ಇಂದು ಮದ್ದೂರಿಗೆ ಸಿಎಂ ಭೇಟಿ: ಕದಲೂರಿನಲ್ಲಿ ಚರಂಡಿ, ರಸ್ತೆ ಕಾಮಗಾರಿ ಚುರುಕು
ಮಂಡ್ಯ, ನವೆಂಬರ್ 18: ವಿವಾಹ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ನವೆಂಬರ್ 18) ಮದ್ದೂರಿಗೆ ಆಗಮಿಸಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ಮದ್ದೂರು ನಗರದ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚುರುಕು ಸಿಕ್ಕಿದೆ.
ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಬಗ್ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಮಾತನಾಡಿದ್ದು, ಮುಖ್ಯಮಂತ್ರಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಪಕ್ಷದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಮೈಸೂರಿನಿಂದ ರಸ್ತೆ ಮೂಲಕ ಮದ್ದೂರಿನ ಶಿವಪುರಕ್ಕೆ ಸಂಜೆ 6.30ಕ್ಕೆ ಆಗಮಿಸುವ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಶಾಸಕ ಕೆ.ಎಂ. ಉದಯ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಾಲಾರ್ಪಣೆ ಮಾಡಿ ಸ್ವಾಗತಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳೀಗೌಡ, ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ, ರವಿಕುಮಾರ್ ಗಾಣಿಗ, ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ವಿವಿಧ ನಾಯಕರು ಮುಖ್ಯಮಂತ್ರಿಗಳ ಜೊತೆಯಲ್ಲಿ ಆಗಮಿಸಲಿದ್ದಾರೆ ಎಂದು ಹೇಳಿದರು.
ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ತಮ್ಮ ಆತ್ಮೀಯರಾದ ಮನ್‌ಮುಲ್ ಮಾಜಿ ನಿರ್ದೇಶಕ ಲಿಂಗನದೊಡ್ಡಿ ರಾಮಕೃಷ್ಣ ಅವರ ಪುತ್ರ ಎಲ್.ಆರ್. ಅಶ್ವಿನ್ ಮತ್ತು ಡಿ.ಎನ್.ರೇಖಾ ವಿವಾಹಪೂರ್ವ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ನಂತರ ಮುಖ್ಯಮಂತ್ರಿಗಳು ಶಾಸಕ ಕೆ.ಎಂ. ಉದಯ್ ಅವರ ಸ್ವಗ್ರಾಮಕ ಕದಲೂರು ಗ್ರಾಮಕ್ಕೆ ಭೇಟಿ ನೀಡಿ ಭೋಜನ ಸ್ವೀಕರಿಸಿದ ನಂತರ ರಾತ್ರಿ 10 ಗಂಟೆ ಸುಮಾರಿಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಮದ್ದೂರು, ಶಿವಪುರ, ಕದಲೂರು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಶಾಸಕರ ಹುಟ್ಟೂರು ಕದಲೂರು ಗ್ರಾಮಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಿದ್ದು, ಗ್ರಾಮವನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಕೆ.ಎಂ. ರವಿ, ಕದಲೂರು ಗ್ರಾ.ಪಂ. ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಶಿವಪ್ಪ, ಯರಗನಹಳ್ಳಿ ಹರೀಶ, ರವಿಕುಮಾರ್ ಉಪಸ್ಥಿತರಿದ್ದರು.











Click it and Unblock the Notifications