Sowjanya Murder Case: ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ತೀರ್ಪು ಪ್ರಕಟ
ಮಂಗಳೂರು, ಜೂನ್ 16: ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಆತ್ಯಾಚಾರ ಹಾಗೂ ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದೆ. ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್‌ನನ್ನು ದೋಷ ಮುಕ್ತ ಎಂದು ಆದೇಶ ಹೊರಡಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಸಿ.ಬಿ ಪ್ರಕರಣದ ವಿಚಾರಣೆ ನಡೆಸಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿ ಸಂತೋಷ್ ರಾವ್‌ನನ್ನು ಬಿಡುಗಡೆ ಮಾಡಲಾಗಿದೆ.

ಧರ್ಮಸ್ಥಳದ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ 17 ವರ್ಷದ ಎರಡನೇ ಪುತ್ರಿ ಸೌಜನ್ಯ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಅಕ್ಟೋಬರ್ 9, 2012ರಂದು ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ದಾರಿ ಮಧ್ಯದ ಕಾಡಿನಲ್ಲಿ ಸೌಜನ್ಯಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈಯಲಾಗಿತ್ತು.
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗಿತ್ತು. ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಸಾಲು ಸಾಲು ಹೋರಾಟಗಳು ನಡೆದಿದ್ದವು.
ಈ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಕೊಲೆ ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಆರೋಪಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಕೃತ್ಯ ನಡೆಸಿದ್ದ ಎನ್ನಲಾಗಿತ್ತು.
ಬಳಿಕ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆಗೊಳಿಸಲಾಗಿತ್ತು. ಹಲವು ಹೋರಾಟದ ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಹನ್ನೊಂದು ವರ್ಷಗಳ ಬಳಿಕ ಸಿಬಿಐ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಆದೇಶ ಹೊರಡಿಸಿದೆ.












Click it and Unblock the Notifications