KRS Dam: ಕೆಆರ್‌ಎಸ್ ಜಲಾಶಯ ಭರ್ತಿ; ಸೋಮವಾರ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚಲುವರಾಸ್ವಾಮಿ ಭೇಟಿ
ದಕ್ಷಿಣ ಕರ್ನಾಟಕದ ಜೀವನಾಡಿ, ಬೆಂಗಳೂರಿನ ದಾಹ ನೀಗಿಸುವ ಕೃಷ್ಣರಾಜಸಾಗರ ಜಲಾಶಯ ತುಂಬುವ ಹಂತಕ್ಕೆ ಬಂದಿದೆ. ಕಳೆದ ವರ್ಷ ನೀರಿಗಾಗಿ ಜಗಳ ಆಡುವ ಸಂಕಷ್ಟ ಒದಗಿತ್ತು, ಈ ಬಾರಿ ಮಳೆಯ ಆಶೀರ್ವಾದಿಂದ ಮುಂಗಾರು ಆರಂಭದಲ್ಲೇ ಜಲಾಶಯ ತುಂಬಿದ್ದು, ಭಾರಿ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ.
ಜಲಾಶಯ ಭರ್ತಿಯಾಗುವ ಹಂತ ತಲುಪಿರುವ ಕಾರಣ ಸೋಮವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೃಷಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ. ಸೋಮವಾರ ಬೆಳಗ್ಗೆ 7.45ಕ್ಕೆ ಇಬ್ಬರೂ ನಾಯಕರು ಜಲಾಶಯ ವೀಕ್ಷಣೆ ಮಾಡಲಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

50,000 ಕ್ಯೂಸೆಕ್ಸ್ ನೀರು ಬಿಡುಗಡೆ
ಕೆಆರ್‌ಎಸ್ ಜಲಾಶಯ ಭರ್ತಿಯ ಹಂತ ತಲುಪಿರುವುದರಿಂದ ಭಾನುವಾರ ಬೆಳಗ್ಗೆಯಿಂದಲೇ ಅಣೆಕಟ್ಟೆಯಿಂದ 51,769 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾದಂತೆ ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ.
ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಾಗಲೇ ಜಲಾಶಯದ ನೀರಿನ ಮಟ್ಟ 123.10 ಅಡಿಗೆ ತಲುಪಿದೆ. ಅಣೆಕಟ್ಟೆಗೆ 69,617 ಕ್ಯುಸೆಕ್ ನೀರು ಹರಿದುಬರುತ್ತಿದೆ. ಅಣೆಕಟ್ಟೆಯಲ್ಲಿ ನೀರಿನ ಒತ್ತಡವನ್ನು ಕಡಿಮೆ ಮಾಡಲು ಜಲಾಶಯದಿಂದ 51,769 ಕ್ಯೂಸೆಕ್ ನೀರು ನದಿಗೆ ಹರಿಯಬಿಡಲಾಗಿದೆ.
ಅಣೆಕಟ್ಟೆಯಲ್ಲಿ 46.567 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹರಿಯಬಿಟ್ಟಿರುವುದರಿಂದ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.
ಹೆಚ್ಚುತ್ತಲೇ ಇದೆ ಒಳಹರಿವು
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಶನಿವಾರ ಬೆಳಗ್ಗೆ 51,375 ಕ್ಯುಸೆಕ್ ಇದ್ದ ಒಳಹರಿವಿನ ಪ್ರಮಾಣ ರಾತ್ರಿ 8 ಗಂಟೆ ಸಮಯಕ್ಕೆ 60,224 ಕ್ಯುಸೆಕ್‌ಗೆ ಏರಿಕೆಯಾಗಿತ್ತು. ಭಾನುವಾರ ಬೆಳಗಿನ ವೇಳೆಗೆ 69,617 ಕ್ಯೂಸೆಕ್‌ಗೆ ಏರಿಕೆಯಾಗಿತ್ತು.
ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವೇಶ ನಿರ್ಬಂಧ
ಅಣೆಕಟ್ಟೆಯಿಂದ ಹೆಚ್ಚಿನ ಪ್ರಮಾಣದ ನೀರನ್ನು ಹರಿಯಬಿಟ್ಟಿರುವುದರಿಂದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಶನಿವಾರ 15 ಸಾವಿರ ಕ್ಯುಸೆಕ್ ನೀರು ಹರಿಸುತ್ತಿದ್ದರಿಂದ ದೋಣಿ ವಿಹಾರ ಸ್ಥಗಿತಗೊಳಿಸಿ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಪ್ರಸ್ತುತ ನದಿಗೆ 50 ಸಾವಿರ ಕ್ಯುಸೆಕ್ ನೀರನ್ನು ಹರಿಸುತ್ತಿರುವುದರಿಂದ ಪಕ್ಷಿಧಾಮದ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣಬಸಪ್ಪ ಆದೇಶ ಹೊರಡಿಸಿದ್ದಾರೆ.












Click it and Unblock the Notifications