ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು, ಮಾರ್ಚ್ 18 : ಮೂಡುಬಿದಿರೆಯಲ್ಲಿರುವ ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಪ್ರೀತಿ (17) ಎಂದು ಗುರುತಿಸಲಾಗಿದೆ. ತುಮಕೂರು ಮೂಲದ ಪ್ರೀತಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ಸೋಮವಾರ ಬೆಳಗ್ಗೆ ಪ್ರೀತಿ ಕಾಲೇಜಿಗೆ ಹೋಗಿದ್ದಳು. ಮಧ್ಯಾಹ್ನ ಊಟಕ್ಕೆಂದು ಹಾಸ್ಟೆಲ್‌ಗೆ ವಾಪಸ್ ಆಗಿದ್ದಳು. ಬಳಿಕ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟಿದ್ದಾಳೆಯೇ? ಎಂದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಹಲವು ಪ್ರಕರಣಗಳು ನಡೆದಿವೆ : ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಇದೇ ಮೊದಲಲ್ಲ. ಇಂತಹ ಪ್ರಕರಣಗಳು ನಡೆದಿವೆ.
* 2018ರ ಸೆಪ್ಟೆಂಬರ್ 13ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿನುತಾ (18) ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
* 2018ರ ಜನವರಿಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರಚನಾ ಆತ್ಮಹತ್ಯೆ ಮಾಡಿಕೊಂಡಿದ್ದಳು
* 2017ರಲ್ಲಿ ನಡೆದ ಕಟೀಲು ನಿವಾಸಿ ಕಾವ್ಯ ಪೂಜಾರಿ ಆತ್ಮಹತ್ಯೆ ಪ್ರಕರಣದ ಬಗ್ಗೆ ರಾಜ್ಯಾದ್ಯಂತ ಚರ್ಚೆ ನಡೆದಿತ್ತು.












Click it and Unblock the Notifications