ಕಾವೇರಿ ನೀರು ಪೂರೈಸುವ ಮದ್ದೂರು ಬ್ರ್ಯಾಂಚ್ ಕಾಲುವೆ ಆಧುನೀಕರಣ:ಸಿಎಂ
ಮಂಡ್ಯ, ಡಿಸೆಂಬರ್ 16: ಮದ್ದೂರು ಬ್ರ್ಯಾಂಚ್ ಕಾಲುವೆಯ ಕೊನೆಯ ಹಳ್ಳಿಗೆ ಕಾವೇರಿ ನೀರು ತಲುಪುತ್ತಿಲ್ಲ. ಆದ್ದರಿಂದ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ಕಾಲುವೆಯ ಆಧುನೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಶುಕ್ರವಾರ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಿಜೆಪಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದರು. ಮಂಡ್ಯದ ಇತಿಹಾಸವನ್ನು ಅವಲೋಕಿಸಿದಾಗ, ಕೇವಲ ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕೆ ಬಂದಿದೆ. ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಮುಚ್ಚಿಸಿದ್ದರಿಂದ, ಮಂಡ್ಯದ ರೈತರು ಕಬ್ಬುಬೆಳೆಯನ್ನು ಮೈಸೂರಿಗೆ ತೆಗೆದುಕೊಂಡು ಹೋಗುವ ಪರಿಸ್ಥಿತಿಯಿತ್ತು. ಹಿಂದಿನ ಸರ್ಕಾರಗಳು ರೈತರ ಸಂಕಷ್ಟವನ್ನು ಇಮ್ಮಡಿಗೊಳಿಸಿದರು. ಬಿಜೆಪಿ ಸರ್ಕಾರ ಬಂದ ಮೇಲೆ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಿ, ಮಂಡ್ಯದ ರೈತರು ಕಬ್ಬನ್ನು ಇಲ್ಲಿಯೇ ಅರೆಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಎಂದರು.
ಮಂಡ್ಯ ಜಿಲ್ಲೆಯಲ್ಲಿ ಅಧಿಕಾರ ಹೊಂದಿದ್ದ ಪಕ್ಷಗಳು, ಅಲ್ಲಿನ ಜನರ ಸಂಕಷ್ಟಕ್ಕೆ ಪರಿಹಾರ ನೀಡಲಿಲ್ಲ. ಮಂಡ್ಯದ ಜನರನ್ನು ಭಾವನಾತ್ಮಕವಾಗಿ ಸೆಳೆದು, ಮತವನ್ನು ಪಡೆಯಲು ಇನ್ನು ಮುಂದೆ ಸಾಧ್ಯವಿಲ್ಲ. ಆದರೆ ಬಿಜೆಪಿ ಸರ್ಕಾರ ರೈತರ ಶ್ರಮಕ್ಕೆ ಬೆಲೆ ನೀಡಿದೆ. ಮಂಡ್ಯ ಜಿಲ್ಲೆಯ ಜನರ ಆಶೋತ್ತರಗಳನ್ನು ಸಾಕಾರಗೊಳಿಸುವ ಸರ್ಕಾರ ನಮ್ಮದಾಗಿದೆ.

ಕೃಷ್ಣರಾಜ ಸಾಗರ (ಕೆಆರ್ ಎಸ್) ಜಲಾಶಯಕ್ಕೆ 16 ಹೊಸ ಕ್ರೆಸ್ಟ್ ಗೇಟ್ ಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಹೊಸ ಗೇಟ್ ಗಳನ್ನು ಅಳವಡಿಸಲು ಸೂಕ್ತ ಕ್ರಮ ವಹಿಸಲಾಗುವುದು. ನಾನು ನೀರಾವರಿ ಸಚಿವನಾಗಿದ್ದ ಸಂದರ್ಭದಲ್ಲಿ 330 ಕೋಟಿ ರೂ. ವೆಚ್ಚದಲ್ಲಿ ಮಂಡ್ಯದ ಕಾಲುವೆಗಳ ಆಧುನೀಕರಣ ಮಾಡಲಾಗಿತ್ತು ಎಂದು ಬೊಮ್ಮಾಯಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ ಮತ್ತಿತರು ಉಪಸ್ಥಿತರಿದ್ದರು.












Click it and Unblock the Notifications