ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ 'ಕಾಂಗ್ರೆಸ್ -ಬಿಜೆಪಿ' ಹೊಯ್ ಕೈ
ಮಂಗಳೂರು, ಡಿಸೆಂಬರ್ 9: ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳದಲ್ಲಿ ಭಾನುವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಈ ಗಲಾಟೆ ನಡೆದಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮೇಲೆ ಮಾಜಿ ಸಚಿವ ರಮಾನಾಥ ರೈ ಆಪ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಕೈ ಮಾಡಲು ಮಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು, ಘರ್ಷಣೆ ಆಗಿದೆ.
ಪೊಲೀಸರ ಮಧ್ಯೆ ಸಚಿವ ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕಾರ್ಯಕರ್ತರು ತಳ್ಳಾಡಿದ್ದಾರೆ. ಸಂಸದ ನಳಿನ್ ಕುಮಾರ್, ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ ಶೆಟ್ಟಿ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಚಂದ್ರಪ್ರಕಾಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಗೂಂಡಾಗಿರಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.












Click it and Unblock the Notifications