ಮಂಗಳೂರು, ಜನವರಿ 4: ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಗೆ ಎಡಿಜಿಪಿ ಕಮಲ್ ಪಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮನಾತನಾಡಿದ ಅವರು ಪ್ರಕರಣ ನಡೆದ 5 ಗಂಟೆಯ ಒಳಗಾಗಿ ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಿಗೆ ಎಡಿಜಿಪಿ ಕಮಲ್ ಪಂತ್ 1.20 ಲಕ್ಷ ರೂಪಾಯಿ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಾಣ ಒತ್ತೆ ಇಟ್ಟು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ 4 ಮಂದಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ತನಿಖೆಯಲ್ಲಿ ಎಲ್ಲಾ ಸತ್ಯಾತ್ಯತೆಯನ್ನು ಬಯಲಿಗೆಳೆಯುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ , "ಕಾಟಿಪಳ್ಳ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ನಾಲ್ಕು ಆರೋಪಿಗಳ ಬಂಧನವಾಗಿದೆ. ಗುಂಡೇಟಿನಿಂದಾಗಿ ಇಬ್ಬರು ಆರೋಪಿಗಳ ಕಾಲಿಗೆ ಗಾಯವಾಗಿದೆ," ಎಂದು ವಿವರ ನೀಡಿದರು.
"ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನವಾಜ್ ಅಲಿಯಾಸ್ ಪಿಂಕಿ ನವಾಜ್ ಮತ್ತು ನೌಷಾದ್ ಕಾಲಿಗೆ ಗುಂಡೇಟು ತಗುಲಿ ಗಾಯವಾಗಿದೆ. ಆರೋಪಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು," ಎಂದು ಅವರು ಹೇಳಿದರು.
ಬಂಟಿಂಗ್ಸ್ ವಿಚಾರದಲ್ಲಿ ನಡೆದ ಗಲಾಟೆ ಈ ಕೊಲೆ ಪ್ರಕರಣಕ್ಕೆ ಕಾರಣ ಎನ್ನುವ ಮಾಹಿತಿ ಇದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಬಯಲಿಗೆ ಬರಲಿದೆ ಎಂದು ಸುರೇಶ್ ಹೇಳಿದರು.
Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರ.subscribe to Kannada Oneindia.
ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!