ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಕ್ರಮ; ಎಚ್‌ಡಿಕೆ ಭರವಸೆ
ಕಾವೇರಿ ವಿಚಾರದಲ್ಲಿ ರಾಜ್ಯ ಮತ್ತು ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಮೊದಲು ಕಾರ್ಯೋನ್ಮುಖನಾಗುವುದಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಂಡ್ಯ ಜಿಲ್ಲೆಗೆ ಮೊದಲ ಬಾರಿಗೆ ಶನಿವಾರ ಭೇಟಿ ನೀಡಿ, ಜಿಲ್ಲೆಯ ಗಡಿ ಭಾಗ ನಿಡಘಟ್ಟದಿಂದ ರೋಡ್‌ಶೋ ಮೂಲಕ ಪಟ್ಟಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರಿ, ಲೋಕಸಭಾ ಚುನಾವಣಾ ವೇಳೆ ನಾನು ಮಾತು ಕೊಟ್ಟಂತೆ ಕಾವೇರಿ ಸಮಸ್ಯೆಯನ್ನು ಇತ್ಯರ್ಥಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದರು.
ಮಾಜಿ ಪ್ರದಾನಿ ಎಚ್.ಡಿ. ದೇವೇಗೌಡರ ಸಲಹೆ ಮೇರೆಗೆ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ನೀವು ಕೊಟ್ಟ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡು ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.
ಸ್ವಲ್ಪ ಸಮಯ ಕೊಡಿ
ಮಂಡ್ಯ ಜಿಲ್ಲೆ 50 ವರ್ಷಗಳ ಹಿಂದೆ ಹೇಗಿತ್ತೋ ಹಾಗೆಯೇ ಇದೆ. ಎಲ್ಲವನ್ನೂ ಸರಿಪಡಿಸಲು ನನಗೆ ಸ್ವಲ್ಪ ಸಮಯ ಕಾಲಾವಕಾಶ ನೀಡುವಂತೆ ಮನವಿ ಮಾಡಿದ ಅವರು, ಎರಡು ಮೂರು ತಿಂಗಳು ಕಾಲಾವಕಾಶ ಕೊಡಬೇಕು. ಯಾವ ರೀತಿ ಅಭಿವೃದ್ಧಿ ಮಾಡಬೇಕು ಎಂಬ ಬಗ್ಗೆ ಚಿಂತನೆ ನಡೆಸಿ ನನ್ನ ಮೇಲೆ ಜಿಲ್ಲೆಯ ಜನತೆ ಇಟ್ಟಿರುವ ವಿಶ್ವಾಸದ ಋಣವನ್ನು ತೀರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಉದ್ಯೋಗ ಸೃಷ್ಟಿಗೆ ಆದ್ಯತೆ
ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ರೈತರ ಬದುಕಿನಲ್ಲಿ ಬೆಳಕು ಕಾಣುವಂತಹ ಪ್ರಯತ್ನ ಮಾಡಿದ್ದೇನೆ. ಅದೇ ರೀತಿ ಈಗ ಯುವಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಪ್ರಧಾನಿ ನರೇಂದ್ರಮೋದಿಯವರು ನಮ್ಮ ತಂದೆಯವರ ಮೇಲೆ ಇಟ್ಟಿರುವ ಗೌರವ ಮತ್ತು ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವಾರು ರೀತಿಯಲ್ಲಿ ಆರ್ಥಿಕ ಶಕ್ತಿಯನ್ನು ಬಲಪಡಿಸುವ ಅವಕಾಶಗಳು ನನ್ನ ಮುಂದಿವೆ. ಎಲ್ಲ ವಿಚಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಿ ರೂಪುರೇಷೆ ಸಿದ್ಧಪಡಿಸುವುದಾಗಿ ಭರವಸೆ ನೀಡಿದರು.
ಮಂಡ್ಯ ಜಿಲ್ಲೆಗೂ ನಮಗೂ ಯಾವುದೋ ಒಂದು ಪೂರ್ವಜನ್ಮದ ಸಂಬಂಧ ಇದೆ. ಅದಕ್ಕಾಗಿ ನಾನು ಮತ್ತು ನನ್ನ ಕುಟುಂಬ ಈ ಜಿಲ್ಲೆಯ ಜನರನ್ನು ಹೃದಯದಲ್ಲಿಟ್ಟುಕೊಂಡು ಪೂಜಿಸುತ್ತಿದ್ದೇವೆ. ಪ್ರಧಾನಿ ನರೇಂದ್ರಮೋದಿಯವರ ನಾಯಕತ್ವದಲ್ಲಿ ನಿಮ್ಮ ಆಶೀರ್ವಾದದ ಬಲದಿಂದ ಎರಡು ದೊಡ್ಡ ಇಲಾಖೆಗಳನ್ನು ನೀಡಿದ್ದಾರೆ. ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವನಾಗಿ ಕೆಲಸ ನಿರ್ವಹಣೆ ಮಾಡುವಂತಹ ಜವಾಬ್ದಾರಿ ಕೊಟ್ಟಿದ್ದಾರೆ. ರೈತರ ಬದುಕನ್ನು ಸರಿಪಡಿಸಬೇಕೆಂಬುದು ನನ್ನ ಆಸೆಯಾಗಿದೆ ಎಂದು ಹೇಳಿದರು.
ಜಿಲ್ಲೆಯ ಜವಾಬ್ದಾರಿಗೆ ಮಗನಿಗೆ ಕೊಟ್ಟ ಎಚ್‌ಡಿಕೆ
ನಾನು ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡಬೇಕಿರುವುದರಿಂದ ಜಿಲ್ಲೆಯಲ್ಲಿನ ಜನರು, ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸಲು ನಿಖಿಲ್‌ಕುಮಾರಸ್ವಾಮಿ ಅವರಿಗೆ ಜವಾಬ್ದಾರಿ ನೀಡಿದ್ದೇನೆ. ಜಿಲ್ಲೆಯಲ್ಲಿ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು.
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಖಾತೆ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಅಗತ್ಯವಿದೆ. ಹೀಗಾಗಿ ನಾನು 15 ದಿನಗಳ ಕಾಲ ಸತತವಾಗಿ ಅದನ್ನು ತಿಳಿಯುವ ಪ್ರಯತ್ನ ಮಾಡುತ್ತೇನೆ. ಅಲ್ಲಿಯವರೆಗೆ ನನಗೆ ಸ್ವಲ್ಪ ಕಾಲಾವಕಾಶ ನೀಡಿ. ನಂತರ ನಾನು ಸಮಯ ಸಿಕ್ಕಾಗಲೆಲ್ಲಾ ಜಿಲ್ಲೆಯ ಪ್ರತೀ ಹಳ್ಳಿ ಹಳ್ಳಿಗೂ ಭೇಟಿ ನೀಡಿ ನಿಮ್ಮಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.












Click it and Unblock the Notifications