ಮಂಡ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಾಣ
ಮಂಡ್ಯ, ಆಗಸ್ಟ್ 07; "ಮಂಡ್ಯ ಜಿಲ್ಲೆಯ ರಚನೆ ಹಾಗೂ ಅಭಿವೃದ್ಧಿಗೆ ಅನೇಕ ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಸೋಮವಾರ ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರತಿಮೆ ನಿರ್ಮಾಣ ಸಂಬಂಧ ಸಭೆಯಲ್ಲಿ ಅವರು ಮಾತನಾಡಿದರು. "ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ನಿರ್ಮಾಣ ಬಹಳ ವರ್ಷದಿಂದ ನಡೆಯುತ್ತಿರುವ ಪ್ರಯತ್ನವಾಗಿದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿಕೊಡಿ" ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, "ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯನ್ನು ಕೃಷ್ಣ ಶಿಲೆಯಲ್ಲಿ ಮಾಡಲು 35 ಲಕ್ಷ ರೂ. ಮತ್ತು ಪಂಚಲೋಹದಲ್ಲಿ ನಿರ್ಮಾಣ ಮಾಡಿದರೆ 50 ಲಕ್ಷ ರೂ. ವೆಚ್ಚವಾಗಲಿದೆ. ಇದಕ್ಕೆ ಯೋಜನೆ ಸಿದ್ಧಪಡಿಸಿದ್ದು, ಸ್ಥಳವನ್ನು ನಿಗದಿಪಡಿಸಬೇಕಿದೆ" ಎಂದು ಸಭೆಗೆ ವಿವರಣೆ ನೀಡಿದರು.
ಎಲ್ಲಿ ಪ್ರತಿಮೆ ಸ್ಥಾಪನೆ ಮಾಡಬೇಕು?; ಸಭೆಯಲ್ಲಿ ಮಾತನಾಡಿದ ಸಚಿವರು, "ಕೆಆರ್‌ಎಸ್ ಅಚ್ಚುಕಟ್ಟು ಪ್ರದೇಶದಲ್ಲಿ ಹಸಿರು ಕಾಣುತ್ತಿರುವುದು ಹಾಗೂ ಜಿಲ್ಲೆಯಲ್ಲಿ ರೈತ ಚಟುವಟಿಕೆ ನಡೆಯುತ್ತಿರುವವರೆಗೂ ನಾಲ್ವಡಿ ಅವರ ನೆನಪು ಸದಾ ಜನತೆಯಲ್ಲಿ ಇರುತ್ತದೆ. ಈ ಹಿನ್ನಲೆಯಲ್ಲಿ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದ ಅನುದಾನ, ಶಾಸಕರ ಅನುದಾನ ಹಾಗೂ ಸಾರ್ವಜನಿಕರಿಂದ ದೇಣಿಗೆ ಸಹ ಸಂಗ್ರಹಿಸುವುದು ಸೂಕ್ತ" ಎಂದು ಹೇಳಿದರು.
ಸಭೆಯಲ್ಲಿ ಶಾಸಕ ರವಿ ಕುಮಾರ್ ಮಾತನಾಡಿ, "ಕನ್ನಂಬಾಡಿ ನಿರ್ಮಾಣ ಮಾಡಿ ಮಂಡ್ಯ ಜಿಲ್ಲೆಯ ಜನತೆಗೆ ಅನ್ನದಾತರಾಗಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ಸಿಲ್ವರ್ ಜ್ಯೂಬಲಿ ಪಾರ್ಕ್‌ನಲ್ಲಿ ನಿರ್ಮಾಣ ಮಾಡುವುದು ಸೂಕ್ತ ಎಂದು" ಸಲಹೆ ನೀಡಿದರು.
ಸಭೆಯಲ್ಲಿ ಕೆಲವು ಸಂಘಟನೆಯ ಮುಖ್ಯಸ್ಥರು ಪ್ರತಿಮೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿದರು. ಪ್ರತಿಮೆಯೊಂದಿಗೆ ಜೀವನ ಚರಿತ್ರೆ ಹಾಗೂ ಆರ್ಟ್ ಗ್ಯಾಲರಿ ಸಹ ನಿರ್ಮಾಣ ಮಾಡಿದರೆ. ಜನರು ಅವರ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳುತ್ತಾರೆ ಎಂದು ಚರ್ಚೆ ನಡೆಯಿತು.
ಕಲಾಮಂದಿರ ನವೀಕರಣ; ಸಭೆಯಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, "ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರವನ್ನು 1.60 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು" ಎಂದು ಹೇಳಿದರು.
"ನವೀಕರಣ ಕಾಮಗಾರಿಯ ಯೋಜನೆ ಸಿದ್ಧಪಡಿಸುವ ಸಂದರ್ಭದಲ್ಲಿ ಸೀಲಿಂಗ್, ವೈರಿಂಗ್ ಸೌಂಡ್ ಸಿಸ್ಟಮ್‌ಗಳ ನವೀಕರಣಕ್ಕೆ ಥಿಯೇಟರ್ ತಜ್ಞರ ಅಭಿಪ್ರಾಯ ಪಡೆದುಕೊಳ್ಳುವಂತೆ" ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, "ಕಲಾಮಂದಿರ ನವೀಕರಣಕ್ಕೆ ಸಂಬಂಧಿಸಿದಂತೆ 63 ಲಕ್ಷ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ಹಾಗೂ 97 ಲಕ್ಷ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿ ಕೈಗೊಳ್ಳಲಾಗುವುದು" ಎಂದರು.
ಮಂಡ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಬೇಕು ಎಂಬ ವಿಚಾರದ ಕುರಿತು 2020ರಿಂದ ಚರ್ಚೆ ನಡೆಯುತ್ತಿದೆ. ಆದರೆ ಸ್ಥಳ ಮತ್ತು ವೆಚ್ಚದ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ.
ಕೆಲವು ಸಂಘಟನೆಗಳು ಪ್ರತಿಮೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ನಿರ್ಮಾಣ ಮಾಡಬೇಕು ಎಂದು. ಕೆಆರ್‌ಎಸ್ ಡ್ಯಾಂ ಬಳಿಕ ಉದ್ಯಾನದಲ್ಲಿ ನಿರ್ಮಿಸಬೇಕು ಎಂದು ಸಲಹೆಗಳನ್ನು ನೀಡಿವೆ. ಆದರೆ ಇನ್ನೂ ಜಿಲ್ಲಾಡಳಿತ ಈ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ.












Click it and Unblock the Notifications