ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿಯ ಕಿಶೋರ್ ಬಿ. ಆರ್. ಜಯಭೇರಿ
ಮಂಗಳೂರು, ಅಕ್ಟೋಬರ್ 24: ಕರ್ನಾಟಕದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ನಡೆದಿದ್ದ ಉಪ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆದಿತ್ತು. ಶೇ 97.81ರಷ್ಟು ಮತದಾನವಾಗಿತ್ತು. ಚುನಾವಣಾ ಕಣದಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಒಟ್ಟು ನಾಲ್ವರು ಅಭ್ಯರ್ಥಿಗಳಿದ್ದಾರೆ.
12.45ರ ಅಪ್‌ಡೇಟ್:ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಬಿ. ಆರ್. ಜಯಗಳಿಸಿದ್ದಾರೆ. ಕಾಂಗ್ರೆಸ್‌ನ ರಾಜು ಪೂಜಾರಿ ವಿರುದ್ಧ ಕಿಶೋರ್ ಗೆಲುವು ಸಾಧಿಸಿದ್ದು, ಬಿಜೆಪಿ ಸೀಟನ್ನು ಉಳಿಸಿಕೊಂಡಿದೆ.
ಗುರುವಾರ ಬೆಳಗ್ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದೆ. ಚುನಾವಣಾ ವೀಕ್ಷಕರಾದ ಪಂಕಜ್ ಕುಮಾರ್ ಪಾಂಡೆ ನೇತೃತ್ವದಲ್ಲಿ ಎಣಿಕೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದಾರೆ.

ಚುನಾವಣಾ ಕಣದಲ್ಲಿ ಬಿಜೆಪಿಯ ಕಿಶೋರ್ ಬಿ. ಆರ್., ಕಾಂಗ್ರೆಸ್‌ನ ರಾಜು ಪೂಜಾರಿ, ಎಸ್‌ಡಿಪಿಐನ ಅನ್ವರ್ ಸಾದತ್, ಪಕ್ಷೇತರ ಅಭ್ಯರ್ಥಿಯಾಗಿ ದಿನಕಲ್ ಉಳ್ಳಾಲ ಇದ್ದಾರೆ. ಬಿಜೆಪಿ ನಾಯಕನ ರಾಜೀನಾಮೆಯಿಂದ ತೆರವಾದ ಸ್ಥಾನ ಯಾವ ಪಕ್ಷದ ಪಾಲಾಗಲಿದೆ? ಎಂದು ಕಾದು ನೋಡಬೇಕಿದೆ.
ವಿಧಾನ ಪರಿಷತ್ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ನಡೆದಿದೆ. ಆದ್ದರಿಂದ ಮತಗಳ ಎಣಿಕೆ ಸಂಜೆಯ ತನಕ ಸಾಗಲಿದೆ. ರಾತ್ರಿ ಸಂಪೂರ್ಣ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಮೊದಲ ಪ್ರಾಶಸ್ತ್ಯದ ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿ ವಿಜೇತ ಎಂದು ಘೋಷಣೆ ಮಾಡಲಾಗುತ್ತದೆ.
ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ: ಬಿಜೆಪಿಯಿಂದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದರು. ಅವರ ಅವಧಿ 5/1/2028ರ ತನಕ ಇತ್ತು. ಆದರೆ ಅವರು ಜೂನ್ 24ರಂದು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಉಪ ಚುನಾವಣೆ ನಡೆದಿದೆ.
ವಿಧಾನ ಪರಿಷತ್ ಸದಸ್ಯರಾಗಿದ್ದರೂ ಸಹ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಬಿಜೆಪಿ 2024ರ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಸಿತ್ತು. 7,32,234 ಮತಗಳನ್ನು ಪಡೆದು ಅವರು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ (4,73,059 ಮತ) ಸೋಲಿಸಿ ಸಂಸದರಾಗಿ ಆಯ್ಕೆಗೊಂಡರು. ಬಳಿಕ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದರು.












Click it and Unblock the Notifications