ಮಂಡ್ಯ: ಹೋಳಿ ಪಾರ್ಟಿಯಲ್ಲಿ ಊಟ ಸೇವಿಸಿ ಓರ್ವ ವಿದ್ಯಾರ್ಥಿ ಸಾವು, ಹಲವರು ಅಸ್ವಸ್ಥ: ಸಿಎಂ ಕೊಟ್ಟ ಸೂಚನೆ ಏನು?
ಮಂಡ್ಯ, ಮಾರ್ಚ್ 17: ಕಲುಷಿತ ಆಹಾರ ಸೇವನೆಯಿಂದಾಗಿ ಓರ್ವ ಮೇಘಾಲಯದ ವಿದ್ಯಾರ್ಥಿ ಸಾವನ್ನಪ್ಪಿದ್ದು, 25 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ಚಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ ಕಾಗೇಪುರ ಗ್ರಾಮದ ಗೋಕುಲ ವಿದ್ಯಾ ಸಂಸ್ಥೆಯಲ್ಲಿ ನಡೆದಿದೆ. ಮೇಘಾಲಯ ಮೂಲದ ಕೇರ್ ಲಾಂಗ್ (14) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೋಳಿ ಪಾರ್ಟಿಯಲ್ಲಿ ಹೆಚ್ಚಾಗಿದ್ದ ಆಹಾರವನ್ನು ಸೇವಿಸಿ 29 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಆ ಪೈಕಿ 14 ವರ್ಷದ ಓರ್ವ ಬಾಲಕ ಸಾವನ್ನಪ್ಪಿದ್ದಾರೆ. ವಿಷ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಖಾಸಗಿ ಶಾಲೆ ನಡೆಸುತ್ತಿರುವ ಅನಧಿಕೃತ ಹಾಸ್ಟೆಲ್‌ನ 28 ವಿದ್ಯಾರ್ಥಿಗಳನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿಯನ್ನು ಮೇಘಾಲಯ ಮೂಲದ ಕೆರ್ಲಾಂಗ್ ಎಂದು ಗುರುತಿಸಲಾಗಿದೆ.

ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, 1989 ರಿಂದ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಯು ಹಾಸ್ಟೆಲ್ ನಡೆಸಲು ಪರವಾನಗಿಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಶಾಲಾ ಕಟ್ಟಡದ ಮೊದಲ ಮಹಡಿಯಲ್ಲಿ ಮಕ್ಕಳಿಗೆ ಶೌಚಾಲಯ ಸೇರಿದಂತೆ ಸರಿಯಾದ ಮೂಲಸೌಕರ್ಯಗಳಿಲ್ಲದೆ ಆಡಳಿತ ಮಂಡಳಿಯು ಹಾಸ್ಟೆಲ್ ಅನ್ನು ಕಾನೂನುಬಾಹಿರವಾಗಿ ನಡೆಸುತ್ತಿತ್ತು ಎಂದು ತಿಳಿದು ಬಂದಿದೆ.
ವಿದ್ಯಾರ್ಥಿ ಸಾವಿಗೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗೆ ಸಂತಾಪ ವ್ಯಕ್ತಪಡಿಸಿದ ಹೆಚ್ ಡಿ ಕುಮಾರಸ್ವಾಮಿ
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿವರು; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿಕೊಂಡರು.
ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವು ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸ್ಪಷ್ಟ ನೀಡಿರುವ ಸಚಿವರು; ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಕಠಿಣ ನಿಗಾ ಇಡಬೇಕು ಎಂದು ತಹಶೀಲ್ದಾರ್ ಅವರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಘಟನೆ ಬಗ್ಗೆ ನನಗೆ ಮಾಹಿತಿ ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಈ ವಸತಿ ಶಾಲೆಯಲ್ಲಿ ಬಹುತೇಕ ಹೊರರಾಜ್ಯಗಳ ಮಕ್ಕಳೇ ಇದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications