ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ನಾಲ್ವರು ಸಾವು
ಮಂಡ್ಯ, ಏಪ್ರಿಲ್ 03: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಾವಿನ ಸರಣಿ ನಿಲ್ಲುವಂತೆ ಕಾಣುತ್ತಿಲ್ಲ. ಸಂಚಾರಿ ಪೊಲೀಸರು ಎಷ್ಟೇ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡರೂ ಕೂಡ ಅಪಘಾತ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂದು (ಏಪ್ರಿಲ್ 03) ಗುರುವಾರದಂದು ಕೂಡ ಭೀಕರ ಅಪಘಾತ ಸಂಭವಿಸಿದ್ದು, ಒಂದಲ್ಲಾ ಎರಡಲ್ಲಾ ಬರೋಬ್ಬರಿ ನಾಲ್ವರು ದಾರುಣವಾಗಿ ರಸ್ತೆಯಲ್ಲೇ ಸಾವನ್ನಪ್ಪಿದ್ದಾರೆ.
ಕೆಎಸ್ಆರ್ಟಿಸಿ ಐರಾವತ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಅದೇ ತಾಲೂಕಿನ ತೂಬಿನಕೆರೆ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರು ಸಾವನ್ನಪ್ಪಿದ್ದು ಮೃತರು ಒಂದೇ ಕುಟುಂಬದವರು ಎಂದು ಗುರುತಿಸಲಾಗಿದೆ.

ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ (50) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ತೂಬಿನಕೆರೆ ಬಳಿ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿದೆ. ಹೀಗಾಗಿ ಮತ್ತೆ ಎಕ್ಸ್ಪ್ರೆಸ್ ಹೈವೇಗೆ ಚಾಲಕ ಕಾರು ತಿರುಗಿಸಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್ಟಿಸಿ ಐರಾವತ ಬಸ್ ಚಾಲನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಐರಾವತ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಭೀಕರ ರಸ್ತೆ ಅಪಘಾತ ನಡೆದ ಸ್ಥಳಕ್ಕೆ ದಕ್ಷಿಣ ವಲಯ ಡಿಐಜಿ ಬೋರಲಿಂಗಯ್ಯ, ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಸ್ಥಳೀಯರು ಹಾಗೂ ಕ್ರೇನ್ ಸಹಾಯದಿಂದ ಅಪಘಾತಗೊಂಡ ಕೆಎ 09, ಎಂಜಿ 4263 ಸಂಖ್ಯೆಯ ಕಾರನ್ನು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಿಂದ ತೆರವು ಮಾಡಲಾಗಿದೆ.












Click it and Unblock the Notifications