ಟಿಪ್ಪು ಜಯಂತಿ ಆಚರಣೆ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ, ಪಾಲಿಸಬೇಕಾದ ಆದೇಶಗಳೇನು..?
ಮಂಡ್ಯ, ನವೆಂಬರ್ 10: ತೀವ್ರ ವಿವಾದಗಳ ನಡುವೆಯೇ ಟಿಪ್ಪು ಜಯಂತಿ ಆಚರಣೆಗೆ ನಡೆಯುತ್ತಿದ್ದು, ಟಿಪ್ಪು ವಕ್ಫ್ ಎಸ್ಟೇಟ್ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯ ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು ವಿವಾದದ ಹಿನ್ನೆಲೆಯಲ್ಲಿ 2019ರಲ್ಲೇ ಹಿಂಪಡೆಯಲಾಗಿತ್ತು. ಇದೀಗ ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಈ ಬಾರಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ ಎಂದು ತಿಳಿಸಲಾಗಿತ್ತು.

ರಾಜ್ಯ ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆ ಇಲ್ಲದ ಕಾರಣ ಟಿಪ್ಪು ವಕ್ಫ್ ಎಸ್ಟೇಟ್ ಇಂದು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಇಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ತಹಶೀಲ್ದಾರ್‌ರ ಆದೇಶದಲ್ಲಿ ಏನಿದೆ..?
ಟಿಪ್ಪು ಜಯಂತಿ ಆಚರಣೆ ಹೆಸರಿನಲ್ಲಿ ಶ್ರೀರಂಗಪಟ್ಟಣದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ , ಯಾವುದೇ ಘೋಷಣೆ ಕೂಗದಂತೆ, ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ ಸಿಡಿಸದಂತೆ ಆದೇಶದಲ್ಲಿ ತಿಳಿಸಲಾಗಿದೆ. ಇಂದು ಬೆಳಗ್ಗೆ 6 ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.
ಟಿಪ್ಪು ಜಯಂತಿ ಆಚರಣೆಯಲ್ಲಿ ಸರ್ಕಾರದ ನಿಲುವೇನು..?
ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತರಲಾಗಿತ್ತು. ಇದನ್ನು ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಮತ್ತೆ ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್ ತಿಳಿಸಿದ್ದರು.












Click it and Unblock the Notifications