ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಮಂಡ್ಯ, ಆಗಸ್ಟ್ 17: ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದ ಕೆಆರ್‌ಎಸ್ ಅಣೆಕಟ್ಟೆ ಬಳಿ ಹಲವು ರೈತರು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.
ಈ ಪ್ರತಿಭಟನೆಯಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಉಪಸ್ಥಿತರಿದ್ದರು. ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ರೈತರು ಬುಧವಾರ ಮದ್ದೂರು ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯನ್ನೂ ತಡೆದು ಪ್ರತಿಭಟನೆ ನಡೆಸಿದರು.

ಕರ್ನಾಟಕ ಈಗಾಗಲೇ ತಮಿಳುನಾಡಿಗೆ 80,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದೆ. ನೆರೆಯ ರಾಜ್ಯಕ್ಕೆ ಈಗಾಗಲೇ ಕಾವೇರಿಯಿಂದ ತನ್ನ ಪಾಲಿನ ನೀರು ಬಂದಿದೆ. ಮಳೆ ಕೊರತೆ ಇರುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ದಿನಕ್ಕೆ 11 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾನಿರತ ರೈತರು ಆರೋಪಿಸಿದರು.
ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ ಎಂದು ವರದಿಯಾಗಿದೆ. ತಮಿಳುನಾಡಿಗೆ ಕರ್ನಾಟಕ ಪ್ರತಿದಿನ 12,718 ಕ್ಯೂಸೆಕ್ ನೀರು ಬಿಡುತ್ತಿದೆ.
ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಾವರಿ ಮತ್ತು ಕುಡಿಯಲು ಸಮರ್ಪಕ ನೀರು ಇಲ್ಲದಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ? ಎಂದು ಪ್ರಶ್ನೆ ಮಾಡಿದ್ದಾರೆ.












Click it and Unblock the Notifications