ಮಂಡ್ಯದಲ್ಲಿ ನಟ ದರ್ಶನ್ ಕಾರಿನ ಮೇಲೆ ಕಲ್ಲು ತೂರಾಟ
ಮಂಡ್ಯ, ಏಪ್ರಿಲ್ 04 : ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ನಟ ದರ್ಶನ್ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರವಾಗಿ ದರ್ಶನ್ ಪ್ರಚಾರ ನಡೆಸುತ್ತಿದ್ದಾರೆ.
ಗುರುವಾರ ರಾತ್ರಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿ ಗ್ರಾಮದಲ್ಲಿ ದರ್ಶನ್ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ದರ್ಶನ್ ಕಾರಿಗೆ ಬೆಂಗಾವಲಾಗಿದ್ದ ಪೊಲೀಸರ ವಾಹನಗಳಿಗೂ ಕಲ್ಲು ಬಿದ್ದಿದೆ.

ಯಾರು ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ಖಚಿತವಾಗಿಲ್ಲ. ದರ್ಶನ್ ಅವರಿಗೆ ಯಾವುದೇ ಹಾನಿಯಾಗಿಲ್ಲ. ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿಯಾಗಿದ್ದರಿಂದ ಎಲ್ಲಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂಬುದನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.
ಕೆಲವು ದಿನಗಳ ಹಿಂದೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಬಳಿಕ ಬೆಂಗಳೂರಿನಲ್ಲಿರುವ ನಟ ದರ್ಶನ್ ನಿವಾಸದ ಮೇಲೆ ಕಲ್ಲು ತೂರಲಾಗಿತ್ತು.
ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಕಣದಲ್ಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಏಪ್ರಿಲ್ 18ರಂದು ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ. ಸುಮಲತಾ ಅವರಿಗೆ ಬಿಜೆಪಿ ಸಹ ಬೆಂಬಲ ನೀಡಿದ್ದು, ದರ್ಶನ್ ಮತ್ತು ಯಶ್ ಅವರು ಸುಮಲತಾ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ.












Click it and Unblock the Notifications