗಳೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.












Click it and Unblock the Notifications