ಬಿಜೆಪಿಗೆ ಸೇರುವ ಯೋಗೇಶ್ವರ್ ಮದ್ದೂರಲ್ಲಿ ಸ್ಪರ್ಧೆ?
ಮಂಡ್ಯ, ಅಕ್ಟೋಬರ್ 17: ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಮದ್ದೂರಲ್ಲಿ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎನ್ನಲಾಗಿದೆ.
ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯಿಂದ ಬೇಸತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾಗಿ ಹೇಳುವ ಸಿ.ಪಿ. ಯೋಗೇಶ್ವರ್ ಸದ್ಯ ನಾನು ಯಾವ ಪಕ್ಷಕ್ಕೆ ಸೇರಬೇಕು ಎನ್ನುವುದರ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಹೇಳುತ್ತಿದ್ದಾರೆಯಾದರೂ ಅವರು ಈಗಾಗಲೇ ಬಿಜೆಪಿಯತ್ತ ಮನಸ್ಸು ಮಾಡಿದ್ದು ಮುಂದಿನ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತವಾಗಿದೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಪಕ್ಷಕ್ಕೆ ಸೇರ್ಪಡೆಯಾಗಬೇಕೆಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಈ ಸಂಬಂಧ ಅ. 22ರಂದು ನನ್ನ ಅಭಿಮಾನಿಗಳು ಹಾಗೂ ಮುಖಂಡರ ಸಭೆಯನ್ನು ಕರೆದಿದ್ದು, ಅವರ ತೀರ್ಮಾನದಂತೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪಕ್ಷವನ್ನು ಸೇರಿದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತವೆ. ಜೆಡಿಎಸ್ ಹಳೇ ಮೈಸೂರು ಭಾಗದಲ್ಲಿ ಮಾತ್ರ ತನ್ನ ಪ್ರಾಬಲ್ಯ ಹೊಂದಿದೆ. ಆದ್ದರಿಂದ ಯೋಚಿಸಿ ದೃಢ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ನನ್ನ ಮುಖಂಡರು ಹಾಗೂ ಅಭಿಮಾನಿಗಳು ಚನ್ನಪಟ್ಟಣ, ಮದ್ದೂರು, ಮಂಡ್ಯ ಸೇರಿದಂತೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲು ಹೇಳುತ್ತಾರೋ ಆ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ನನ್ನನ್ನು ಹೊರತುಪಡಿಸಿ ನನ್ನ ಕುಟುಂಬದಿಂದ ಬೇರಾರು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಅವರ ಮಗಳು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ನಾನು ಮತ್ತು ಡಿ.ಕೆ. ಶಿವಕುಮಾರ್ ಬಾಂಧವ್ಯ ಸುಮಾರು 25 ವರ್ಷಗಳದು. ಪಕ್ಷ ಬಿಡುವಾಗ ಟೀಕಿಸುವುದು ಸಹಜ. ಅವರ ಎಲ್ಲಾ ಪ್ರಶ್ನೆಗಳಿಗೆ ಅ. 22ರಂದು ಉತ್ತರ ನೀಡುವ ಮೂಲಕ ಯಾವ ಪಕ್ಷ ಸೇರುತ್ತೇನೆ ಎಂದು ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.












Click it and Unblock the Notifications