Sumalatha: ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ದಿನಾಂಕ ಫಿಕ್ಸ್?
ಮಂಡ್ಯ, ಏಪ್ರಿಲ್ 03: 2019 ರ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳ ವಿರುದ್ಧ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ 7,03,660 ಮತಗಳನ್ನ ಪಡೆದು ಭರ್ಜರಿ ಜಯಗಳಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾನೂನು ತೊಡಕಿನಿಂದಾಗಿ ಬಿಜೆಪಿಗೆ ಬೆಂಬಲ ಸೂಚಿಸಿದ್ದರು.
ಹೌದು, ಬಿಜೆಪಿಗೆ ಬೆಂಬಲ ಘೋಷಣೆ ಮಾಡಿರುವ ಸುಮಲತಾ ತಕ್ಷಣ ಪಕ್ಷ ಸೇರಿದರೆ ಸಂಸದ ಸ್ಥಾನದಿಂದ ಅನರ್ಹಗೊಳ್ಳುತ್ತಿದ್ದರು. ಕಾನೂನು ತೊಡಕುಗಳಿಗೆ ಸಿಲುಕಲು ಬಯಸದ ಅವರು ಬಿಜೆಪಿ ಪಕ್ಷಕ್ಕೆ ಬಾಹ್ಯ ಬೆಂಬಲ ನೀಡಿದ್ರು, ಇದೀಗ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಹೊತ್ತಲಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸಭಾ ಚುನಾವಣೆ ಹೊತ್ತಲಿ ಬಾಹ್ಯ ಬೆಂಬಲ ನೀಡಿದ್ದ ಸುಮಲತಾ ಅಂಬರೀಶ್ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಸೇರ್ಪಡೆ ಕುರಿತು ಈ ಹಿಂದೆ ಮಾತನಾಡಿದ್ರು, ಇದೀಗ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆಗೆ ಮಾತುಕತೆ ನಡೆಸಿದ ಬಳಿಕ ಏಪ್ರಿಲ್ 6 ರಂದು ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಅಂತಿಮ ನಿರ್ಧಾರ ಕೈಗೊಳ್ಳುವ ಸಲುವಾಗಿ ಸುಮಲತಾ ಅಂಬರೀಶ್ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದು, ಸುಮಲತಾ ಅಂಬರೀಶ್ ಅವರು ತಮ್ಮ ಅಭಿಮಾನಿಗಳಿಗೆ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.
ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ,
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.
ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.
ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.
ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಇನ್ನೂ ಕೆಲವೇ ಕ್ಷಣದಲ್ಲಿ ತಮ್ಮ ನಿರ್ಧಾರವನ್ನ ಪ್ರಕಟಿಸಲಿದ್ದಾರೆ.












Click it and Unblock the Notifications