ಮಂಡ್ಯ ಜಿ. ಅಂಬಿಗರಹಳ್ಳಿಯಲ್ಲಿ ಸಿಎಂ ಬೊಮ್ಮಾಯಿಯಿಂದ ರಾಹುಲ್ ಗಾಂಧಿಗೆ ತಿಳಿವಳಿಕೆ ಪಾಠ
ಮಂಡ್ಯ, ಅಕ್ಟೋಬರ್, 16: ''ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಇಡೀ ಭಾರತದಲ್ಲೇ ನಡೆಯದ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಅಂಕಿ-ಅಂಶಗಳನ್ನು ತಿಳಿದು ಮಾತನಾಡುವುದು ಒಳಿತು, ಎಲ್ಲಾ ದಾಖಲೆಗಳನ್ನು ರಾಹುಲ್ ಗಾಂಧಿಗೆ ಕಳಿಸಲಾಗುವುದು'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಯುವ ಮುಖಂಡ ರಾಹುಲ್ ಗಾಂಧಿಗೆ ಮಂಡ್ಯದಲ್ಲಿ ತಿರುಗೇಟು ನೀಡಿದರು. ಹಾಗೆಯೇ ಇದುವರೆಗೂ ಸಿದ್ದರಾಮಯ್ಯ ಹೇಳಿರುವುದು ಸತ್ಯವಾಗಿಲ್ಲ ಎಂದು ಹರಿಹಾಯ್ದರು.
ಕೆ.ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿಯಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲೇ ಅತಿ ಹೆಚ್ಚು ಭ್ರಷ್ಟಾಚಾರ ನಡೆದಿದೆ. ನಿಮ್ಮ ಆಡಳಿತದಲ್ಲಿ ನಡೆದಿರುವುದನ್ನು ನೋಡಿಕೊಳ್ಳಿ, ನಂತರ ಬೇರೆಯವರ ಬಗ್ಗೆ ಮಾತನಾಡಿ. ಧೀರ್ಘ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಕರು, ಪೊಲೀಸರು, ಅಭಿಯೋಜಕರು ಸೇರಿದಂತೆ ಎಲ್ಲ ನೇಮಕಾತಿಗಳಲ್ಲೂ ಭಾರೀ ಭ್ರಷ್ಟಾಚಾರ ನಡೆದಿದೆ. ಈ ವಿಚಾರವನ್ನು ತಿಳಿಯದೆ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ.ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಎಲ್ಲ ಪ್ರಕರಣಗಳು ತನಿಖೆ ಹಂತದಲ್ಲಿವೆ. ಪಿಯುಸಿ ಪ್ರಶ್ನೆ ಪತ್ರಿಕೆಗಳು ಸಹ ಸೋರಿಕೆ ಆಗಿದ್ದವು. ಎಲ್ಲದರ ಬಗ್ಗೆ ಮಾಹಿತಿ ಪಡೆದುಕೊಂಡು ಮಾತನಾಡುವುದು ಒಳಿತು. ಅದು ಬಿಟ್ಟು ಜನರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ," ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ವಿರುದ್ಧ ಸಿಎಂ ಕಿಡಿ
"ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈವರೆಗೂ ಹೇಳಿರುವುದೆಲ್ಲವೂ ಸತ್ಯವಾಗಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು 130ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರ ಹಿಡಿಯುತ್ತೇವೆ ಎಂದಿದ್ದರು. 70 ರಿಂದ 80 ಸ್ಥಾನಕ್ಕಿಂತಲೂ ಹೆಚ್ಚು ಸ್ಥಾನವನ್ನು ಕಾಂಗ್ರೆಸ್ ಗೆಲ್ಲಲಿಲ್ಲ. ನಮ್ಮ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರಪ್ಪನ ಆಣೆಗೂ ಮುಖ್ಯಮಂತ್ರಿ ಆಗಲ್ಲ ಎಂದಿದ್ದರು. ಕುಮಾರಸ್ವಾಮಿಯ ನಂತರ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದನ್ನು ರಾಜ್ಯದ ಜನರು ನೋಡಿದ್ದಾರೆ. ಹೀಗಾಗಿ ಅವರು ಹೇಳುವುದೆಲ್ಲವೂ ಸತ್ಯ ಆಗುವುದಿಲ್ಲ," ಎಂದು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

ಶಾಶ್ವತ ಪರಿಹಾಕರಕ್ಕೆ ಚಿಂತನೆ- ಸಿಎಂ
ರಾಜ್ಯದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಇದರಿಂದ ಸಾಕಷ್ಟು ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಕೆರೆ-ಕಟ್ಟೆಗಳು ತುಂಬಿ ಹರಿದು ಕೋಡಿಗಳು ಬಿದ್ದಿವೆ. ಇದಕ್ಕೆ ಧೀರ್ಘಕಾಲದ ಶಾಶ್ವತ ಹಾಗೂ ತಕ್ಷಣ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ಯೋಜನೆ ರೂಪಿಸಲು ಚಿಂತನೆ ನಡೆಸಲಾಗಿದೆ. ಈಗಾಗಲೇ 600 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇನೆ. ಧೀರ್ಘ ಕಾಲಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಮಳೆ ಹಾನಿಯ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೇವೆ ಎಂದರು.

ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ
ಮಂಡ್ಯ ಜಿಲ್ಲೆಯಲ್ಲೂ ಸಹ ಹತ್ತಾರು ಕೆರೆಗಳು ತುಂಬಿರುವುದನ್ನು ಗಮನಿಸಿದ್ದೇನೆ. ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ನಾಳೆ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಓಗಳ ಜೊತೆಗೆ ವೀಡಿಯೋ ಕಾನ್ಫರೆನ್ಸ್ ನಡೆಸಲಾಗುವುದು. ಎಲ್ಲೆಲ್ಲಿ ತುರ್ತು ಅಗತ್ಯವಿದೆಯೋ ಅಲ್ಲಿ ತಕ್ಷಣದ ಸೀಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

2 ಲಕ್ಷ ಪರಿಹಾರ ಘೋಷಣೆಗೆ ಸೂಚನೆ
ಹಾಸನದ ಅರಸೀಕೆರೆ ಬಳಿ ನಡೆದ ಅಪಘಾತದಲ್ಲಿ ಮಡಿದವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಸಚಿವ ಕೆ.ಸಿ. ನಾರಾಯಣಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications