Karnataka election 2023: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ವಿವರ
ಮಂಡ್ಯ, ಮೇ, 03: ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದು ಸಕ್ಕರೆ ನಾಡಿನಲ್ಲಿ ಅಭ್ಯರ್ಥಿಗಳ ಪ್ರಚಾರದ ಭರಾಟೆಯೂ ಜೋರಾಗಿದೆ. ಹಾಗಾದರೆ 7 ಕ್ಷೇತ್ರಗಳಿಂದ ಕಣದಲ್ಲಿರುವ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ವಿವರವನ್ನು ಇಲ್ಲಿ ತಿಳಿಯಿರಿ.
ಮಂಡ್ಯ ವಿಧಾನಸಭಾ ಕ್ಷೇತ್ರ
ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪಿ.ರವಿಕುಮಾರ್, ಬಿಜೆಪಿಯಿಂದ ಅಶೋಕ್ ಜಯರಾಂ, ಜೆಡಿಎಸ್‌ನಿಂದ ಮನ್‌ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರ ಹಾಗೂ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಶಂಕರಗೌಡರ ಮೊಮ್ಮಗ ಕೆ.ಎಸ್. ವಿಜಯಾನಂದ, ಸರ್ವೋದಯ ಕರ್ನಾಟಕ ಪಕ್ಷದಿಂದ ಎಸ್.ಸಿ. ಮಧುಸೂಧನ್ ಸೇರಿದಂತೆ ಹಲವರು ಕಣದಲ್ಲಿದ್ದಾರೆ.

ಮದ್ದೂರು ವಿಧಾನಸಭಾ ಕ್ಷೇತ್ರ
ಹಾಗೆಯೇ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲೂ ಅಭ್ಯರ್ಥಿಗಳ ಬಿರುಸಿನ ಪ್ರಚಾರ ನಡೆಯುತ್ತಿದ್ದು, ಕಾಂಗ್ರೆಸ್‌ನಿಂದ ಕೆ.ಎಸ್. ಉದಯ್, ಬಿಜೆಪಿಯಿಂದ ಮನ್‌ಮುಲ್ ನಿರ್ದೇಶಕ ಎಸ್.ಪಿ. ಸ್ವಾಮಿ, ಜೆಡಿಎಸ್‌ನಿಂದ ಹಾಲಿ ಶಾಸಕ ಡಿ.ಸಿ. ತಮ್ಮಣ್ಣ ಸೇರಿದಂತೆ ಹಲವರು ಅಖಾಡದಲ್ಲಿದ್ದು, ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.
ಮಳವಳ್ಳಿ ವಿಧಾನಸಭಾ ಕ್ಷೇತ್ರ
ಇನ್ನು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿರುವ ಮಳವಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಪಿ.ಎಂ. ನರೇಂದ್ರಸ್ವಾಮಿ, ಬಿಜೆಪಿಯಿಂದ ಮುನಿರಾಜು, ಜೆಡಿಎಸ್‌ನಿಂದ ಹಾಲಿ ಶಾಸಕ ಡಾ. ಕೆ. ಅನ್ನದಾನಿ ಸ್ಪರ್ಧಾ ಕಣದಲ್ಲಿದ್ದಾರೆ.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ
ಹಾಗೆಯೇ ಪ್ರತಿಷ್ಠಿತ ಕ್ಷೇತ್ರವಾಗಿರುವ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಬಿಜೆಪಿಯಿಂದ ಯುವ ನಾಯಕ ಎಸ್. ಸಚ್ಚಿದಾನಂದ, ಜೆಡಿಎಸ್‌ನಿಂದ ಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಇತರರು ಕಣದಲ್ಲಿದ್ದು, ಅಬ್ಬರ ಪ್ರಚಾರದಲ್ಲಿ ತೊಡಗಿದ್ದಾರೆ.
ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರ
ಜಿಲ್ಲೆಯಲ್ಲೇ ಕಮಲವನ್ನು ಅರಳಿಸಿದ್ದ ಕೆ.ಆರ್. ಪೇಟೆ ಕ್ಷೇತ್ರವೂ ಪ್ರತಿಷ್ಠೆಯ ಕಣವಾಗಿದೆ. ಹೇಳಿ ಕೇಳಿ ಜೆಡಿಎಸ್ ಭದ್ರಕೋಟೆಯಂತಿದ್ದ ಕ್ಷೇತ್ರದಲ್ಲಿ ಕಳೆದ ಉಪ ಚುನಾವಣೆಯಲ್ಲಿ ಕೆ.ಸಿ. ನಾರಾಯಣಗೌಡ ಅವರ ಬಿಜೆಪಿಯಿಂದ ಆಯ್ಕೆಯಾಗಿದ್ದರು. ಈ ಬಾರಿ ಮತ್ತೊಮ್ಮೆ ಆಯ್ಕೆ ಬಯಸಿ ಕಣದಲ್ಲಿದ್ದರೆ, ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಬಿ.ಎಲ್. ದೇವರಾಜು ಕೈ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ನಿಂದ ಮನ್‌ಮುಲ್ ನಿರ್ದೇಶಕ ಎಚ್.ಟಿ. ಮಂಜು ಅವರು ಸ್ಪರ್ಧಿಸಿದ್ದಾರೆ. ಇವರೊಂದಿಗೆ ಹಲವರು ಸ್ಪರ್ಧಾ ಕಣದಲ್ಲಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ.
ನಾಗಮಂಗಲ ವಿಧಾನಸಭಾ ಕ್ಷೇತ್ರ
ಜಿಲ್ಲೆಯ ರಾಜಕೀಯದಲ್ಲೇ ಛಾಪು ಮೂಡಿಸಿದ್ದ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಎಐಸಿಸಿ ಸದಸ್ಯ ಎನ್.ಚಲುವರಾಯಸ್ವಾಮಿ ಅವರು ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡ ಅಖಾಡದಲ್ಲಿದ್ದಾರೆ. ಇನ್ನು ಜೆಡಿಎಸ್‌ನಿಂದ ಹಾಲಿ ಶಾಸಕ ಕೆ. ಸುರೇಶ್‌ಗೌಡ ಮತ್ತೊಮ್ಮೆ ಆಯ್ಕೆ ಬಯಸಿ ಕಣದಲ್ಲಿದ್ದಾರೆ. ಇವರೊಂದಿಗೆ ಹಲವರು ಸ್ಪರ್ಧಾ ಕಣದಲ್ಲಿದ್ದು, ಪ್ರಚಾರದಲ್ಲಿ ತೊಡಗಿದ್ದಾರೆ.
ಮೇಲುಕೋಟೆ ವಿಧಾನಸಭಾ ಕ್ಷೇತ್ರ
ಐತಿಹಾಸಿಕ ಕ್ಷೇತ್ರವಾಗಿರುವ ಮೇಲುಕೋಟೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೂ, ಚಳವಳಿಗೆ ಹೆಸರಾದ ಕೆ.ಎಸ್. ಪುಟ್ಟಣ್ಣಯ್ಯ ಅವರ ಪುತ್ರ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಿದ್ದರೆ, ಬಿಜೆಪಿಯಿಂದ ಡಾ. ಇಂದ್ರೇಶ್ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ಹಾಲಿ ಶಾಸಕ ಸಿ.ಎಸ್. ಪುಟ್ಟರಾಜು ಮತ್ತೊಮ್ಮೆ ಅದೃಷ್ಠ ಪರೀಕ್ಷೆಗೆ ಸಿದ್ಧರಾಗಿದ್ದಾರೆ. ಇವರೊಂದಿಗೆ ಹಲವರು ಕಣದಲ್ಲಿದ್ದು, ತೀವ್ರ ಪೈಪೋಟಿ ನಡೆಸಿದ್ದಾರೆ.












Click it and Unblock the Notifications